ಪೆರೋಲ್ ಮೇಲೆ ಬಳ್ಳಾರಿಗೆ ಆಗಮಿಸಿದ ಒಎಂಸಿ ಎಂಡಿ
ಬಳ್ಳಾರಿ: ಒಎಂಸಿ ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಸಿಬಿಐನಿಂದ ಬಂಧಿತರಾಗಿರುವ ಒಎಂಸಿ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮೂರು ದಿನಗಳ ಪೆರೋಲ್ ಮೇಲೆ ಬಿಡುಗಡೆಗೊಂಡು ಬಳ್ಳಾರಿಗೆ ಆಗಮಿಸಿದ್ದಾರೆ. ಅವರ ಅಜ್ಜಿಯ ಆರೋಗ್ಯ ಸರಿಯಿಲ್ಲದ ಕಾರಣ ಸಿಬಿಐನ ವಿಶೇಷ ನ್ಯಾಯಾಲಯ ಪೆರೋಲ್ ನೀಡಿದೆ. ಶುಕ್ರವಾರ ಪೊಲೀಸ್ ಬಂದೋಬಸ್ತ್ನಲ್ಲಿ ಬಳ್ಳಾರಿಗೆ ಆಗಮಿಸಿದರು. ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿದ ಸಂದರ್ಭದಲ್ಲಿಯೇ ಒಎಂಸಿ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರನ್ನು ಬಂಧಿಸಲಾಗಿತ್ತು. ಈ ಹಿಂದೆ ಹಲವು ಬಾರಿ ಜಾಮೀನಿಗೆ ಅವರು ಅರ್ಜಿ ಸಲ್ಲಿಸಿದ್ದರು. ಹೈದರಾಬಾದ್ನ ನಾಂಪಲ್ಲಿಯ ಸಿಬಿಐನ ವಿಶೇಷ ನ್ಯಾಯಾಲಯ ಅವರ ಮನವಿ ತಿರಸ್ಕರಿಸಿತ್ತು. ಇತ್ತೀಚೆಗೆ ಶ್ರೀನಿವಾಸ ರೆಡ್ಡಿ ಅವರ ಅಜ್ಜಿ (ತಾಯಿಯ ತಾಯಿ) 108 ವರ್ಷದ ಚೆನ್ನಮ್ಮಗೆ ಆರೋಗ್ಯ ಹದಗೆಟ್ಟಿತ್ತು. ಅವರನ್ನು ನೋಡಿಕೊಂಡು ಬರುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಿಬಿಐನ ವಿಶೇಷ ನ್ಯಾಯಾಲಯಕ್ಕೆ ಶ್ರೀನಿವಾಸ ರೆಡ್ಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪುರಸ್ಕರಿಸಿದ ಸಿಬಿಐ ನ್ಯಾಯಾಲಯ ಮೂರು ದಿನದ ಮಟ್ಟಿಗೆ ಪೆರೋಲ್ ಮೇಲೆ ಹೋಗಿ ಬರಲು ಅನುಮತಿ ನೀಡಿತು. ಈ ಹಿನ್ನೆಲೆಯಲ್ಲಿ ಚಂಚಲಗೂಡ ಜೈಲಿನಿಂದ ಪೊಲೀಸ್ ಸಿಬ್ಬಂದಿಯೊಂದಿಗೆ ಆಗಮಿಸಿದ್ದ ಶ್ರೀನಿವಾಸ ರೆಡ್ಡಿ, ಬಳ್ಳಾರಿ ಗ್ರಾಮೀಣ ಪೊಲೀಸ್ ಸಿಬ್ಬಂದಿಯೊಂದಿಗೆ ಹವಂಭಾವಿ ಪ್ರದೇಶದಲ್ಲಿರುವ ಅವರ ಮನೆಗೆ ತೆರಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

