ಸೌಲಭ್ಯವಿದ್ದರೂ ಕಡಿಮೆ ಫಲಿತಾಂಶ: ತಾಪಂ ಸದಸ್ಯರ ಆಕ್ರೋಶ
ಹೊಸಪೇಟೆ: ಶಿಕ್ಷಣ ಇಲಾಖೆಗೆ ಸರ್ಕಾರ ಸಾಕಷ್ಟು ಸೌಲಭ್ಯ ನೀಡಿದೆ. ಇಷ್ಟಾದರೂ ತಾಲೂಕಿನ ಸರ್ಕಾರಿ ಶಾಲೆಗಳ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಉತ್ತಮವಾಗಿ ಬಂದಿಲ್ಲ. ಈ ವರ್ಷ 7ನೇ ಸ್ಥಾನ ಪಡೆದು ಅತ್ಯಂತ ಕೆಳಮಟ್ಟದ ಫಲಿತಾಂಶ ಪಡೆದಿದೆ. ಇದಕ್ಕೆ ಹೊಣೆ ಯಾರು ಎಂದು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೋರಿ ಫಕ್ಕೀರಪ್ಪ, ಸದಸ್ಯ ಯು. ಸೋಮಪ್ಪ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಮಂಗಳವಾರ ತಾಪಂ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೊಸಪೇಟೆ ತಾಲೂಕಿನ ಫಲಿತಾಂಶ ತೀರಾ ಕಡಿಮೆಯಾಗಿದೆ. ಕಳೆದ ಬಾರಿ ಜಿಲ್ಲೆಯಲ್ಲಿ 3ನೇ ಸ್ಥಾನ ಪಡೆದರೆ, ಈ ಬಾರಿ 7ನೇ ಸ್ಥಾನ ಪಡೆದಿದೆ. ಸರ್ಕಾರ ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಬಿಸಿಯೂಟ, ಸೈಕಲ್, ವಿದ್ಯಾರ್ಥಿ ವೇತನ ಸೇರಿದಂತೆ ಇತರೆ ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ. ಹೀಗಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದಿದೆ ಎಂದು ಕಿಡಿಕಾರಿದರು.
ವಿದ್ಯಾರ್ಥಿಗಳನ್ನು ಪ್ರೇರೇಪಿಸಿ: ತಾಪಂ ಇಓ ಬಾಲಸ್ವಾಮಿ ದೇಶಪ್ಪ ಮಾತನಾಡಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಉತ್ತಮ ಫಲಿತಾಂಶ ಬರುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು. ವಿದ್ಯಾರ್ಥಿಗಳು ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗುವಂತೆ ಶಿಕ್ಷಕರು ನಿರಂತರ ಪ್ರಯತ್ನಿಸಬೇಕು. ಎಸ್ಡಿಎಂಸಿ ಅಧ್ಯಕ್ಷ ಹಾಗೂ ಸದಸ್ಯರೊಂದಿಗೆ ಶಾಲಾ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರಕ್ಕಾಗಿ ಮೇಲಧಿಕಾರಿಗಳ ಗಮನಕ್ಕೆ ತಂದು ತಕ್ಷಣ ಬಗೆಹರಿಸಿಕೊಳ್ಳಬೇಕು. ಆ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಸಲಹೆ ಮಾಡಿದರು.
ಕ್ರಿಯಾ ಯೋಜನೆ: ಬಿಇಓ ಪಿ. ಸುನಂದಾ ಮಾತನಾಡಿ, ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕು ಕಡಿಮೆ ಫಲಿತಾಂಶ ಪಡೆದಿದ್ದಕ್ಕೆ ನೈತಿಕ ಹೊಣೆ ಹೊತ್ತಿದ್ದೇನೆ. ತಾಲೂಕಿನ 22 ಸರ್ಕಾರಿ ಪ್ರೌಢಶಾಲೆಗಳಲ್ಲೂ ಬರುವ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಶಕ್ತಿ ಮೀರಿ ಪ್ರಯತ್ನಿಸುತ್ತೇವೆ. ಈಗಾಗಲೇ ಯಾವ ಶಾಲೆಗಳು ಕಡಿಮೆ ಫಲಿತಾಂಶ ಪಡೆದಿವೆ ಎಂಬುದನ್ನು ಪಟ್ಟಿ ಮಾಡಲಾಗಿದೆ. ಕಡಿಮೆ ಫಲಿತಾಂಶ ಬಂದ ಶಾಲೆಗಳಲ್ಲಿ ಬೋಧಿಸುವ ಪಾಠ ವೀಕ್ಷಣೆಗೆ ಸಮಿತಿ ರಚಿಸಲಾಗಿದೆ. ಜೂನ್ ತಿಂಗಳಿಂದಲೇ ಈ ಪದ್ಧತಿ ಜಾರಿಗೆ ಬರಲಿದೆ. ಉತ್ತಮ ಫಲಿತಾಂಶ ಪಡೆಯಲು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ರೂಪಿಸಿದೆ. ಅದರಂತೆ ಶಿಕ್ಷಣ ನೀಡುವ ಮೂಲಕ ಉತ್ತಮ ಫಲಿತಾಂಶ ಪಡೆಯಲು ಪ್ರಯತ್ನಿಸುತ್ತೇವೆ ಎಂದು ಸಭೆಗೆ ತಿಳಿಸಿದರು.
ತಾಪಂ ಅಧ್ಯಕ್ಷೆ ತಾರಿಹಳ್ಳಿ ಹಾಲಮ್ಮ, ಉಪಾಧ್ಯಕ್ಷೆ ಕೆ. ದ್ರಾಕ್ಷಾಯಿಣಿ ಸೇರಿದಂತೆ ತಾಪಂ ಸದಸ್ಯರು, ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

