ಬಳ್ಳಾರಿ ಮತ್ತೆ ಕಾಂಗ್ರೆಸ್ ಭದ್ರಕೋಟೆ
ಹೊಸಪೇಟೆ: ಬಳ್ಳಾರಿ ಜಿಲ್ಲೆಯ 9 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 7ರಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕ ಸ್ಥಾನಗಳನ್ನು ಪಡೆದುಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಮತ್ತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಭದ್ರ ಕೋಟೆ ನಿರ್ಮಾಣವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ. ರವೀಂದ್ರ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸುವ ಲಕ್ಷಣಗಳು ಸ್ಪಷ್ಟವಾಗಿವೆ.
ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆದರೆ ಸ್ಪಷ್ಟ ಬಹುಮತಕ್ಕೆ ಸ್ವಲ್ಪ ಕಡಿಮೆ ಇರುವ ಕಡೆ ಪಕ್ಷೇತರರೊಂದಿಗೆ ಮಾತುಕತೆ ನಡೆಸಿ ಅಧಿಕಾರ ನಡೆಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ರೆಡ್ಡಿಗಳ ದೌರ್ಜನ್ಯ, ದಬ್ಬಾಳಿಕೆಗೆ ಮತದಾರರು ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಶ್ರೀರಾಮುಲು ಹೊಸ ಪಕ್ಷ ಕಟ್ಟಿ ಅಧಿಕಾರಕ್ಕೆ ಬರಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಜೆಡಿಎಸ್ ಜಿಲ್ಲೆಯಲ್ಲಿ ನಶಿಸಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ ಎಂದರು. ಕಾಂಗ್ರೆಸ್ ಮುಖಂಡ ದೀಪಕ್‌ಕುಮಾರ್ ಸಿಂಗ್, ಎಚ್.ಜಿ. ಗುರುದತ್ತ, ಜಿ.ಕೆ. ಹನುಮಂತಪ್ಪ, ಬಿ.ಕಾಂ. ಮಾಬು, ಹಬೀದ್ ಹುಸೇನ್, ಡಿ. ವೆಂಕಟರಮಣ, ಹರ್ಷವರ್ಧನ್, ಫಾಹಿಂಭಾಷ ಸೇರಿದಂತೆ ಇತರರು ಗೋಷ್ಠಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

