31ರಂದು ಬಳ್ಳಾರಿಗೆ ಬಿಜೆಪಿ ಸಂಕಲ್ಪಯಾತ್ರೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮಾ. 26
ವಿಧಾನಸಭಾ ಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಆರಂಭಿಸಿರುವ ವಿಜಯ ಸಂಕಲ್ಪಯಾತ್ರೆಯು ಮಾ. 31ರಂದು ಬಳ್ಳಾರಿಗೆ ಆಗಮಿಸಲಿದ್ದು, ಅಂದು ಸಂಜೆ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಕೆ.ಎ. ರಾಮಲಿಂಗಪ್ಪ ತಿಳಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕಲ್ಪಯಾತ್ರೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್ ಸೇರಿದಂತೆ ಇತರ ನಾಯಕರು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್‌ಕುಮಾರ್ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಪಕ್ಷದ ಶಾಸಕರು, ಪದಾಧಿಕಾರಿಗಳ ಪೂರ್ವಭಾವಿ ಸಭೆ ಕರೆಯಲಾಗಿದೆ. ಮಾ. 31ರಂದು ನಡೆಯುವ ಸಭೆಯಲ್ಲಿ 10 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಆನಂದ್ ಸಿಂಗ್ ತಟಸ್ಥ: ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಅಲ್ಲಿನ ನಗರಸಭೆ ಸದಸ್ಯರು ಹಾಗೂ ಪದಾಧಿಕಾರಿಗಳನ್ನು ಕರೆದು ತಾವು ಚುನಾವಣೆಗೆ ನಿಲ್ಲುವುದಿಲ್ಲ, ತಟಸ್ಥವಾಗಿ ಉಳಿಯುವುದಾಗಿ ಹೇಳಿದ್ದಾರೆ. ಅಷ್ಟು ಬಿಟ್ಟಂತೆ ಪಕ್ಷದ ವಿಚಾರವಾಗಿ ತಮ್ಮೊಂದಿಗೆ ಯಾವುದೇ ವಿಷಯಗಳನ್ನು ಚರ್ಚಿಸಿಲ್ಲ, ರಾಜ್ಯ ಮುಖಂಡರೊಂದಿಗೆ ಚರ್ಚಿಸಿರುವ ಬಗ್ಗೆ ತಮಗೆ ಗೊತ್ತಿಲ್ಲ. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ವಷ್ಟವಾಗಿ ಹೇಳಿದ್ದಾರೆ, ಈ ಹಿನ್ನೆಲೆಯಲ್ಲಿ ಯಾವುದೇ ವಿಚಾರದ ಬಗ್ಗೆ ಮಾತನಾಡಿಲ್ಲ ಎಂದರು.
ಜಿಲ್ಲೆಯ ಎಲ್ಲ ಕ್ಷೇತ್ರದಿಂದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಬಿಜೆಪಿ ಮುಖಂಡರಿಗೆ ಅರ್ಜಿಗಳನ್ನು ಸಲ್ಲಿಸಲಾಗಿದೆ. ಬಳ್ಳಾರಿ ನಗರ ಕ್ಷೇತ್ರದಿಂದ ಸಂಜಯ್, ರಾಮಲಿಂಗಪ್ಪ, ಹಂಪಿ ರಮಣ ಆಕಾಂಕ್ಷಿಯಾಗಿದ್ದಾರೆ. ಮಾ. 28ರಂದು ಬೆಂಗಳೂರಿನಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆಯಲ್ಲಿ ಆಕಾಂಕ್ಷಿಗಳ ಕುರಿತಾಗಿ ಚರ್ಚೆ ನಡೆಯಲಿದೆ. ಅನಂತರ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಬಿಜೆಪಿ ಮುಖಂಡರಾದ ಮುರಹರಿಗೌಡ, ಎಚ್. ಹನುಮಂತಪ್ಪ, ಸಂಜಯ್, ಶಿವಾರೆಡ್ಡಿ, ಸತೀಶ್ ಚಕ್ರವರ್ತಿ, ಲಿಂಗನಗೌಡ, ಕಾಂತರಾಜ್, ರೇವಣಸಿದ್ದಪ್ಪ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

