ತಿಂಗಳಿಗೊಮ್ಮೆ ಅಭಿವೃದ್ಧಿ ಪರಿಶೀಲನೆ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ನ. 6
ವಿಜಯನಗರ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಅನಾಥ ಪ್ರಜ್ಞೆ ಕಾಡಬಾರದು ಎಂದು ಹೊಸಪೇಟೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿದ್ದು, ತಿಂಗಳಿಗೊಮ್ಮೆ ಅಭಿವೃದ್ಧಿ ಪರಿಶೀಲನಾ ಸಭೆಯನ್ನು ಕಡ್ಡಾಯವಾಗಿ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ನಾಯ್ಕ ಹೇಳಿದರು.
ಪ್ರತಿ ಎರಡು ತಿಂಗಳಿಗೊಮ್ಮೆ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾವು ಭಾಗವಹಿಸುವ ಮೂಲಕ ಕ್ಷೇತ್ರಗಳ ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ಹರಿಸಲಾಗುತ್ತದೆ ಎಂದರು. ಅವರು ನಗರದ ಅಮರಾವತಿ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಜಯನಗರ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು ಇಲ್ಲ ಎಂದು ಈ ಕ್ಷೇತ್ರಗಳಲ್ಲಿ ಹೇಳೋರು ಇಲ್ಲ, ಕೇಳೋರಿಲ್ಲ ಎಂದು ಅಧಿಕಾರಿಗಳು ಬೇಕಾಬಿಟ್ಟಿ ಮತ್ತು ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸದೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು. ಒಂದು ವೇಳೆ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಅವ್ಯವಹಾರ ನಡೆಸಿದ್ದೆ ಆದಲ್ಲಿ ಅಂಥಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ಮುಟ್ಟಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಅಧಿಕಾರಿಗಳು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಎಲ್ಲಾ ರಸ್ತೆ ಅಭಿವೃದ್ಧಿಯಾಗಲಿ: ಹಂಪಿ ಉತ್ಸವ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 15ರೊಳಗಾಗಿ ಎಲ್ಲಾ ರಸ್ತೆಗಳು ಅಭಿವೃದ್ಧಿಯಾಗಬೇಕು. ಯಾವುದೆ ಕಾರಣಕ್ಕೂ ರಸ್ತೆಗಳ ಅಭಿವೃದ್ಧಿಯಲ್ಲಿ ವಿಳಂಬ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಹಂಪಿ ಉತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಮತ್ತು ಯಾವುದೆ ತೊಂದರೆಗಳು ಉಂಟಾಗದಂತೆ ನಡೆಸಬೇಕಾಗಿದೆ ಎಂದು ಹೇಳಿದರು.
ಮರಿಯಮ್ಮನಹಳ್ಳಿಯ ಕುಡಿಯುವ ನೀರಿನ ಸಮಸ್ಯೆಯನ್ನು ಇನ್ನರೆಡು ದಿನಗಳ ಒಳಗಾಗಿ ಬಗೆಹರಿಸಬೇಕು. ಇದೆ ರೀತಿ ಹೊಸಪೇಟೆ ನಗರದಲ್ಲಿ ಸಾಕಷ್ಟು ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಎರಡು ವರ್ಷಗಳಿಂದ ನಡೆಯುತ್ತಿರುವ ಒಳಚರಂಡಿ ಯೋಜನೆಯನ್ನು ಡಿಸೆಂಬರ್ ವೇಳೆಗೆ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗುತ್ತಿಗೆದಾರರಿಂದ ವಸೂಲಿ ಮಾಡಿ: ಕಂಪ್ಲಿ- ಕುಡುತಿನಿ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ತಜ್ಞರ ವರದಿ ಬಂದಿದ್ದು, ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಗುತ್ತಿಗೆದಾರರಿಂದ ಬಾಕಿ ಮುಟ್ಟುಗೋಲು ಹಾಕಿಕೊಳ್ಳಬೇಕು. ರಸ್ತೆ ನಿರ್ಮಾಣದ ಸಂದರ್ಭದಲ್ಲಿ ಆಗ ಅಧಿಕಾರಿಗಳು ಯಾರಿದ್ದರು ಎನ್ನುವ ಮಾಹಿತಿ ನೀಡಬೇಕು. ಆ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಹಗರಿಬೊಮ್ಮನಹಳ್ಳಿ ಶಾಸಕ ಎಸ್. ಭೀಮಾನಾಯ್ಕ, ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ, ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್, ಜಿಪಂ ಸಿಇಒ ಮಂಜುನಾಥ ನಾಯಕ್, ಸಹಾಯಕ ಆಯುಕ್ತ ಪಿ. ಸುನೀಲ್ಕುಮಾರ್, ಜಿಪಂ ಸದಸ್ಯ ಅನ್ನದಾನ ರೆಡ್ಡಿ, ರೋಗಾಣಿ ಹುಲುಗಪ್ಪ, ಅನಿತಾ ಆನಂದ್, ತಾಪಂ ಉಪಾಧ್ಯಕ್ಷೆ ದ್ರಾಕ್ಷಾಯಿಣಿ, ಸದಸ್ಯರಾದ ಕೋರಿ ಫಕ್ಕೀರಪ್ಪ, ಯು. ಸೋಮಪ್ಪ, ಲಕ್ಷ್ಮಣ, ಸಿ.ಡಿ. ಮಹಾದೇವ್, ಭೀಮಾನಾಯ್ಕ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ವಿಜಯನಗರ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಿಲ್ಲವೆಂದು ಅಧಿಕಾರಿಗಳು ಬೇಕಾಬಿಟ್ಟಿ, ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸಬಾರದು. ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಅವ್ಯವಹಾರ ನಡೆಸಿದ್ದೆ ಆದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ಪರಮೇಶ್ವರ ನಾಯ್ಕ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

