ಶಾಲಾ ಮಕ್ಕಳಿಂದ ಜಾಥಾ, ವಿವಿಧ ಸ್ಪರ್ಧೆ
ಮುನಿರಾಬಾದ್: ಇಲ್ಲಿನ ಸ್ವಾತಂತ್ರ್ಯ ಯೋಧ ಪಿ. ಲಿಂಗಯ್ಯ ಸ್ಮಾರಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು.
ಶಾಲಾ ಮಕ್ಕಳಿಂದ ಜಾಥಾ, ಶಾಲಾ ಮಕ್ಕಳ ಮನೋವಿಕಾಸಕ್ಕಾಗಿ ಮನೋರೋಗ ತಜ್ಞ ಪ್ರಸನ್ನ ಅವರೊಂದಿಗೆ ಸಂವಾದ ಹಾಗೂ ಮಕ್ಕಳಿಗೆ ಬೆಂಕಿ ಹಚ್ಚದೆ ಅಡುಗೆ ಮಾಡುವ ಸ್ಪರ್ಧೆ, ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಜನರಲ್ಲಿ ಪರಿಸರ ರಕ್ಷಣೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲೆಯ 100ಕ್ಕೂ ಅಧಿಕ ಮಕ್ಕಳು ಊರಿನ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ, ಸಾರ್ವಜನಿಕರಲ್ಲಿ ಪರಿಸರ ರಕ್ಷಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.
ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮನೋರೋಗ ತಜ್ಞ ಡಾ. ಪ್ರಸನ್ನ ಮಾತನಾಡಿ, ಪಾಲಕರು ತಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಸಿಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಬೇಕೆಂದು ಭಾರಿ ಒತ್ತಡ ಹೇರುತ್ತಾರೆ. ಹೀಗಾಗಿ ಶಾಲಾ, ಕಾಲೇಜು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಅಧಿಕಗೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪಾಲಕರು ಮಕ್ಕಳಲ್ಲಿ ಭಯ ಹುಟ್ಟಿಸುತ್ತಿದ್ದಾರೆ. ಇದರಿಂದ ಅವರ ಮನೋಬಲ ಕುಗ್ಗುತ್ತಿದೆ. ಪ್ರತಿಯೊಬ್ಬ ಮಕ್ಕಳಲ್ಲೂ ಸಾಧನೆ ಮಾಡುವ ಸಾಮರ್ಥ್ಯ ಇರುತ್ತದೆ. ಮಕ್ಕಳು ಆಸಕ್ತಿ, ಶ್ರದ್ಧೆಯಿಂದ ಓದಿದರೆ ಉತ್ತಮ ಸಾಧನೆ ಮಾಡುತ್ತಾರೆ. ಪಾಲಕರು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು ಎಂದರು.
ಫುಡ್ ವಿದೌಟ್ ಫೈರ್ ಸ್ಪರ್ಧೆಯಲ್ಲಿ ಸುಮಾರು 34 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಥಳದಲ್ಲೇ ಒಲೆ ಹಚ್ಚದೆ ವಿವಿಧ ತಿನಿಸುಗಳನ್ನು ತಯಾರಿಸಿದರು. ತೀರ್ಪುಗಾರ್ತಿಯಾಗಿ ಸ್ತ್ರೀರೋಗ ತಜ್ಞೆ ಡಾ. ಶೈಲಜಾ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಐಶ್ವರ್ಯಾ, ರುಚಿಕಾ ಹಾಗೂ ಭಾವನಾ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದರು. ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಿ. ಸಾಂಬಶಿವರಾವ್, ಮುಖ್ಯೋಪಾಧ್ಯಾಯಿನಿ ಪದ್ಮಶ್ರೀ ಶ್ರೀಧರ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

