ಕಾಂಗ್ರೆಸ್ಗೆ 150 ಸ್ಥಾನ: ಅಲ್ಲಂ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಏ. 25
ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದ್ದು, 140-150 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ 4-5 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಖಚಿತ. ಉಳಿದ ಕ್ಷೇತ್ರಗಳಲ್ಲಿಯೂ ಸ್ಪಲ್ಪ ಶ್ರಮ ವಹಿಸಿದರೆ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಿದರು.
ಜಿಲ್ಲೆಯಲ್ಲಿ 4-5 ದಿನಗಳಿಂದ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಈ ಬಾರಿ ಕಾಂಗ್ರೆಸ್ ಅಲೆ ಇರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಹೊಸಪೇಟೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ವಹಾಬ್ ಅವರಿಗೆ ಎಲ್ಲ ಸಮಾಜದವರೂ ಬೆಂಬಲ ನೀಡುತ್ತಿದ್ದಾರೆ ಎಂದು ಅಲ್ಲಂ ಹೇಳಿದರು.
ಕುರುಬ ಸಮಾಜದ, ಮಾಜಿ ಶಾಸಕ ಶಂಕರ ಗೌಡ್ರು ಅವರ ಪುತ್ರ ಜಿ. ಭರಮಲಿಂಗನಗೌಡ, ವೀರಶೈವ ಸಮಾಜದ ಸಾಲಿಸಿದ್ದಯ್ಯಸ್ವಾಮಿ ಕಾಂಗ್ರೆಸ್ ಸೇರಿದ್ದಾರೆ. ಇದೇ ರೀತಿಯಲ್ಲಿ ಬೇರೆ ಬೇರೆ ಸಮಾಜದ ಮುಖಂಡರೂ ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅದರಿಂದ ಕಾಂಗ್ರೆಸ್ ಗೆಲವಿನ ಹಾದಿ ಸುಗಮಗೊಂಡಿದೆ. ಮುಂದಿನ ದಿನಗಳಲ್ಲಿ ಸ್ಥಿರ, ಭ್ರಷ್ಟಾಚಾರ ರಹಿತ ಸರ್ಕಾರವನ್ನು ಕಾಂಗ್ರೆಸ್ ನೀಡಲಿದೆ ಎಂದು ಹೇಳಿದರು.
ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ವಹಾಬ್ ಮಾತನಾಡಿ, 25 ವರ್ಷಗಳಿಂದಲೂ ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದರಿಂದ ಕಾಂಗ್ರೆಸ್ ನನ್ನನ್ನು ಗುರುತಿಸಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಈ ಕ್ಷೇತ್ರದಿಂದ ತಾವು ಆರಿಸಿ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ ಎಂದರು.
ಕಾಂಗ್ರೆಸ್ ಮುಖಂಡರಾದ ಗೋನಾಳ್ ವಿರೂಪಾಕ್ಷಗೌಡ, ವಿ.ಎನ್. ಗಿರಿಮಲ್ಲಪ್ಪ, ಸಾಲಿಸಿದ್ದಯ್ಯ ಸ್ವಾಮಿ, ತಾರಿಹಳ್ಳಿ ವೆಂಕಟೇಶ್, ಜಿಪಂ ಸದಸ್ಯ ಅನ್ನದಾನ ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ. ವೆಂಕಟರಮಣ, ತಾರಿಹಳ್ಳಿ ಶಿವಮೂರ್ತಿ, ಜವಳಿ ರುದ್ರಪ್ಪ, ಬಸವರಾಜ್, ಕೊಟ್ರೇಶಪ್ಪ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

