ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 3
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ರಾಜಿಯಾಗುವಂತಹ ಪ್ರಕರಣಗಳನ್ನು ಜನತಾ ನ್ಯಾಯಾಲಯದ ಮುಖಾಂತರ ಇತ್ಯರ್ಥಗೊಳಿಸಲು ಉದ್ದೇಶಿಸಿದೆ. ಅದರಂತೆ ಈಗಾಗಲೇ ಜಿಲ್ಲೆಯಲ್ಲಿ ಸೆಪ್ಟೆಂಬರ್ನಿಂದ ಇಲ್ಲಿವರೆಗೆ 932 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ವಿಶ್ವೇಶ್ವರ ಭಟ್ ತಿಳಿಸಿದರು.
ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸೆ. 1ರಿಂದ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ (ಮೆಗಾ ಲೋಕ್ ಅದಾಲತ್) ಮೂಲಕ ಇತ್ಯರ್ಥಗೊಳಿಸಿಕೊಳ್ಳಲು ನ. 23ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಸುಮಾರು 24 ಸಾವಿರ ಪ್ರಕರಣಗಳು ವಿಲೇವಾರಿಯಾಗಬೇಕಿದೆ. ಇವುಗಳಲ್ಲಿ 3,564 ಚೆಕ್ ಬೌನ್ಸ್, 1220 ಅಪಘಾತ ಪ್ರಕರಣಗಳು, 1,323 ಪಾರ್ಟೆಷನ್, 684 ಅಪರಾಧ ಪ್ರಕರಣಗಳಿವೆ. ಸುಮಾರು 8 ಸಾವಿರ ಪ್ರಕರಣಗಳು ಜನತಾ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಸಂಧಾನಕಾರರಾಗಿ ಓರ್ವ ನ್ಯಾಯಾಧೀಶರು ಮತ್ತು ಓರ್ವ ವಕೀಲರು ಇರುತ್ತಾರೆ. ಜಿಲ್ಲಾ ನ್ಯಾಯಾಲಯ ಸೇರಿದಂತೆ ಎಲ್ಲ ತಾಲೂಕುಗಳ ಎಲ್ಲ ನ್ಯಾಯಾಲಯ ಸಂಕೀರ್ಣಗಳಲ್ಲಿ ಏರ್ಪಡಿಸಲಾಗುವುದು. ಸಂಜೆ 4.30 ಗಂಟೆಯಿಂದ ಈ ಪ್ರಕರಣಗಳ ಕಲಾಪ ನಡೆಸಲಾಗುವುದು ಎಂದು ಹೇಳಿದರು.
ಲೋಕ ಅದಾಲತ್ ಚಾಲ್ತಿಯಲ್ಲಿದ್ದು, ಈ ವರೆಗೆ 932 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇಲ್ಲಿ ಪ್ರಕರಣಗಳು ಇತ್ಯರ್ಥವಾದರೆ ಮತ್ತೆ ನ್ಯಾಯಾಲಯಕ್ಕೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದೇಶವು ಡಿಕ್ರಿಯಾಗಿ ನೀಡಲಾಗುತ್ತದೆ. ಇದು ಚೆಕ್ ಬೌನ್ಸ್ ಪ್ರಕರಣಗಳಿಗೆ ಮತ್ತಷ್ಟು ಸೂಕ್ತವಾಗಿದೆ. ಕೋರ್ಟ್ ಶುಲ್ಕ ಇರುವುದಿಲ್ಲ. ಚೆಕ್ ಕೊಟ್ಟವರಿಗೆ ಶಿಕ್ಷೆ ಇರುವುದಿಲ್ಲ. ವ್ಯಾಜ್ಯಗಳನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದು. ಜನತಾ ನ್ಯಾಯಾಲಯದಲ್ಲಿ ವಕೀಲರ ಮೂಲಕವೇ ಭಾಗವಹಿಸಬೇಕೆನ್ನುವ ನಿಯಮವಿಲ್ಲ. ನೇರವಾಗಿ ಕಕ್ಷಿದಾರರೇ ಭಾಗವಹಿಸಬಹುದು. ಉಭಯ ಪಕ್ಷದಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ಸೌಹಾರ್ದಯುತವಾಗಿ ಪ್ರಕರಣ ಇತ್ಯರ್ಥಗೊಳ್ಳುವುದರಿಂದ ಬಾಂಧವ್ಯ ಉಳಿಯಲಿದೆ. ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡರೆ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿ ಮಾಡಲಾಗುವುದು. ಕಡಿಮೆ ಖರ್ಚಿನಲ್ಲಿ ಶೀಘ್ರ ವಿಲೇವಾರಿಯಾಗಲಿವೆ.
ಕಕ್ಷಿದಾರರು ಈ ಮೆಗಾ ಅದಾಲತ್ನಲ್ಲಿ ಪಾಲ್ಗೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಿಜೆಎಂ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಜಿಲ್ಲಾ ಕಾರ್ಯದರ್ಶಿ ಶಾಂತ, ವಕೀಲರ ಸಂಘದ ಅಧ್ಯಕ್ಷ ಸಿದ್ದಾರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

