ವೀಕ್ಷಕರ ನೇಮಕ
ಬಳ್ಳಾರಿ: ಬಳ್ಳಾರಿ ನಗರ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಾಣಾಧಿಕಾರಿ ತಿಳಿಸಿದ್ದಾರೆ. ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ಐಎಎಸ್ ಅಧಿಕಾರಿ ಎನ್.ಕೆ. ವಧಾನ್ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ಹಿರಿಯ ಐಎಎಸ್ ಅಧಿಕಾರಿ ಎ.ಟಿ. ಜೇಮ್ಸ್ (ಮೊ. - 73537 65132) ಅವರನ್ನು ನೇಮಿಸಲಾಗಿದೆ. ಈಗಾಗಲೇ ಚುನಾವಣಾ ವೀಕ್ಷಕರು ಕ್ಷೇತ್ರಗಳಿಗೆ ಆಗಮಿಸಿದ್ದಾರೆ. ಚುನಾವಣಾ ವೀಕ್ಷಕರು ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ಲಭ್ಯವಿದ್ದು, ಬಳ್ಳಾರಿ ನಗರ ಮತ್ತು ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆ, ಚುನಾವಣೆ ಹಾಗೂ ಮತ್ತಿತರ ಕುಂದುಕೊರತೆಗಳ ಬಗ್ಗೆ ದೂರು ನೀಡಲು ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ನಾಳೆಯಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ
ಬಳ್ಳಾರಿ: ನಗರದ ಅಲ್ಲೀಪುರ ಕೇಂದ್ರ ಸ್ಥಾವರದಿಂದ ಶುದ್ಧ ನೀರು ಸರಬರಾಜು ಮಾಡುವ ಯಂತ್ರಗಾರದಲ್ಲಿ 500 ಎಚ್.ಪಿ. ರೇಚಕ ಯಂತ್ರಗಳಿಗೆ ಅಳವಡಿಸಿರುವ 2 ಸಂಖ್ಯೆಯ 500 ಎಂ.ಎಂ. ವ್ಯಾಸದ ಬಟರ್‌ಪೈ ವಾಲ್ವ್‌ಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಏ. 20 ಹಾಗೂ 21ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಡಿ.ಎಲ್. ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ಜಲಮಂಡಳಿ, ಪಾಲಿಕೆಯೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಹಿರಿಯ ರಂಗಕಲಾವಿದ ವೀರನಗೌಡ ನಿಧನ
ಬಳ್ಳಾರಿ: ಹಿರಿಯ ರಂಗ ಕಲಾವಿದ, ಗ್ರಾಮೀಣ ಪ್ರತಿಭೆ ಜೆ. ವೀರನಗೌಡ ಅವರು ಹೃದಯಾಘಾತದಿಂದ ಗುರುವಾರ ಚೇಳ್ಳಗುರ್ಕಿ ಗ್ರಾಮದ ಸ್ವನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ವೀರನಗೌಡ ಅವರು ಹಲವು ಬಯಲಾಟ ಹಾಗೂ ನಾಟಕಗಳಲ್ಲಿ ಅಭಿನಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ರಾವಣಾಸುರ, ತ್ರಿಶೂರಾಸುರ, ಭೀಮ ಇತರ ಪಾತ್ರಗಳಲ್ಲಿ ಅಭಿನಯಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರ ಕಲಾ ಸೇವೆಯನ್ನು ಗುರುತಿಸಿ ಮಾಸಾಶನ ಮಂಜೂರು ಮಾಡಿತ್ತು. ಅವರ ನಿಧನಕ್ಕೆ ಶ್ರೀ ಎರ್ರಿತಾತಾ ಕಲಾ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯಕ್ರಿಯೆ ಏ. 19ರಂದು ಬೆಳಗ್ಗೆ 9.30ಕ್ಕೆ ಬಳ್ಳಾರಿ ತಾಲೂಕಿನ ಚೇಳ್ಳಗುರ್ಕಿ ಗ್ರಾಮದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಕೆ. ಹಂಪಮ್ಮ ನಿಧನ
ಹೊಸಪೇಟೆ: ನಗರದ ಶಾರದಾ ಪುಸ್ತಕಾಲಯದ ಮಾಲೀಕ ಕುಡುತಿನಿ ವೆಂಕಟೇಶ್ ಅವರ ಮಾತೋಶ್ರಿ ಕೆ. ಹಂಪಮ್ಮ(84) ಗುರುವಾರ ಬೆಳಗ್ಗೆ 9 ಗಂಟೆಗೆ ನಿಧನರಾಗಿದ್ದಾರೆ. ಅವರಿಗೆ ನಾಲ್ವರು ಪುತ್ರರು, ಮೂವರು ಪುತ್ರಿಯರು, 19 ಮೊಮ್ಮಕ್ಕಳು, 30 ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳು ಇದ್ದಾರೆ. ಅವರ ಅಂತ್ಯಕ್ರಿಯೆ ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಗರದ ಜಂಬುನಾಥ ರಸ್ತೆಯಲ್ಲಿರುವ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

