ಬಳ್ಳಾರಿ

ವೇತನ ಕಡಿತ: ಉಪನ್ಯಾಸಕರ ಸಂಘ ಖಂಡನೆ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಡಿ. 5
ಸೆಮಿಸ್ಟರ್ ಪರೀಕ್ಷೆಗಳಿಗೆ ನಿಯುಕ್ತಿಗೊಳಿಸಿದರೂ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸಿದ 12 ಉಪನ್ಯಾಸಕರ ವಿರುದ್ಧ ವಿಶ್ವವಿದ್ಯಾಲಯ ಕುಲಪತಿ ಡಾ. ಮಂಜಪ್ಪ ಹೊಸಮನೆ ನೀಡಿರುವ ಹೇಳಿಕೆಯನ್ನು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವ್ಯಾಪ್ತಿಯ ಅಧ್ಯಾಪಕರ ಸಂಘ ಖಂಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘ, ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ನಡೆದಿರುವ ಸೆಮಿಸ್ಟರ್ ಪರೀಕ್ಷೆಗಳಿಗೆ ನಿಯುಕ್ತಿಗೊಳಿಸಿದರೂ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸದ 12 ಉಪನ್ಯಾಸಕರು ಕರ್ತವ್ಯಲೋಪ ಎಸಗಿದ್ದು, ಅವರ ಒಂದು ತಿಂಗಳ ಸಂಬಳವನ್ನು ತಡೆ ಹಿಡಿಯುವಂತೆ ಉನ್ನತ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಲಾಗಿದೆ ಎಂದು ಪತ್ರಿಕಾ ಹೇಳಿಕೆ ನೀಡಿರುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದೆ.
ಸಮಂಜಸವಲ್ಲ: ಕುಲಪತಿಗಳು ಪರೀಕ್ಷೆಗೆ ಹಾಜರಾಗದ ಉಪನ್ಯಾಸಕರಿಂದ ವಿವರಣೆ ಪಡೆಯಬೇಕಿತ್ತು, ಅಲ್ಲದೆ ಸಂಬಂಧಿಸಿದ ಕಾಲೇಜುಗಳ ಪ್ರಾಚಾರ್ಯರಿಂದ ಯಾವ ಕಾರಣಕ್ಕಾಗಿ ನಿಯುಕ್ತಿಗೊಳಿಸಿದ ಉಪನ್ಯಾಸಕರು ಪರೀಕ್ಷಾ ಕರ್ತವ್ಯಕ್ಕೆ ಹಾಜರಾಗಿಲ್ಲ ಎಂಬುದರ ಬಗ್ಗೆ ಸಮಗ್ರ ವರದಿ ಪಡೆದು, ತದನಂತರ ಕರ್ತವ್ಯ ಲೋಪ ಎಸಗಿರುವುದು ಸಾಬೀತಾದಲ್ಲಿ  ವಿವಿಯ ಪರೀಕ್ಷಾ ಕರ್ತವ್ಯಕ್ಕೆ ನಿಯುಕ್ತಿಗೊಳಿಸಿದ ಉಪನ್ಯಾಸಕರ ಮೇಲೆ ಕ್ರಮ ಜರುಗಿಸುವುದು ಸಮಂಜಸವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
ಮೌಲ್ಯಮಾಪನ ಬಹಿಷ್ಕಾರ: ಆದರೆ ಈ ಮೇಲಿನ ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಏಕಪಕ್ಷೀಯವಾಗಿ 12 ಉಪನ್ಯಾಸಕರ ವೇತನವನ್ನು ತಡೆಹಿಡಿಯುವಂತೆ ಉನ್ನತ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿರುವ ಕ್ರಮವನ್ನು ಸಂಘ ಖಂಡಿಸುತ್ತದೆ.
ವಿಶ್ವವಿದ್ಯಾಲಯದ ಕುಲಪತಿ ಡಾ. ಮಂಜಪ್ಪ ಹೊಸಮನೆಯವರು ಸರ್ವಾಧಿಕಾರಿ ಧೋರಣೆ ಕೈಬಿಡದೆ ಹೋದ ಪಕ್ಷದಲ್ಲಿ ಮತ್ತು ಶಿಸ್ತು ಕ್ರಮದ ಶಿಫಾರಸಿಗೆ ಒಳಗಾದ ಉಪನ್ಯಾಸಕರಲ್ಲಿ ಕ್ಷಮೆಯಾಚಿಸದೆ ಇದ್ದಲ್ಲಿ ಡಿ. 9ರಿಂದ ಆರಂಭಗೊಳ್ಳಲಿರುವ ವಿವಿಯ ಪರೀಕ್ಷಾ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಸಂಘ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.