ಗ್ರಾಮೀಣರಿಗೆ ಸಮರ್ಪಕ ನೀರು ಪೂರೈಸಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮೇ 16
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಕೆಡಿಪಿ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕುಡಿಯುವ ನೀರನ್ನು ಸಮರ್ಪಕವಾಗಿ ಪೋಲಾಗದಂತೆ ಪೂರೈಕೆ ಮಾಡಬೇಕು. ಹಳ್ಳಿಗಳಲ್ಲಿ ನೀರು ಪೂರೈಸುವ ಸಮಯ ಪ್ರಚಾರಪಡಿಸಿ ಆ ಸಂದರ್ಭದಲ್ಲಿ ನೀರನ್ನು ಸಂಗ್ರಹಿಸುವಂತೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕು. ನೀರು ಸರಬರಾಜು ಪೈಪ್ಗಳಿಗೆ ಮೋಟರ್ ಅಳವಡಿಸಿಕೊಳ್ಳಬಾರದು. ಒಂದು ವೇಳೆ ಅಳವಡಿಸಿಕೊಂಡಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ನೀರು ಪೋಲು ಮಾಡಿದರೆ ದಂಡ ವಿಧಿಸಲಾಗುವುದು. ನೀರಿನ ಅಭಾವವಿರುವ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ಫ್ಲೋರೈಡ್ಮುಕ್ತ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದರು.
ಇಲಾಖೆಗಳ ಕ್ರಿಯಾ ಯೋಜನೆಗೆ ಜಿಪಂ ಅನುಮೋದನೆ ನೀಡಿ ಆಡಳಿತಾತ್ಮಕವಾಗಿ ಬೆಂಬಲಿಸಿ ಆಗಾಗ್ಗೆ ಸೂಚನೆ ನೀಡುತ್ತಿದೆ. ಎಲ್ಲ ಇಲಾಖೆಗಳು ಸಂಬಂಧಿಸಿದ ಅಧಿಕಾರಿಗಳೊಂದಿಗೆ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಸದಸ್ಯರೊಂದಿಗೆ ಚರ್ಚಿಸಿ ತುಲನಾತ್ಮಕವಾಗಿ ಸಮಗ್ರ ಕ್ರಿಯಾ ಯೋಜನೆಯನ್ನು ಮೇ 20ರೊಳಗೆ ನೀಡಬೇಕು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಪ.ಜಾತಿ, ಪ.ಪಂಗಡದ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕೆಂದರು.
ಕಾಮಗಾರಿ ಪೂರ್ಣಗೊಳಿಸಿ: ವಿವಿಧ ವಸತಿ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈಗಾಗಲೇ ನಿರ್ಮಿಸಿದ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಬೇಕು. ಗ್ರಾಮ ಸಭೆಗಳಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಗ್ರಾಮ ಸಭೆಗಳು ನಡೆದ ಸಂದರ್ಭದಲ್ಲಿ ವಿಡಿಯೋ ಚಿತ್ರೀಕರಣ ನಡೆಸಿ ಜಿಪಂಗೆ ಪೂರೈಕೆ ಮಾಡಬೇಕು. ಜೂನ್ ನಂತರ ಪ್ರಾರಂಭವಾಗದೇ ಇರುವ ಕಾಮಗಾರಿಗಳು ರದ್ದುಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವಸತಿ ಕಾಮಗಾರಿಗಳನ್ನು ಜೂನ್ 30ರೊಳಗೆ ಪ್ರಾರಂಭಿಸಿ ವರದಿ ನೀಡಬೇಕು ಎಂದು ತಾಕೀತು ಮಾಡಿದರು.
2012-13ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಅತಿಕಡಿಮೆ ಗುರಿ ಸಾಧಿಸಿರುವ ಬಗ್ಗೆ ಅನುಪಾಲನಾ ವರದಿಯಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮರ್ಪಕ ಕಾರಣ ನೀಡದೆ ಪ್ರಸ್ತುತ ವರ್ಷ ನಿಗದಿಪಡಿಸಿದ ಗುರಿಯನ್ನು ಪೂರ್ಣ ಪ್ರಮಾಣದಲ್ಲಿ ಸಾಧಿಸಬೇಕು. ದೇವದಾಸಿಯರು ಹೆಚ್ಚಿರುವ ತಾಲೂಕುಗಳಲ್ಲಿ ಹೆಚ್ಚಿನ ಗುರಿಯನ್ನು ಹಾಕಿಕೊಂಡು ಸಾಧನೆಗೈಯ್ಯುವಂತೆ ದೇವದಾಸಿ ಪುನರ್ವಸತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಜಾಗ್ರತೆ ವಹಿಸಿ: ಅಪೂರ್ಣ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಹಸ್ತಾಂತರಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಜವಾಬ್ದಾರಿಯುತ ಕಾರ್ಯನಿರ್ವಹಿಸಬೇಕು ಎಂದ ಅವರು, ಎಲ್ಲ ಶಾಲೆಗಳ ಮುಖ್ಯೋಪಾಧ್ಯಾಯರು ತಮ್ಮ ಶಾಲೆಗಳಿಗೆ ನೀರು ಪೂರೈಕೆ ಹಾಗೂ ಶೌಚಾಲಯ ವ್ಯವಸ್ಥೆ ಬಗ್ಗೆ ಆದ್ಯತೆ ನೀಡಿ ಜಾಗ್ರತೆ ವಹಿಸಬೇಕು ಎಂದರು.
ಉಪಕಾರ್ಯದರ್ಶಿ ನಂದೀಶ ಮಾತನಾಡಿ, ಯಾವುದೇ ಇಲಾಖೆಗಳ ಕಾಮಗಾರಿಗಳನ್ನು ನಿಗದಿಪಡಿಸಿದ ಅವಧಿಯಲ್ಲಿ ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಅವಧಿ ಮೀರಿದಲ್ಲಿ ಕಾಮಗಾರಿಗಳ ವೆಚ್ಚ ಅಧಿಕವಾಗಿ, ಸರ್ಕಾರಕ್ಕೆ ಆರ್ಥಿಕ ಹೊರೆಯಾಗಲಿದೆ ಎಂದರು. ಜಿಪಂ ಅಧ್ಯಕ್ಷೆ ಸುಮಂಗಲಮ್ಮ ಗುಬಾಜಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮಮತಾ ಸುರೇಶ್, ವಿವಿಧ ಸ್ಥಾಯಿ ಸಮಿತಿಗಳ ಪದಾಧಿಕಾರಿಗಳು, ಉಪ ಕಾರ್ಯದರ್ಶಿ ಮಹೇಶ್ವರಯ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

