ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸೋಣ
ಕನ್ನಡಪ್ರಭ ವಾರ್ತೆ, ಸಂಡೂರು, ಜ. 27
ಸ್ವಾತಂತ್ರ್ಯ ಹಾಗೂ ಗಣರಾಜ್ಯವಾದ ನಂತರ ದೇಶವು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಿದೆ. ದೇಶವನ್ನು ಮತ್ತಷ್ಟು ಸದೃಢ ಹಾಗೂ ಸಮೃದ್ಧಗೊಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕಿದೆ ಎಂದು ತಹಸೀಲ್ದಾರ್ ಆರ್. ತಿಮ್ಮಯ್ಯ ಹೇಳಿದರು.
ಅವರು ಪಟ್ಟಣದ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜು ಆವರಣದಲ್ಲಿ ಜರುಗಿದ 64ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸುಶಿಕ್ಷಿತ ಸಮಾಜ ನಿರ್ಮಾಣಕ್ಕಾಗಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಬೇಕಿದೆ. ದೇಶದಲ್ಲಿ ಯುವಕರ ಸಂಖ್ಯೆ ಹೆಚ್ಚಿದ್ದು, ಯುವ ಶಕ್ತಿಯನ್ನು ಸದುಪಯೋಗ ಪಡಿಸಿಕೊಂಡು ದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಬೇಕಲ್ಲದೆ, ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ದೊರೆಯುವಂತೆ ಮಾಡಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಈ. ತುಕಾರಾಂ, ಪ್ರಜಾಪ್ರಭುತ್ವದ ವಿವಿಧ ಅಂಗಗಳು ತಮ್ಮ ಜವಾಬ್ದಾರಿಯನ್ನು ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಪ್ರಗತಿ ಸಾಧ್ಯ ಎಂದು ತಿಳಿಸಿದರು. ವಾಣಿ ರಘು ಅವರು ಗಣರಾಜ್ಯೋತ್ಸವದ ಕುರಿತು ಉಪನ್ಯಾಸ ನೀಡಿದರು. ತಾಪಂ ಅಧ್ಯಕ್ಷೆ ಭರ್ಮಕ್ಕ, ಉಪಾಧ್ಯಕ್ಷ ಬಿ.ಜಿ. ಉಜ್ಜಿನಗೌಡ, ಪುರಸಭೆಯ ಅಧ್ಯಕ್ಷ ಎಲ್.ಎಚ್. ಶಿವಕುಮಾರ್ ಹಾಗೂ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ ಮಾತನಾಡಿದರು.
ವಿದ್ಯಾರ್ಥಿಗಳನ್ನು, ನಿವೃತ್ತ ಸರ್ಕಾರಿ ನೌಕರರನ್ನು, ಗಣರಾಜ್ಯೋತ್ಸವದ ನಿಮಿತ್ತ ಏರ್ಪಡಿಸಲಾಗಿದ್ದ ಪ್ರಬಂಧ, ಭಾಷಣ, ದೇಶಭಕ್ತಿಗೀತೆ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಹಾಗೂ ಗಣರಾಜ್ಯೋತ್ಸವದಲ್ಲಿ ಜರುಗಿದ ಪಥ ಸಂಚಲನ ಕಾರ್ಯಕ್ರಮದಲ್ಲಿ ಉತ್ತಮ ಪ್ರದರ್ಶನ ತೋರಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಎಂ.ಬಿ. ಕಂಪ್ಲಿ ಸ್ವಾಗತಿಸಿದರು. ಎಚ್.ಎನ್. ಭೋಸ್ಲೆ, ಎಸ್.ಡಿ. ಸಂತಿ, ಚರಂತಯ್ಯ ನಿರೂಪಿಸಿದರು. ಪುರಸಭೆಯ ಮಾಜಿ ಅಧ್ಯಕ್ಷ ಡಿ. ಕೃಷ್ಣಪ್ಪ, ಸದಸ್ಯ ಗೋಪಾಲಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

