ಬಳ್ಳಾರಿ

ಹತ್ತಿಗೆ ಬೆಂಬೆಲೆಗಾಗಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಡಿ. 3
ಹತ್ತಿ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳು ಮತ್ತು ದಲ್ಲಾಳಿಗಳನ್ನು ನಿಯಂತ್ರಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಹತ್ತಿ ಬೆಳೆಗೆ ಬೆಂಬಲ ಬೆಲೆ ಒದಗಿಸುವಂತೆ ಒತ್ತಾಯಿಸಿ ರೈತ-ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿತು.  
ರೈತ-ಕೃಷಿ ಕಾರ್ಮಿಕ ಸಂಘಟನೆ ಜಿಲ್ಲಾಧ್ಯಕ್ಷ ಎ. ದೇವದಾಸ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಅನೇಕ ಸಣ್ಣ ಮತ್ತು ಮಧ್ಯಮ ರೈತರು ಸಾವಿರಾರು ಎಕರೆ ಭೂಮಿಯಲ್ಲಿ ಹತ್ತಿ ಬೆಳೆದಿದ್ದಾರೆ. ಒಂದು ಎಕರೆ ಭೂಮಿಯಲ್ಲಿ ಹತ್ತಿ ಫಲವನ್ನು(ಬೆಳೆ) ತೆಗೆಯಲು ಇಂದಿನ ದುಬಾರಿ ದಿನಗಳಲ್ಲಿ ಬೀಜ, ಗೊಬ್ಬರ, ಕೀಟನಾಶಕ ಸೇರಿದಂತೆ ರೈತ ಬಳಸುವ ಎಲ್ಲ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಒಂದು ಎಕರೆಗೆ ಸುಮಾರು ರು. 40 ಸಾವಿರ ಖರ್ಚು ಬರುತ್ತದೆ. ಇಂತಹ ಸ್ಥಿತಿಯಲ್ಲಿ ರೈತನಿಗೆ ಕ್ವಿಂಟಲ್ ಹತ್ತಿಗೆ ಕೇವಲ ನಾಲ್ಕು ಸಾವಿರ ಮಾತ್ರ ದೊರೆಯುತ್ತಿದ್ದು, ಈ ಹಣ ಯಾತಕ್ಕೂ ಸಾಲದಾಗಿದೆ. ಕೂಡಲೇ ಸರ್ಕಾರ ಹತ್ತಿ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಕ್ರಮಕ್ಕೆ ಒತ್ತಾಯ: ಮಧ್ಯವರ್ತಿಗಳು ಮತ್ತು ದಲ್ಲಾಳಿಗಳು ತಮಗಿಷ್ಟ ಬಂದಂತೆ ಬೆಲೆಯನ್ನು ನಿಯಂತ್ರಿಸುತ್ತ ಈಗಾಗಲೇ ದಿವಾಳಿಯಾಗಿರುವ ರೈತನನ್ನು ಸಂಕಷ್ಟಕ್ಕೆ ತಳ್ಳುತ್ತ, ದಿಕ್ಕು ತೋಚದಂತೆ ಮಾಡಿದ್ದಾರೆ. ಜಾಗತೀಕರಣ ನೀತಿ ಜಾರಿಗೊಂಡ ನಂತರ ರೈತ ಬದುಕಿನಲ್ಲಿ ಭರವಸೆ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ, ಹತ್ತಿ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳು ಮತ್ತು ದಲ್ಲಾಳಿಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಆರ್‌ಕೆಎಸ್ ಜಿಲ್ಲಾ ಕಾರ್ಯದರ್ಶಿ ಈ. ಹನುಮಂತಪ್ಪ, ಕೆ. ಬಸಣ್ಣ, ಗೋಪಾಲ್, ಕೆ. ಗಾದಿಲಿಂಗ, ಗೂಳಪ್ಪ, ಹನುಮಂತಪ್ಪ, ದುರುಗಪ್ಪ, ನೂರಾರು ರೈತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.