ಬಳ್ಳಾರಿ

ವಸತಿ ಯೋಜನೆ ದುರ್ಬಳಕೆ: ಕ್ರಿಮಿನಲ್ ಮೊಕದ್ದಮೆ

Published On :

ಹೊಸಪೇಟೆ: ವಾಜಪೇಯಿ ನಗರ ವಸತಿ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡಿರುವ ಘಟನೆ ನಗರಸಭೆಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ತಪ್ಪಿತಸ್ಥರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಚಿಂತನೆ ನಡೆಸಲಾಗಿದೆ ಎಂದು ನಗರಸಭೆಯ ಪೌರಯುಕ್ತ ಕೆ. ರಂಗಸ್ವಾಮಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ 1, 12, ಮತ್ತು 30ನೇ ವಾರ್ಡ್‌ಗಳ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಗಳನ್ನು ನಗರಸಭೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. 2010-11ನೇ ಸಾಲಿನಲ್ಲಿ ನಗರಸಭೆಗೆ 2,160 ಮನೆಗಳು ಮಂಜೂರಾಗಿದ್ದು, ನಗರದ 35 ವಾರ್ಡ್‌ಗಳ ವ್ಯಾಪ್ತಿಯ ಫಲಾನುಭವಿಗಳಿಗೆ ಈ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ನಗರದ ವಿವಿಧ ವಾರ್ಡ್‌ಗಳಲ್ಲಿ 587 ಮನೆಗಳು ನಿರ್ಮಾಣ ಕಾಮಗಾರಿ ಈಗಾಗಲೆ ಆರಂಭವಾಗಿದೆ. ಮನೆ ನಿರ್ಮಿಸಲು ಮೊದಲ ಕಂತಿನ ಹಣ ಬಿಡುಗಡೆ ಮಾಡುವಾಗ ಫೋಟೋ ತೆಗಿಸಿಕೊಂಡು ನಗರಸಭೆಗೆ ನೀಡಬೇಕು. ಈ ಸಂದರ್ಭದಲ್ಲಿ ಫಲಾನುಭವಿಗಳು ಬೇರೆಯವರ ಮನೆಯ ಮುಂದೆ ನಿಂತು ಫೋಟೋ ತೆಗೆಸಿಕೊಂಡಿರುವ 8 ಪ್ರಕರಣಗಳು ಪತ್ತೆಯಾಗಿವೆ ಎಂದರು.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ಪಡೆದ ಫಲಾನುಭವಿಗಳಲ್ಲಿ 3 ಫಲಾನುಭವಿಗಳು ಈಗಾಗಲೇ ಹಣವನ್ನು ಮರು ಪಾವತಿ ಮಾಡಿದ್ದಾರೆ. ಉಳಿದ 5 ಜನರಿಗೆ ಹಣ ಮರು ಪಾವತಿಸುವಂತೆ ಗಡವು ನೀಡಲಾಗಿದೆ. ದುರ್ಬಳಕೆ ಮಾಡಿಕೊಂಡಿರುವ ಫಲಾನುಭವಿಗಳು ಹಣ ಪಾವತಿಸದಿದ್ದರೆ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಲಾಗಿದೆ ಎಂದರು.
ನಗರದ ಎಲ್ಲ ವಾರ್ಡ್‌ಗಳಲ್ಲಿ ಇಂತಹ ಪ್ರಕರಣಗಳನ್ನು ಪತ್ತೆಹಚ್ಚಲು ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ವಾಜಪೇಯಿ ನಗರ ವಸತಿ ಯೋಜನೆಯನ್ನು ಜಾರಿ ಮಾಡಿದ್ದು, ರು. 75 ಸಾವಿರ ಹಣವನ್ನು 4 ಕಂತುಗಳಲ್ಲಿ ನೀಡಲಾಗುತ್ತಿದೆ. ಆರಂಭದಲ್ಲೇ ಇಂತಹ ಪ್ರಕರಣ ಪತ್ತೆಯಾಗಿರುವುದರಿಂದ ದುರ್ಬಳಕೆ ಮಾಡಿಕೊಂಡಿರುವ ಫಲಾನುಭವಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ದುರ್ಬಳಕೆ ಮಾಡಿಕೊಳ್ಳದಂತೆ ತಡೆಯಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.