ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆಗೆ ನಿರ್ಧಾರ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಆ. 4
ಜಿಲ್ಲೆಯಲ್ಲಿ ಆ. 15ರಂದು 67ನೇ ಸ್ವಾತಂತ್ರ್ಯೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ. 15ರಂದು ಬೆಳಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 8.45ಕ್ಕೆ ಮಹಾತ್ಮ ಗಾಂಧೀಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದರು.
ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಸ್ವಾಗತ ಸಮಿತಿ, ಆಚರಣಾ ಸಮಿತಿ, ಪರೇಡ್ ಉಪ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಉಪ ಸಮಿತಿ ಮತ್ತಿತರ ಉಪ ಸಮಿತಿಗಳನ್ನು ರಚಿಸಿ, ಕೈಗೊಳ್ಳುವ ಕಾರ್ಯಗಳನ್ನು ವಿವರಿಸಿದ ಅವರು, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಪಥಸಂಚಲನ: ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆಯ ನೇತೃತ್ವದಲ್ಲಿ ಎನ್ಸಿಸಿ, ಗೃಹರಕ್ಷಕ ದಳ, ಶಾಲೆಗಳ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಲಿದೆ. ಉತ್ಸವ ಸಮಿತಿಗಳು ಕ್ರೀಡಾಂಗಣದಲ್ಲಿ ಅತಿಥಿಗಳು, ಸ್ವಾತಂತ್ರ್ಯ ಹೋರಾಟಗಾರರು, ಗಣ್ಯವ್ಯಕ್ತಿಗಳು, ಸಾರ್ವಜನಿಕರಿಗೆ ಕುಳಿತುಕೊಳ್ಳುವ ಆಸನ ವ್ಯವಸ್ಥೆ, ಸ್ವಚ್ಛತೆ, ವೇದಿಕೆ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ತಾಲೀಮಿನಿಂದ ಹಿಡಿದು ಕಾರ್ಯಕ್ರಮ ಪೂರ್ಣಗೊಳ್ಳುವವರೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಪಾಲಿಕೆ ಅಧಿಕಾರಿಗಳಿಗೆ, ಸಮರ್ಪಕ ವಿದ್ಯುತ್ ವ್ಯವಸ್ಥೆಗಾಗಿ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರು, ಸಮಾರಂಭಕ್ಕೆ ಆಗಮಿಸಲು ಅನುವಾಗುವಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಎಸ್ಆರ್ಟಿಸಿ ಸಂಸ್ಥೆಗೆ ಸೂಚಿಸಿದರು.
ಹರಿದ, ಸುಕ್ಕಾದ ಧ್ವಜ ಬಳಸುವಂತಿಲ್ಲ: ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ, ಗೃಹರಕ್ಷಕ ದಳದವರು ಪ್ರಥಮ ಚಿಕಿತ್ಸೆ ಉಪಕರಣಗಳೊಂದಿಗೆ ಉಪಸ್ಥಿತರಿರಬೇಕು. ಸರ್ಕಾರಿ ಕಚೇರಿಗಳ ಮುಂದೆ ನಡೆಯುವ ಧ್ವಜಾರೋಹಣದ ಸಂದರ್ಭದಲ್ಲಿ ವಿಶೇಷ ಕಾಳಜಿ ವಹಿಸಬೇಕು. ಹರಿದ, ಸುಕ್ಕಾದ ಧ್ವಜ ಬಳಸದಂತೆ ಹಾಗೂ ಸಂಜೆ 6 ಗಂಟೆಗೆ ಸರಿಯಾಗಿ ಇಳಿಸುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು. ನಗರದ ಎಲ್ಲ ವೃತ್ತ, ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುವುದು. ಅಂದು ಸಂಜೆ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಜಿಪಂ ಸಿಇಒ ಎಂ. ಮಂಜುನಾಥ ನಾಯಕ್, ಅಪರ ಜಿಲ್ಲಾಧಿಕಾರಿ ವೆಂಕಟೇಶ್, ಡಿಡಿಪಿಐ ಟಿ. ನಾರಾಯಣಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಎಸ್. ಕಲಾದಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಾಧವ್ರಾವ್ ಪಾಟೀಲ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಜಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

