ಆನಂದ್ ಸಿಂಗ್ ಬಿರುಸಿನ ಪ್ರಚಾರ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಏ. 29
ವಿಜಯನಗರ (ಹೊಸಪೇಟೆ) ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾನುವಾರ ನಗರದ ಸಂತೆ ಮಾರುಕಟ್ಟೆ ಸೇರಿದಂತೆ ಇತರೆ ಪ್ರದೇಶದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು.
ಸಚಿವ ಆನಂದ್ ಸಿಂಗ್ ಮಾತನಾಡಿ, ರೈತನ ಕಬ್ಬಿಗೆ ನ್ಯಾಯಯುತವಾದ ಬೆಲೆ ದೊರೆಯುವ ರೀತಿಯಲ್ಲಿ ಹೋರಾಟ ನಡೆಸಿ ರೈತ ಪರವಾದ ಕೆಲಸಗಳು ಸೇರಿದಂತೆ ಕ್ಷೇತ್ರದ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನನ್ನ ಅಧಿಕಾರವಧಿಯಲ್ಲಿ ಮಾಡಿರುವೆ. ಈ ಚುನಾವಣೆಯಲ್ಲಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ್ತೊಮ್ಮೆ ಆಶೀರ್ವದಿಸಬೇಕು ಎಂದು ಮತದಾರರಲ್ಲಿ ವಿನಂತಿಸಿಕೊಂಡರು.
ಕ್ಷೇತ್ರದಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿರುವುದರಿಂದ ಮತ್ತು ಈಗಾಗಲೇ ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಮಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಅವರು ಮತದಾರರಲ್ಲಿ ಕೋರಿದರು.
ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾನುವಾರ ನಗರದ ಸಂತೆ ಮಾರುಕಟ್ಟೆ, ಆನಂತಶಯನಗುಡಿ, ಹಂಪಿ, ಕಡ್ಡಿರಾಂಪುರ, ಟಿ.ಬಿ. ಡ್ಯಾಂ ಪ್ರದೇಶ, ನಗರದ ಮೃತ್ಯುಂಜಯ ನಗರದಲ್ಲಿ ಮತ ಯಾಚನೆ ನಡೆಸಿದರು.
ಬಿಜೆಪಿ ಮುಖಂಡರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಅಬ್ದುಲ್ ವಹಾಬ್ ಮತ ಪ್ರಚಾರ
ಹೊಸಪೇಟೆ: ವಿಜಯನಗರ (ಹೊಸಪೇಟೆ) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್. ಅಬ್ದುಲ್ ವಹಾಬ್ ಸೋಮವಾರ ನಗರದ ವಿವಿಧ ವಾರ್ಡ್ಗಳಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ ಎಚ್. ಅಬ್ದುಲ್ ವಹಾಬ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ವಿಜಯನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ವಿಧಾನ ಸಭೆಗೆ ಹೋದರೆ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯಲು ಸಾಧ್ಯವಾಗಲಿದೆ ಎಂದರು.
ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ
ಕಂಪ್ಲಿ: ಕಂಪ್ಲಿ ವಿಧಾನಸಭಾ ಕ್ಷೇತ್ರದ ಜನತಾದಳ ಅಭ್ಯರ್ಥಿ ಕಗ್ಗಲ್ಲು ಎಸ್. ವೀರೇಶ್ ಪರ ಜೆಡಿಎಸ್ ಯುವ ಮುಖಂಡ ನಾರಾ ಭರತ್ ರೆಡ್ಡಿ ಅವರು, ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬೈಲೂರು, ವದಟ್ಟಿ, ಯರ್ರಿಂಗಳಿ ಹಾಗೂ ಸಿದ್ದಮನಹಳ್ಳಿ ಗ್ರಾಮಗಳಿಗೆ ತೆರಳಿ ಪ್ರಚಾರ ನಡೆಸಿದರು. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ವೃದ್ಧರಿಗೆ ರು. 5 ಸಾವಿರ ಮಾಸಾಶನ, ಮಹಿಳೆಯರಿಗೆ ಮನೆ, ರೈತರ ಸಾಲಮನ್ನಾ ಹಾಗೂ ಎಲ್ಲ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸಲಾಗುವುದು. ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಗ್ಗಲ್ಲು ಎಸ್. ವೀರೇಶ್ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು. ಅಭ್ಯರ್ಥಿ ಎಸ್. ವೀರೇಶ್, ವದಟ್ಟಿ ದಿವಾಕರ್, ಸ್ವಾಮಿ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

