ಕಳಪೆ ರಸ್ತೆ ಕಾಮಗಾರಿ: ಕ್ರಮಕ್ಕೆ ಆಗ್ರಹ
ಹಗರಿಬೊಮ್ಮನಹಳ್ಳಿ: ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಜಲಸಂಪನ್ಮೂಲ ಇಲಾಖೆ ಅನುದಾನದಲ್ಲಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಗುಣಮಟ್ಟ ಕಳಪೆಯಾಗಿದ್ದು, ಈ ಕುರಿತಂತೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಕೂಡಲೇ ಸಂಬಂಧಿಸಿದ ಅಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸುವಂತೆ ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಪೂರ್ಯನಾಯ್ಕ ಆಗ್ರಹಿಸಿದರು.
ಅವರು ಇಲ್ಲಿನ ತಾಲೂಕು ಪಂಚಾಯ್ತಿ ಮಹಾತ್ಮಗಾಂಧಿ ಸಭಾಂಗಣದಲ್ಲಿ ಜರುಗಿದ ತಾಪಂ ಸಾಮಾನ್ಯ ಸಭೆಯಲ್ಲಿ ಕಳಪೆ ರಸ್ತೆ ಕಾಮಗಾರಿ ಕುರಿತು ವಿಷಯ ಪ್ರಸ್ತಾಪಿಸಿ, ಸುಮಾರು ರು. 3 ಕೋಟಿ ವೆಚ್ಚದಲ್ಲಿ 20ಕ್ಕೂ ಅಧಿಕ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ ರಸ್ತೆಗೆ ಹಾಕಿರುವ ಡಾಂಬರ್ ವಾರದೊಳಗೆ ಕಿತ್ತು ನೆಲ ಕಾಣುತ್ತಿದೆ. ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಕಳಪೆ ಗುಣಮಟ್ಟ ದಿಂದ ಕಾಮಗಾರಿ ನಿರ್ವಹಿಸಿದ್ದರಿಂದಲೇ ಈ ರೀತಿ ಕಳಪೆತನ ಆಗಿದೆ. ಸರಿಯಾಗಿ ಕಾಮಗಾರಿ ನಿರ್ವಹಣೆ ಸಹ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಹಲವು ಸದಸ್ಯರು ಧ್ವನಿಗೂಡಿಸಿದರು.
ಪಟ್ಟಣದ ಸಾರ್ವಜನಿಕರು ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರು ಈಗಾಗಲೆ ಕಳಪೆ ಕಾಮಗಾರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಮಾಧ್ಯಮಗಳಲ್ಲೂ ಕಳಪೆತನದ ಬಗ್ಗೆ ಸಾಕಷ್ಟು ವರದಿಗಳು ಪ್ರಕಟವಾಗಿವೆ. ಪರಿಸ್ಥಿತಿ ಈ ರೀತಿ ಇದ್ದರೂ ಸಹ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಇಲಾಖೆ ಅಧಿಕಾರಿಗಳ ನಿರ್ಲಕ್ಷತನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಗರಂ ಆದ ಇಓ: ತಾಪಂ ಸಭೆಯಲ್ಲಿ ಸ್ವತಃ ತಾಪಂ ಅಧ್ಯಕ್ಷೆಯೇ ಕಳಪೆ ಕಾಮಗಾರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತಕ್ಷಣ ಜಾಗೃತರಾದ ತಾಪಂ ಇಓ ಜಿ. ಗೋಪ್ಯಾನಾಯ್ಕ ಮೊಬೈಲ್ ಮೂಲಕ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಯಾವ ಅಧಿಕಾರಿಗಳು ಇಓ ಕರೆಗೆ ಸಿಗದ ಕಾರಣ ಇಓ ಗರಂ ಆದರು. ಸಭೆಗೆ ಗೈರು ಹಾಜರಾದ ಜಲಸಂಪನ್ಮೂಲ ಇಲಾಖೆ ಅಧಿಕಾರಿಯ ಬಗ್ಗೆ ಕ್ರಮವಹಿಸಿ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೀರಿನ ಸಮಸ್ಯೆ ಪರಿಹರಿಸಿ: ಜಲ ಮಂಡಳಿಯಿಂದ 8 ದಿನಕ್ಕೆ ಒಂದು ಬಾರಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇದರಿಂದಾಗಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಕೂಡಲೆ ಕ್ರಮ ವಹಿಸುವಂತೆ ಸದಸ್ಯರು ಮನವಿ ಮಾಡಿಕೊಂಡರು. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಟಾಸ್ಕ್ಪೋರ್ಸ್ ಅಡಿಯಲ್ಲಿ ರು. 8 ಲಕ್ಷ ಬಿಡುಗಡೆಯಾಗಿದ್ದು, ಸಮಸ್ಯೆ ನಿವಾರಣೆಗೆ ಕ್ರಮ ವಹಿಸಲಾಗುವುದು ಎಂದು ಪಂಚಾಯತ್ ರಾಜ್ ಎಂಜಿನಿಯರಿಂಗ್ ಎಇಇ ಕೇಣಿ ಬಸಪ್ಪ ಸಭೆಗೆ ಉತ್ತರಿಸಿದರು.
ತಾಪಂನ ಅಧಿಭಾರ ಶುಲ್ಕ ಅನುದಾನದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ಕಚೇರಿ ನವೀಕರಣಕ್ಕೆ ಅನುದಾನ ನೀಡುವಂತೆ ಎಇಇ ಕೇಣಿ ಬಸಪ್ಪ ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. ಆರೋಗ್ಯ, ಕೃಷಿ, ಶಿಕ್ಷಣ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ತಾಪಂ ಉಪಾಧ್ಯಕ್ಷೆ ಕುರುಬರ ನಾಗರತ್ನಾ, ಸದಸ್ಯರಾದ ಎಂ.ಎಂ. ಶಿವಕುಮಾರ, ಅಂಬಳಿ ಚಂದ್ರಪ್ಪ, ಬೆಣಕಲ್ಲು ಪ್ರಕಾಶ್, ಮೂಲಿಮನಿ ಸಾವಿತ್ರಮ್ಮ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

