ಬಳ್ಳಾರಿ

ಫ್ರೀಡಂ ಪಾರ್ಕ್‌ನಲ್ಲಿ ದಲಿತ ಪ್ಯಾಂಥರ್ ಧರಣಿ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜು. 17
ದಲಿತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಭಾರತೀಯ ದಲಿತ ಪ್ಯಾಂಥರ್ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್)ದಲ್ಲಿ ಜು. 20ರಂದು ಧರಣಿ ನಡೆಸಲಾಗುವುದು ಎಂದು ಭಾರತೀಯ ದಲಿತ ಪ್ಯಾಂಥರ್‌ನ ರಾಜ್ಯ ಸಂಘಟನಾ ಕಾರ್ಯದರ್ಶಿ ಎ.ಸಿ. ದಾನಪ್ಪ ಹೇಳಿದರು.
ನಗರದಲ್ಲಿ ಬುಧವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಶೋಷಣೆ ತಳಹದಿಯಲ್ಲಿ ಸಿಲುಕಿ ಬಲಿಪಶುಗಳಾಗಿದ್ದಾರೆ. ತಮ್ಮ ಅಭಿವೃದ್ಧಿಗಾಗಿ ಹೋರಾಟ ಮಾಡುವ ಜವಾಬ್ದಾರಿ ವಿದ್ಯಾವಂತ ದಲಿತರ ಮೇಲಿದೆ. ಹಳ್ಳಿಗಳಲ್ಲಿ ಇಂದಿಗೂ ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಬಹಿಷ್ಕಾರಗಳಂತಹ ಪ್ರಸಂಗಗಳು ಮರುಕಳಿಸುತ್ತಲೇ ಇವೆ. ಆದರೂ, ಕ್ರಮ ಕೈಗೊಳ್ಳಬೇಕಿದ್ದ ಸರ್ಕಾರ ಮಾತ್ರ ಮೂಕ ಪ್ರೇಕ್ಷಕನಂತೆ ವೀಕ್ಷಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಈ ಹಿನ್ನಲೆಯಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಕ್ಷಣಾ ಕಾಯ್ದೆ (1955, 1989)ಗೆ ಸೂಕ್ತ ತಿದ್ದುಪಡಿ ತಂದು, ದಲಿತರ ಮೇಲೆ ದೌರ್ಜನ್ಯವೆಸಗಿದವರ ಪ್ರತಿಕೂಲ ಸಾಕ್ಷಿಗಳು ನಾಶವಾಗದಂತೆ ಸರ್ಕಾರ ಎಚ್ಚರವಹಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಪ್ರತಿಭಟನೆಯಲ್ಲಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ರಾಜ್ಯದ 4 ಲಕ್ಷಕ್ಕೂ ಅಧಿಕ ಜನರ ವಿರುದ್ಧ ಸುಪ್ರೀಂ ಕೋರ್ಟ್ ಪ್ರಜಾಪ್ರತಿನಿಧಿ ಕಾಯ್ದೆ ತೀರ್ಪಿನ ಮಾದರಿಯಲ್ಲಿ ಕ್ರಮಕೈಗೊಳ್ಳಲು ಪ್ರಥಮ ಹಂತದ ನ್ಯಾಯಾಲಯಗಳು ಮುಂದಾಗಬೇಕು. ಕೇಂದ್ರ-ರಾಜ್ಯ ಸರ್ಕಾರಗಳು ಮೀಸಲಿಟ್ಟ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಅಭಿವೃದ್ಧಿ ಹಣವನ್ನು ಸಮರ್ಪಕವಾಗಿ ಖರ್ಚು ಮಾಡದೇ, ಸರ್ಕಾರಕ್ಕೆ ಮರಳಿ ಕಳುಹಿಸುವ ಅಧಿಕಾರಿಗಳ ವಿರುದ್ಧ 1955, 1989ರ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯಾದ್ಯಂತ ಇರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಸತಿ ನಿಲಯಗಳಿಗೆ ಮೊರಾರ್ಜಿ ದೇಸಾಯಿ, ರಾಣಿ ಚನ್ನಮ್ಮ ವಸತಿ ನಿಲಯಗಳ ಮಾದರಿಯಂತೆ ಡಾ. ಬಿ.ಆರ್. ಅಂಬೇಡ್ಕರ್ ಹೆಸರಿಡಬೇಕು. ಕಾಮಗಾರಿಯಲ್ಲಿ ಸರ್ಕಾರದ ಆದೇಶವನ್ನು ಧಿಕ್ಕರಿಸಿ, ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ತುಂಡುಗುತ್ತಿಗೆ ನೀಡದೆ ದ್ರೋಹವೆಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದರು. ರಾಜ್ಯ ಸರ್ಕಾರ ನೂತನ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದಲ್ಲಿ ಅವುಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಸವಣ್ಣ ಅವರ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ದಲಿತ ಪ್ಯಾಂಥರ್‌ನ ಜಿಲ್ಲಾಧ್ಯಕ್ಷ ಉತ್ತರೇಶ್‌ಗೌಡ, ವಿಭಾಗೀಯ ಸಂಚಾಲಕ ಡಿ. ಮೋಹನ್‌ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನಗೌಡ, ಸಂಡೂರು ತಾಲೂಕು ಅಧ್ಯಕ್ಷ ವಿ. ನಾಗರಾಜ, ಬಳ್ಳಾರಿ ತಾಲೂಕು ಅಧ್ಯಕ್ಷ ಕೆ.ಜೆ ಸುಧೀರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪಂಪನಗೌಡ, ಬಳ್ಳಾರಿ ನಗರ ಘಟಕದ ಅಧ್ಯಕ್ಷ ಕೆ.ಜಿ ಶಿವಕುಮಾರ್ ಹಾಗೂ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.