ರೈತರಿಗೆ ಬೇಗ ಸಿಗಲಿದೆ ತುಂಗಭದ್ರೆ ನೀರು
ಕನ್ನಡಪ್ರಭ ವಾರ್ತೆ ಬಳ್ಳಾರಿ ಜು.3
ಪ್ರತಿವರ್ಷ ನಿಗದಿತ ಸಮಯದಲ್ಲಿ ತುಂಗಭದ್ರಾ ಜಲಾಶಯದಿಂದ ನೀರು ಬಿಡುವುದಿಲ್ಲ ಎಂಬ ಕೊರಗು ಈ ಭಾಗದ ರೈತರಲ್ಲಿ ಮನೆ ಮಾಡಿತ್ತು. ಆದರೆ, ಇದೀಗ ಜು.9ರಂದು ನೀರಾವರಿ ಸಲಹಾ ಸಮಿತಿ(ಐಸಿಸಿ) ಸಭೆ ಮುನಿರಾಬಾದ್ನಲ್ಲಿ ನಡೆಸಲು ಈಗಾಗಲೇ ಸಿದ್ಧತೆ ನಡೆದಿದೆ. ಸಭೆಯು ನೀರು ಬಿಡಲು ಒಪ್ಪಿದರೆ ಎರಡು ವರ್ಷ ಬರದಿಂದ ತತ್ತರಿಸಿದ್ದ ರೈತರು ಸಂತಸದಿಂದ ಬಿತ್ತನೆಯಲ್ಲಿ ತೊಡಗಲಿದ್ದಾರೆ.
ಕಳೆದ ಬಾರಿ ಕಡಿಮೆ ಮಳೆಯಿಂದಾಗಿ ಆಗಸ್ಟ್ನಲ್ಲಿ ಕಾಲುವೆಗಳಿಗೆ ನೀರು ಬಿಡುವ ಮೂಲಕ ರೈತರು ಆತಂಕಗೊಂಡಿದ್ದರು. ಈ ವರ್ಷ ಆಂಧ್ರಪ್ರದೇಶದ ಅಧಿಕಾರಿಗಳು ಕೂಡ ನೀರು ಬಿಡುವುದಕ್ಕೆ ಇಂಟೆಂಡ್ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಹೀಗಾಗಿ ಕಾಲುವೆ ಭಾಗದ ರೈತರಿಗೆ ಅನುಕೂಲವಾಗಲಿದೆ. ಈಗಾಗಲೇ ಜಲಾಶಯದಲ್ಲಿ ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ಜು. 9ರಂದು ನೀರಾವರಿ ಸಲಹಾ ಸಮಿತಿ ಸಭೆ ಕರೆಯುವ ಸಾಧ್ಯತೆ ಹೆಚ್ಚಾಗಿದೆ.
ನೀರಾವರಿ ಸಲಹಾ ಸಮಿತಿಗೆ ಸಿಎಂ ಸೂಚನೆ: ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಕುರಿತು ನೀರಾವರಿ ಸಲಹಾ ಸಮಿತಿ ಸಭೆ ಕರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೆ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅವರಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜು.9ರಂದು ಸಲಹಾ ಸಮಿತಿ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಸಮಿತಿಯ ಅಧ್ಯಕ್ಷ ಬಳ್ಳಾರಿ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಗೌಡ ಪಾಟೀಲ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿಗಿ ಹಾಗೂ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ನೀರಾವರಿ ಸೌಲಭ್ಯ ಇರುವ ಕ್ಷೇತ್ರಗಳ ಶಾಸಕರು, ಸಂಸದರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜು. 10ರಂದು ನೀರು ಬಿಡುವ ಸಾಧ್ಯತೆ: ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಈಗಾಗಲೇ ಸಿದ್ಧತೆ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಬತ್ತದ ನಾಟಿಗೆ ಬೇಕಾಗುವ ಸಸಿಗಳನ್ನು ಬೆಳೆಸುವಲ್ಲಿ ರೈತರು ತೊಡಗಿಕೊಂಡಿದ್ದಾರೆ. ಇದೀಗ ಜು. 9ರಂದು ಸಭೆ ನಡೆದು, ಜು. 10ರಂದು ಎಲ್ಎಲ್ ಕಾಲುವೆಗೆ ನೀರು ಬಿಟ್ಟರೆ ರೈತರ ಮೊಗದಲ್ಲಿ ಮಂದಹಾಸ ಮೂಡಲಿದೆ.
ಬೇಗ ಬಿಟ್ಟರೆ ಹೆಚ್ಚು ನೀರು ಸಂಗ್ರಹ: ಹೂಳಿನಿಂದಾಗಿ ಜಲಾಶಯದ ನೀರಿನ ಸಾಮರ್ಥ್ಯ 133 ಟಿಎಂಸಿಯಿಂದ 100.855 ಟಿಎಂಸಿಗೆ ಬಂದು ನಿಂತಿದೆ. ಹೀಗಾಗಿ ಜಲಾಶಯದ ನೀರು ಸಂಗ್ರಹ ಪ್ರಮಾಣ ಹೆಚ್ಚಿಸಲು ಗಂಭೀರ ಚಿಂತನೆ ನಡೆದಿದೆ. ಈಗ ಕಾಲುವೆಗಳ ದುರಸ್ತಿಗೆ ಅಧಿಕಾರಿಗಳು ಮುಂದಾಗಿರುವುದು ಖೇದಕರ ಸಂಗತಿ.
ಶಶಿಧರ ಮೇಟಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

