ಕೂಡ್ಲಿಗಿ: ತಾಲೂಕಿನ ಚಪ್ಪರದಹಳ್ಳಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ದಂಧೆ ನಡೆಯುತ್ತಿದ್ದು, ಕೂಡಲೆ ಇಲ್ಲಿ ಅಕ್ರಮ ಮದ್ಯ ಮಾರಾಟ ಸ್ಥಗಿತಗೊಳಿಸಬೇಕು ಎಂದು ಗ್ರಾಮದ ಯುವಕರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಸೋಮವಾರ ಗ್ರಾಮದ ನೂರಾರು ಮುಖಂಡರು ತಾಲೂಕು ಕಚೇರಿ ಹಾಗೂ ತಾಲೂಕು ಅಬಕಾರಿ ಕಚೇರಿಗೆ ತೆರಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕು. ಈ ಕುರಿತು ಈಗಾಗಲೇ ಹಲವು ಬಾರಿ ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೂ ಇದುವರೆಗೆ ಕ್ರಮ ಕೈಗೊಂಡಿಲ್ಲ. ಕುಡುಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಗ್ರಾಮದ ಸ್ಥಿತಿಯನ್ನು ವಿವರಿಸಿದರು. ಗ್ರಾಮದಲ್ಲಿ ಕಳೆದ ಒಂದುವರೆ ವರ್ಷದಿಂದ ಈ ಅಕ್ರಮ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ದಿನಾಲು ಸಂಜೆ ಕುಡಿದು ಗಲಾಟೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸಬೇಕು ಮತ್ತು ಮಾರಾಟಗಾರರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು. ಗ್ರಾಮದ ನಾಲ್ಕಾರು ಕಡೆ ನಿರ್ಭೀತಿಯಿಂದ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಶಾಲೆ ಅಕ್ಕಪಕ್ಕದ ಅಂಗಡಿಗಳಲ್ಲೂ ಇದು ನಿರಾತಂಕವಾಗಿ ನಡೆಯುತ್ತದೆ. ಪೊಲೀಸ್ ಇಲಾಖೆಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಕೂಡಲೆ ಜಿಲ್ಲಾಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರಾದ ಸಿದ್ದೇಶ್, ಕೆ.ಎನ್. ಕೊಟ್ರೇಶ್, ಕೆ. ಕೊಟ್ರೇಶ್, ಎಂ. ನಾಗರಾಜ್, ಚಿದಾನಂದ, ಸಿ.ಎ. ಕೊಟ್ರೇಶಪ್ಪ, ಎಂ. ಚಂದ್ರಪ್ಪ ಇತರರು ಆಗ್ರಹಿಸಿದ್ದಾರೆ.