ಅತ್ಯಾಚಾರ ಖಂಡಿಸಿ ಧರಣಿ
ಬಳ್ಳಾರಿ: ಉಡುಪಿಯ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಎಐಡಿಎಸ್ಓ, ಎಐಎಂಎಸ್ಎಸ್, ಎಂಎಸ್ಸಿ ಜಿಲ್ಲಾ ಸಂಘಟನೆಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು.
ಸಂಘಟನೆಗಳ ಸದಸ್ಯರು ಹಾಗೂ ವಿದ್ಯಾರ್ಥಿಗಳು ನಗರದ ರಾಯಲ್ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ, ರಸ್ತೆತಡೆ ನಡೆಸಿದರು. ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ನೀಡಿ, ಮಹಿಳೆಯರಿಗೆ ಭದ್ರತೆ ನೀಡದ ಸರ್ಕಾರಗಳಿಗೆ ಧಿಕ್ಕಾರ. ಶೀಘ್ರವೇ ಅತ್ಯಾಚಾರಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪೋಷಕರಲ್ಲಿ ಆತಂಕ: ಕಾಲೇಜುಗಳಲ್ಲಿ, ವಿವಿಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರು ಆತಂಕದಿಂದ ಅಧ್ಯಯನ ನಡೆಸುವ ಪರಿಸ್ಥಿತಿ ಸೃಷ್ಟಿಯಾಗಿರುವುದು ಆತಂಕಕಾರಿ ಬೆಳವಣಿಗೆ. ಪೋಷಕರು ಸಹ ಆತಂಕ, ಭಯಪಡುವಂತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ಕಲ್ಪಿಸಲು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಇತ್ತೀಚೆಗೆ ರಾಜ್ಯದಲ್ಲಿ ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ದುಷ್ಕೃತ್ಯಗಳು ನಡೆದಾಗ ಮೊಸಳೆ ಕಣ್ಣೀರು ಸುರಿಸುವ ಸರ್ಕಾರದ ಪ್ರತಿನಿಧಿಗಳು, ಅಧಿಕಾರಿಗಳು ಘಟನೆ ನಡೆಯದಂತೆ ವಾತಾವರಣ ಸೃಷ್ಟಿಸುತ್ತಿಲ್ಲವೇಕೆ? ಮುಂಜಾಗ್ರತಾ ಕ್ರಮಗಳನ್ನು ಏಕೆ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ಪ್ರಕರಣಗಳು ಹೆಚ್ಚುತ್ತಿವೆ: ಎಐಎಂಎಸ್ಎಸ್ಯ ಮಂಜುಳಾ ಮಾತನಾಡಿ, ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೂ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ತಾಳಿವೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಂಡು ನೊಂದವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು. ಎಐಡಿಎಸ್ಓ ರಾಜ್ಯ ಕಾರ್ರ್ಯದರ್ಶಿ ಡಾ. ಪ್ರಮೋದ್ ಮಾತನಾಡಿ, ಬಳ್ಳಾರಿ ನಗರದಲ್ಲಿ ಅಶ್ಲೀಲ ಪೋಸ್ಟರ್, ಸಿನಿಮಾ, ವೀಡಿಯೋ ಥಿಯೇಟರ್ಗಳಿಗೆ ಕಡಿವಾಣ ಹಾಕಲು ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅಶ್ಲೀಲ ಸಿನಿಮಾ, ಸಾಹಿತ್ಯ, ವೆಬ್ಸೈಟ್ಗಳಿಗೆ ಕಡಿವಾಣ ಹಾಕದೇ ಯುವಜನರಲ್ಲಿ ಬೆಳೆಯುತ್ತಿರುವ ವಿಕೃತ ಸಂಸ್ಕೃತಿಯನ್ನು ತಡೆಗಟ್ಟಲು ಸಾಧ್ಯವಿಲ್ಲ. ಆದರೂ ಕೂಡ ಸರ್ಕಾರಗಳು ಅಶ್ಲೀಲತೆಯ ಪ್ರಚಾರದ ಬಗ್ಗೆ ಚಕಾರವೆತ್ತುತ್ತಿಲ್ಲ ಎಂದು ಟೀಕಿಸಿದರು. ಪ್ರತಿಭಟನಾ ಸ್ಥಳಕ್ಕೆ ಶಾಸಕ ಅನಿಲ್ ಲಾಡ್ ಆಗಮಿಸಿ ಮಾತನಾಡಿ, ಉಡುಪಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ ಎಂಎಸ್ಸಿ ಜಿಲ್ಲಾ ಸಂಘಟಕಿ ಡಾ. ದಿವ್ಯಾ, ಎಐಎಂಎಸ್ಎಸ್ನ ಶಾಂತಾ, ಭುವನಾ, ಎಐಡಿಎಸ್ಓ ಪದಾಧಿಕಾರಿಗಳಾದ ಉಮೇಶ್, ಗೋವಿಂದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

