ಹೊಸಪೇಟೆ: ಸಚಿವ ಆನಂದ್ಸಿಂಗ್ ನಾಮಪತ್ರ ಸಲ್ಲಿಕೆ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಏ. 15
ಮೇ 5ರಂದು ನಡೆಯಲಿರುವ ವಿಜಯನಗರ (ಹೊಸಪೇಟೆ) ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಆನಂದ್ಸಿಂಗ್ ಸೋಮವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಇದ್ದರು.
ಸಚಿವ ಆನಂದ್ ಸಿಂಗ್ ಬೆಳಗ್ಗೆ ವಿಶ್ವ ವಿಖ್ಯಾತ ಹಂಪಿಗೆ ತೆರಳಿ ವಿರೂಪಾಕ್ಷೇಶ್ವರ ಸ್ವಾಮಿ, ಪಂಪಾದೇವಿ ಮತ್ತು ತಾಯಿ ಭುವನೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಅನಂತರ ನಗರದಲ್ಲಿರುವ ಕೆಲವು ಹಿರಿಯರ ಆಶೀರ್ವಾದ ಪಡೆದರು. ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಇಲ್ಲಿನ ಪಟೇಲ್ ನಗರದಲ್ಲಿರುವ ಬಿಜೆಪಿ ಕಚೇರಿಯಿಂದ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ, ಡಾ. ಡಿ.ಆರ್. ಅಶೋಕ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಗೆಲ್ಲುವ ವಿಶ್ವಾಸ: ನಾಮಪತ್ರ ಸಲ್ಲಿಸಿದ ಬಳಿಕ ಆನಂದ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಈ ಹಿಂದೆ ಕ್ಷೇತ್ರ ಯಾವುದೇ ಅಭಿವೃದ್ಧಿ ಕಾರ್ಯ ಕಂಡಿರಲಿಲ್ಲ. ತಾವು ಬಿಜೆಪಿ ಶಾಸಕನಾಗಿ ಆಯ್ಕೆಗೊಂಡ ಅನಂತರ ವಿಜಯನಗರ ವಿಧಾನ ಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿರುವುದನ್ನು ಕ್ಷೇತ್ರದ ಜನರು ಕಂಡಿದ್ದಾರೆ. ನಮ್ಮ ಅಧಿಕಾರಾವಧಿಯಲ್ಲಿ ನಡೆದ ಅಭಿವೃದ್ಧಿ ಕೆಲಸಗಳೇ ತಮಗೆ ಶ್ರೀರಕ್ಷೆಯಾಗಿದೆ. ಈ ಚುನಾವಣೆಯಲ್ಲಿ ಖಂಡಿತವಾಗಿಯೂ ಮತದಾರರು ತಮ್ಮನ್ನು ಜಯಶೀಲರನ್ನಾಗಿ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.
ಕಾಂಗ್ರೆಸ್ನಿಂದ ವಹಾಬ್ ನಾಮಪತ್ರ: ಕಾಂಗ್ರೆಸ್ ಅಭ್ಯರ್ಥಿ ಎಚ್. ಅಬ್ದುಲ್ ವಹಾಬ್ ಸೋಮವಾರ ಅಪಾರ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಈ ಕ್ಷೇತ್ರದಲ್ಲಿ ಮತದಾರ ತಮ್ಮ ಕೈ ಹಿಡಿಯುತ್ತಾನೆ ಎನ್ನುವ ನಂಬಿಕೆ ಇದೆ. ಈಗಾಗಲೇ ಪಕ್ಷದಲ್ಲಿ ಹಲವು ಹುದ್ದೆಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಪಕ್ಷದಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.
ಸಂಯುಕ್ತ ರಾಣಿ ಸಿಂಗ್: ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ರಾಣಿ ಸಿಂಗ್ ಸಾವಿರಾರು ಕಾರ್ಯಕರ್ತರು, ಬೆಂಬಲಿಗರೊಂದಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕ್ಷೇತ್ರದ ಜನತೆಗೆ ಮೂಲಸೌಲಭ್ಯ ಒದಗಿಸುವುದೇ ತಮ್ಮ ಗುರಿ ಎಂದರು.
ಪಕ್ಷೇತರ ಅಭ್ಯರ್ಥಿಯಾಗಿ ಗೌಸಿಯಾ ಖಾನ್, ಡಾ. ಆರ್.ಜಿ. ಇಮಾನ್ ವೇಲ್ ಸೇರಿದಂತೆ ಒಟ್ಟು 5 ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಹೊಸಪೇಟೆ ನಗರದಲ್ಲಿ ಸೋಮವಾರ ಚುನಾವಣೆ ಕಾವು ಏರಿತ್ತು. ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಸಂಜೆಯಿಂದಲೇ ಕೆಲವು ಕಡೆ ಪ್ರಚಾರ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

