ಮತ ಎಣಿಕೆ: ಸ್ಟ್ರಾಂಗ್ರೂಮ್ ಪರಿಶೀಲನೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮೇ 6
ಮೇ 8ರಂದು ನಡೆಯುವ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ಕಾರ್ಯ ಬಳ್ಳಾರಿ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ. ಕಾಲೇಜಿಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚಂದ್ರಗುಪ್ತಾ ಹಾಗೂ ತಹಸೀಲ್ದಾರ್ ಶರಣಪ್ಪ ಅವರು ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ ಡಾ. ಚಂದ್ರಗುಪ್ತಾ ಅವರು, ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಕ್ಕೆ ಮತಎಣಿಕೆ ಕಾರ್ಯ ಬಳ್ಳಾರಿಯ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಪ್ರಕ್ರಿಯೆ ಆರಂಭವಾಗದಲಿದೆ. ಆರಂಭದಲ್ಲಿ ಅಂಚೆ ಮತದಾನದ ಎಣಿಕೆ ನಡೆಸಲಾಗುತ್ತದೆ. ಅನಂತರ ಇವಿಎಂ ಯಂತ್ರದಲ್ಲಿನ ಮತಎಣಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ 9 ಕ್ಷೇತ್ರಗಳಲ್ಲಿ ಬಳಸಲಾದ ಇವಿಎಂ ಮತಯಂತ್ರಗಳನ್ನು ಬಳ್ಳಾರಿ ರಾವ್ ಬಹದ್ದೂರ್ ಕಾಲೇಜಿನಲ್ಲಿ ಸ್ಟ್ರಾಂಗ್ರೂಮ್ಗಳಲ್ಲಿ ಇಡಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ. ಮತಎಣಿಕೆ ಕೇಂದ್ರದಲ್ಲಿ 10 ಸ್ಟ್ರಾಂಗ್ರೂಮ್ಗಳನ್ನು ಸ್ಥಾಪಿಸಲಾಗಿದೆ. ಸ್ಟ್ರಾಂಗ್ರೂಮ್ ಸುತ್ತಲು ಸೂಕ್ತ ಭದ್ರತೆಗಾಗಿ ಅರೆಸೇನಾಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರದಲ್ಲಿ 9 ಕೌಂಟಿಂಗ್ ಸೆಂಟರ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಅಂಚೆ ಮತದಾನದ ಎಣಿಕೆಗೆ ಪ್ರತ್ಯೇಕ ಕೌಂಟಿಂಗ್ ಸೆಂಟರ್ ಸ್ಥಾಪಿಸಲಾಗಿದೆ. ಪ್ರತಿ ಮತಎಣಿಕೆಯ ರೂಮ್ನಲ್ಲಿ 11 ರಿಂದ 14 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಮತಎಣಿಕೆ ಕೇಂದ್ರದಲ್ಲಿ ಮೈಕ್ರೋ ಅಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳು ಸೇರಿದಂತೆ 300 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸಿಆರ್ಪಿಎಫ್ನ ಒಂದು ತುಕಡಿ, 4 ಕೆಎಸ್ಆರ್ಪಿ ಸಿಬ್ಬಂದಿ, ಸ್ಥಳೀಯ ಪೊಲೀಸರು ಸೇರಿದಂತೆ 250ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. 3 ಹಂತದಲ್ಲಿ ಭದ್ರತೆಯನ್ನು ಒದಗಿಸಲಾಗಿದೆ ಎಂದರು.
10 ಸಿಸಿ ಕ್ಯಾಮೆರಾ ಅಳವಡಿಕೆ: ಮತಎಣಿಕೆ ಕೇಂದ್ರದಲ್ಲಿ 10ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಎಣಿಕೆ ಕೇಂದ್ರದಲ್ಲಿ ವಿಡಿಯೋ, ಛಾಯಾಚಿತ್ರಕಾರರನ್ನು ನೇಮಿಸಲಾಗಿದೆ. ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶದಲ್ಲಿ ಪ್ರವೇಶ ಮಾಡಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಭದ್ರತಾ ಸಿಬ್ಬಂದಿಗೆ ಪ್ರವೇಶ ನಿಷೇಧಿಸಿದೆ. ಅಭ್ಯರ್ಥಿಗಳಿಗೆ, ಪಕ್ಷಗಳ ಏಜೆಂಟರಿಗೆ ಹಾಗೂ ಮಾಧ್ಯಮದವರಿಗೆ ಪ್ರತ್ಯೇಕ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ಚುನಾವಣೆ ಆಯೋಗದಿಂದ ನೀಡಿರುವ ಗುರುತಿನಿ ಚೀಟಿ ಹೊಂದಿದವರಿಗೆ ಮಾತ್ರ ಎಣಿಕೆ ಕೇಂದ್ರ ಪ್ರವೇಶಕ್ಕೆ ಅವಕಾಶವಿದೆ ಎಂದು ತಿಳಿಸಿದರು.
ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ: ಅಭ್ಯರ್ಥಿಗಳಿಗೆ, ಜನಪ್ರತಿನಿಧಿಗಳಿಗೆ ಹಾಗೂ ಮಾಧ್ಯಮದವರಿಗೆ ಪ್ರತ್ಯೇಕ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಮತಎಣಿಕೆ ಕೇಂದ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಂಪು ಗುಂಪಾಗಿ ಜನರು ಸೇರುವಂತಿಲ್ಲ. ವಿಜಯೋತ್ಸವ, ಮೆರವಣಿಗಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಮುರುಗಣ್ಣನವರ್, ಪೊಲೀಸ್ ಅಧಿಕಾರಿಗಳಾದ ನಾಗರಾಜ್, ಜಯಕುಮಾರ್ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

