ಬಳ್ಳಾರಿ

ಪಾಲಿಟೆಕ್ನಿಕ್ ಕಾಲೇಜು ಆರಂಭವಿಲ್ಲ

Published On :

ಹೂವಿನಹಡಗಲಿ: ತಾಲೂಕಿಗೆ ಈ ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಆರಂಭಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಸ್ಪಷ್ಟಪಡಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಭಾರತ ಸರ್ಕಾರ ನಿಯಮಾವಳಿ ಪ್ರಕಾರ ಅಗತ್ಯವಿರುವ ಎಲ್ಲ ಮೂಲ ಸೌಲಭ್ಯಗಳು ಇದ್ದಾಗ ಮಾತ್ರ ತಾಲೂಕಿಗೆ ಮಂಜೂರಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಇದೇ ಶೈಕ್ಷಣಿಕ ವರ್ಷದಲ್ಲಿ ಆರಂಭಿಸಲು ಸಾಧ್ಯ. ನಿಯಮದಂತೆ ಈ ಸಲದ ಬಜೆಟ್ನಲ್ಲಿ ಇದರ ಕಟ್ಟಡ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಮುಂಬರುವ ಶೈಕ್ಷಣಿಕ ವರ್ಷದಿಂದ ಕಾಲೇಜನ್ನು ಆರಂಭಿಸಲಾಗುವುದು ಎಂದು ಹೇಳಿದರು.
ಬಿಡಾಡಿ ದನಗಳಿಗೆ ಕಡಿವಾಣ: ತಾಲೂಕಿನ ಮಾಗಳ, ಹಿರೇಹಡಗಲಿ, ಹಗರನೂರು, ಕಾಳೇನಹಳ್ಳಿ, ಹೊಸಹಳ್ಳಿ ಸೇರಿದಂತೆ ಇನ್ನಿತರ ಹಳ್ಳಿಗಳ ರೈತರ ಜಮೀನುಗಳಿಗೆ ಬಿಡಾಡಿ ದನಗಳ ಕಾಟದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಲಕ್ಷಾಂತರ ಬೆಳೆ ನಷ್ಟ ಉಂಟಾಗುತ್ತಿರುವ ಮಾಹಿತಿ ತಮಗೆ ಇದ್ದು, ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅವುಗಳನ್ನು ಸೆರೆ ಹಿಡಿಯಬೇಕೆ ಅಥವಾ ಅರವಳಿಕೆ ಮದ್ದು ನೀಡಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುವ ವಿಚಾರವನ್ನು ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆಂದು ಭರವಸೆ ನೀಡಿದರು.
ತಾಲೂಕಿನ ಸರ್ಕಾರಿ ಕಾಮಗಾರಿಗಳಿಗೆ ಮತ್ತು ಖಾಸಗಿ ವ್ಯಕ್ತಿಗಳು ಕಟ್ಟಿಕೊಳ್ಳುತ್ತಿರುವ ಮನೆಗಳಿಗೆ ಮರಳಿನ ಕೊರತೆ ಇರುವುದರಿಂದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಾರಿಯ ಬಜೆಟ್ ಮಂಡನೆಯಲ್ಲಿ ಈ ಕುರಿತು ಹೊಸ ಮರಳು ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವರು ತಿಳಿಸಿದ್ದಾರೆ. ಆದರಿಂದ 2-3 ತಿಂಗಳಲ್ಲಿ ಈ ಮರಳಿನ ಕೊರತೆ ಸಮಸ್ಯೆಯನ್ನು ನೀಗಿಸುತ್ತೇವೆಂದು ಹೇಳಿದರು.
ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯುವ ನೀರಿನ ಫಿಲ್ಟರ್ಬೆಡ್ ದುರಸ್ಥಿ ಮಾಡಲು ಕ್ರಮ ಕೈಗೊಳ್ಳಲಾಗಿದೆ, ಆದಷ್ಟು ಶೀಘ್ರದಲ್ಲೇ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತೇವೆ. ಆದರಿಂದ ಪಟ್ಟಣದ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.