ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಕಲ್ಪ ಮಾಡಿ
ಬಳ್ಳಾರಿ: ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಕಾನೂನಿನಿಂದ ಮಾತ್ರವಲ್ಲದೆ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ. ವಿಶ್ವೇಶ್ವರ ಭಟ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘಗಳ ಸಹಯೋಗದಲ್ಲಿ ಬುಧವಾರ ನಗರದ ರೇಡಿಯೋ ಪಾರ್ಕ್ ಬಳಿಯ ಗಣೇಶ ಪಾಠ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕುವಲ್ಲಿ ಸಾರ್ವಜನಿಕರ, ಸಂಘ-ಸಂಸ್ಥೆಗಳ ಸಹಕಾರ ಅಗತ್ಯ. ಹೋಟೆಲ್, ಕಾರ್ಖಾನೆ ಮತ್ತಿತರ ಉದ್ಯಮಗಳಲ್ಲಿ, ಮನೆ ಕೆಲಸಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವುದು ವಿಷಾದನೀಯ. ಶಿಕ್ಷಣದ ಮಹತ್ವ, ಕಾನೂನು-ಕಾಯಿದೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬಹುದು ಎಂದರು.
ಶಾಲೆಗೆ ಕಳುಹಿಸಿ: ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಚ್. ಶಾಂತಾ ಮಾತನಾಡಿ, 6ರಿಂದ 14 ವರ್ಷದ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀತಿ ಜಾರಿಯಲ್ಲಿದ್ದು, ಈ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳಬೇಕು. ಮಕ್ಕಳನ್ನು ವಿದ್ಯಾವಂತರನ್ನಾಗುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ ಶಾಲೆಗೆ ಕಡ್ಡಾಯವಾಗಿ ಕಳುಹಿಸಬೇಕು ಎಂದು ತಿಳಿಸಿದರು. ಕಾರ್ಮಿಕ ಅಧಿಕಾರಿ ನಾಗರಾಜ್ ಮಾತನಾಡಿ, ಸರ್ವೋಚ್ಚ ನ್ಯಾಯಾಲಯವು 1996ರಲ್ಲಿಯೇ ಬಾಲಕಾರ್ಮಿಕ ಪದ್ಧತಿ ನಿಷೇಧ ಆದೇಶ ಹೊರಡಿಸಿದ್ದು, ಮಕ್ಕಳನ್ನು ದುಡಿಸಿಕೊಂಡಲ್ಲಿ ರು. 40 ಸಾವಿರಗಳ ದಂಡ, ಮೂರು ವರ್ಷಗಳ ಸಜೆ ವಿಧಿಸುವ ಕಾನೂನು ಜಾರಿಯಲ್ಲಿದೆ. ಈ ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಜಾಥಾ: ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಕೆ. ನಾಗಭೂಷಣ ರಾವ್, ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಮಂಜುನಾಥ್ ನಾಯಕ್ ಮಾತನಾಡಿದರು. ವಕೀಲರ ಸಂಘದ ಕಾರ್ಯದರ್ಶಿ ಡಿ.ಎಸ್. ಬದ್ರಿನಾಥ್, ಯರ್ರಿಗೌಡ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಕೃಷ್ಣಮೂರ್ತಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮೌನೇಶ್ ನಿರೂಪಿಸಿದರು. ಇದಕ್ಕೂ ಮುನ್ನ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ನಗರದ ಮೊಹಮ್ಮದೀಯ ಶಾಲೆಯ ಆವರಣದಿಂದ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ಜಾಥಾವನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಎಂ.ಎಚ್. ಶಾಂತಾ ಚಾಲನೆ ನೀಡಿದರು. ನಂತರ ಜಾಥಾವು ನಗರದ ಕೌಲ್ಬಜಾರ್ನ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಅರಿವು ಮೂಡಿಸಿತು.
ಬಳ್ಳಾರಿ: ಪೌರ ಕಾರ್ಮಿಕರಿಂದ ಪ್ರತಿಭಟನೆ
ಬಳ್ಳಾರಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರು ನಗರದ ಹಳೇ ಮಹಾನಗರ ಪಾಲಿಕೆ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಮಹಾನಗರ ಪಾಲಿಕೆಯಲ್ಲಿ 15 ವರ್ಷಗಳಿಂದಲೂ 285ಕ್ಕೂ ಅಧಿಕ ಪೌರ ಕಾರ್ಮಿಕರು ಪಾಲಿಕೆ ವ್ಯಾಪ್ತಿಯ ವಿವಿಧ ರಸ್ತೆ, ಬಡಾವಣೆಗಳಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ತಿಂಗಳಿನಂತೆ ನೀಡುವ ರು. 4,500 ಕನಿಷ್ಠ ವೇತನವನ್ನು ಮೂರು ತಿಂಗಳಿನಿಂದಲೂ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು. ಸರ್ಕಾರದ ಆದೇಶದಂತೆ ಮಾರ್ಚ್ನಿಂದ ಮಾಸಿಕ ವೇತನವನ್ನು ರು. 6,400ಕ್ಕೆ ನಿಗದಿಪಡಿಸಲಾಗಿದೆ. ಆದರೆ ವೇತನವನ್ನು ಸರಿಯಾಗಿ ಪಾವತಿಸುತ್ತಿಲ್ಲ. ಇದರಿಂದಾಗಿ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಅಲ್ಲದೇ, ಈಗಾಗಲೇ ಶಾಲಾ ದಿನಗಳು ಪ್ರಾರಂಭವಾಗಿದ್ದು, ಮಕ್ಕಳನ್ನು ಶಾಲೆಗೆ ಸೇರಿಸಲು, ಪುಸ್ತಕ, ಸಮವಸ್ತ್ರಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೂಡಲೇ ವೇತನ ಬಿಡುಗಡೆ ಮಾಡುವಂತೆ ಪೌರ ಕಾರ್ಮಿಕರಾದ ಮಾರೆಣ್ಣ, ಅಂಜಿ, ಬಿ. ಶ್ರೀನಿವಾಸ್, ಶಿವ, ಎಸ್. ಕೋನಪ್ಪ, ಪಿ.ನಾಗೇಶ್, ಸುಂಕಣ್ಣ ಇತರೆ ಕಾರ್ಮಿಕರು ಆಗ್ರಹಿಸಿದರು. ಕೆಲಸ ಮಾಡಲು ಸಮವಸ್ತ್ರ, ಕೈಗಳಿಗೆ ಗ್ಲೌಸ್ ನೀಡುತ್ತಿಲ್ಲ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

