ನ್ಯಾಯಾಲಯ ನಿರ್ದೇಶನ ಪಾಲಿಸದ ಅಧಿಕಾರಿಗಳ ವಿರುದ್ಧ ಅಸಮಾಧಾನ
ಧಾರವಾಡ: ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಬಿಸ್ವಾಸ್ ಸೇರಿದಂತೆ ಸರ್ಕಾರಿ ಹಿರಿಯ ಅಧಿಕಾರಿಗಳನ್ನು ಬುಧವಾರ ಹೈಕೋರ್ಟ್ ಸಂಚಾರಿ ಪೀಠ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಹೊಸಪೇಟೆ ಶುಗರ್ಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಂಚಾರಿ ಪೀಠ ನ್ಯಾಯಾಲಯ ನೀಡಿದ್ದ ನಿರ್ದೇಶನಗಳನ್ನು ಪಾಲಿಸದ ಬಳ್ಳಾರಿ ಜಿಲ್ಲಾಧಿಕಾರಿ ಅಮ್ಲನ್ ಬಿಸ್ವಾಸ್, ತುಮಕೂರು ಜಿಲ್ಲಾಧಿಕಾರಿ ಸತ್ಯಮೂರ್ತಿ, ರಾಜ್ಯ ಚುನಾವಣಾ ಆಯುಕ್ತ ಅನಿಲಕುಮಾರ ಝಾ, ಉಪ ವಿಭಾಗಾಧಿಕಾರಿ ಅಶೋಕ್ ವಿರುದ್ಧ ನ್ಯಾಯಾಂಗ ನಿಂದನೆಯ ಎಚ್ಚರಿಕೆ ನೀಡಿತಲ್ಲದೆ ಆ. 7ರ ಒಳಗೆ ಹೊಸದಾಗಿ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಮೂರ್ತಿ ಎನ್. ಕುಮಾರ ಹಾಗೂ ಎಚ್.ಎಸ್. ಕೆಂಪಣ್ಣ ಅವರಿದ್ದ ದ್ವಿಸದಸ್ಯ ಪೀಠ ಬುಧವಾರ ಸೂಚಿಸಿತು. ಹೊಸಪೇಟೆ ಶುಗರ್ಸ್ ತನ್ನ ಕಾರ್ಯವ್ಯಾಪ್ತಿಯ ಜಮೀನುಗಳಿಂದ ಕಬ್ಬನ್ನು ಬೇರೆ ಕಾರ್ಖಾನೆಗೆ ಸಾಗಿಸದಂತೆ ಸೂಚಿಸಬೇಕು. ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಜರುಗಿಸಿಲ್ಲ ಎಂದು ಅರ್ಜಿ ದಾಖಲಿಸಿತ್ತು. ಜು. 24ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ ಆಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತರಾಗಿದ್ದ ಅನಿಲಕುಮಾರ ಝಾ, ಬಳ್ಳಾರಿ ಜಿಲ್ಲಾಧಿಕಾರಿ ಆದಿತ್ಯ ಅಮ್ಲನ್ ಬಿಸ್ವಾಸ್, ಕಬ್ಬು ಆಯೋಗದ ನಿರ್ದೇಶಕರಾಗಿದ್ದ ಸತ್ಯಮೂರ್ತಿ, ಉಪ ವಿಭಾಗಾಧಿಕಾರಿ ಅಶೋಕ ಅವರಿಗೆ ಜು. 31ರಂದು ನ್ಯಾಯಾಲಯಕ್ಕೆ ಖದ್ದಾಗಿ ಹಾಜರಾಗುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಕುರಿತು ಸರ್ಕಾರಿ ಅಧಿಕಾರಿಗಳ ಪರ ವಕೀಲರಾದ ಎಸ್.ಎಸ್. ನಾಗಾನಂದ ಸಲ್ಲಿಸಿದ ಅಫಿಡವಿಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ದ್ವಿಸದಸ್ಯ ಪೀಠವು ಆ.7ರ ಒಳಗಾಗಿ ಸಮಗ್ರ ಮಾಹಿತಿಗಳನ್ನೊಳಗೊಂಡ ಹೊಸ ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

