ಬಳ್ಳಾರಿ

ಜವಾಬ್ದಾರಿ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ: ಭೈರಪ್ಪ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 18
ಸರ್ಕಾರದಿಂದ ಹಲವು ಸೌಲಭ್ಯಗಳನ್ನು ಪಡೆಯುತ್ತಿರುವ ಸರ್ಕಾರಿ ನೌಕರರು ತಮಗೆ ಸರ್ಕಾರ ನೀಡಿದ ಜವಾಬ್ದಾರಿಯ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಲ್. ಭೈರಪ್ಪ ನೌಕರರಿಗೆ ಕಿವಿಮಾತು ಹೇಳಿದರು.
ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪರಿಸ್ಥಿತಿ ಬದಲಾಗಿದೆ: ದಕ್ಷಿಣ ಭಾರತದಲ್ಲಿ ಕರ್ನಾಟಕವನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ರಾಜ್ಯದಲ್ಲಿ ಸೇವಾ ನಿವೃತ್ತಿಯನ್ನು 60 ವರ್ಷಕ್ಕೆ ನಿಗದಿಗೊಳಿಸಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಂಘದ ಮನವಿಗೆ ಸ್ಪಂದಿಸಿ, 58ರಿಂದ 60ಕ್ಕೆ ನಿವೃತ್ತಿ ವಯಸ್ಸನ್ನು ಹೆಚ್ಚಿಸಿದ್ದಾರೆ. ಕೇವಲ ಹೋರಾಟಗಳಿಂದಲೆ ತುಟ್ಟಿಭತ್ಯೆ, ವೇತನ ಪಡೆಯಬೇಕಿದ್ದ ಪರಿಸ್ಥಿತಿ 12 ವರ್ಷಗಳಿಂದ ಬದಲಾಗಿದೆ. ನೌಕರರ ಹಲವು ಬೇಡಿಕೆಗಳ ಪೈಕಿ ಕೆಲವು ಮಾತ್ರ ಈಡೇರಿದ್ದು, ಇನ್ನು ಈಡೇರಬೇಕಿವೆ. ಆದ್ದರಿಂದ ಸರ್ಕಾರದಿಂದ ಹಲವು ಸೌಲಭ್ಯಗಳನ್ನು ಪಡೆಯುತ್ತಿರುವ ನೌಕರರು ತಮಗೆ ಸರ್ಕಾರ ನೀಡಿದ ಜವಾಬ್ದಾರಿಯ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.
ಮೂಲ ಸೌಕರ್ಯ ನೀಡಲಿ: ರಾಜ್ಯದಲ್ಲಿ ರಚನೆಯಾದ ಹೊಸ ಸರ್ಕಾರಗಳು ಜನ ಕಲ್ಯಾಣಕ್ಕಾಗಿ ತನ್ನದೆ ಆದ ಯೋಜನೆಗಳನ್ನು ಜಾರಿಗೊಳಿಸಿವೆ. ಆದರೆ, ಈ ಯೋಜನೆಗಳು ಗ್ರಾಮೀಣ ಪ್ರದೇಶಗಳಿಗೂ ತಲುಪಬೇಕಾದರೆ, ಸಮರ್ಪಕವಾಗಿ ಅನುಷ್ಠಾನಗೊಳಿಸುವ ನೌಕರರಿಗೆ ಮುಖ್ಯವಾಗಿ ಮೂಲ ಸೌಕರ್ಯ ಕಲ್ಪಿಸಬೇಕು. ವೇತನ, ತುಟ್ಟಿಭತ್ಯೆ ಪರಿಷ್ಕರಿಸಬೇಕು ಎಂದ ಅವರು, ರಾಜ್ಯ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಸಕಾಲ, ಮಾಹಿತಿ ಹಕ್ಕು ನಿಯಮಗಳಿಗೆ ಸೌಕರ್ಯ ಕಲ್ಪಿಸಬೇಕೆಂದರು.
ಸಂಘದ ರಾಜ್ಯ ಕಾರ್ಯದರ್ಶಿ ಪಟೇಲ್ ಪಾಂಡು, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರುಣಪ್ರತಾಪ್ ರೆಡ್ಡಿ ಮಾತನಾಡಿದರು. ಜಿಲ್ಲಾಧ್ಯಕ್ಷ ಎಂ.ಟಿ. ಮಲ್ಲೇಶ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ಖಜಾಂಚಿ ಯೋಗಾನಂದ ಸೇರಿದಂತೆ ಇತರರು ಇದ್ದರು. ರಾಜಾರೆಡ್ಡಿ ಪ್ರಾಸ್ತಾವಿಕ ಮಾತನಾಡಿದರು. ಮೆಹತಾಬ್, ವಿ.ಟಿ. ದಕ್ಷಿಣಾ ಮೂರ್ತಿ ನಿರೂಪಿಸಿ, ವಂದಿಸಿದರು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಗೌರವಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.