ಅವ್ಯವಸ್ಥೆಗೆ ಕ್ರೀಡಾಪಟುಗಳ ಆಕ್ರೋಶ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 24
ರಾಜ್ಯ ಮಟ್ಟದ ಗ್ರಾಮೀಣ ಪೈಕಾ ಕ್ರೀಡಾಕೂಟ ಭಾನುವಾರದಿಂದ ಆರಂಭವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಕ್ರೀಡಾಕೂಟಕ್ಕೆ ಆಗಮಿಸಿದ ಕ್ರೀಡಾಪಟುಗಳಿಗೆ ಸರಿಯಾದ ವಸತಿ, ಊಟದ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿ, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಹಾಗೂ ಶಿಕ್ಷಕರು ಕ್ರೀಡಾ ವಸತಿ ನಿಲಯದ ಮುಂದೆ ಪ್ರತಿಭಟನೆ ನಡೆಸಿ, ಆಯೋಜಕರು ಮಾಡಿರುವ ಅವ್ಯವಸ್ಥೆಗೆ ಅಸಮಾಧಾನ ವ್ಯಕ್ತಪಡಿಸಿದರು.
ಮೂರು ದಿನಗಳವರೆಗೆ ನಡೆಯಲಿರುವ ಕ್ರೀಡಾಕೂಟಕ್ಕೆ ಕೊಪ್ಪಳ, ಹಾಸನ, ಯಾದಗಿರಿ, ಶಿವಮೊಗ್ಗ, ಹಾವೇರಿ, ದಾವಣಗೆರೆ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಕ್ರೀಡಾಪಟುಗಳಿಗೆ ಸೂಕ್ತ ಸೌಲಭ್ಯ ವ್ಯವಸ್ಥೆ ಮಾಡಿಲ್ಲ. ಪ್ರತಿ ವಿದ್ಯಾರ್ಥಿಗಳಿಗೆ ಮೂರು ದಿನಗಳಿಗೆ ರು. 225 ನೀಡಲಾಗಿದೆ.
ಶನಿವಾರ ರಾತ್ರಿಯೇ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದು, ಆಗಮಿಸಿದ ಕ್ರೀಡಾಪಟುಗಳಿಗೆ ಹಾಗೂ ಶಿಕ್ಷಕರಿಗೆ ಕಂಟೋನ್ಮೆಂಟ್ ಕ್ರೀಡಾ ವಸತಿ ಶಾಲೆಯಲ್ಲಿ ನಾಲ್ಕೈದು ವಿದ್ಯಾರ್ಥಿಗಳು ಇರುವ ಕೊಠಡಿಯಲ್ಲಿ 10 ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.
ಊಟ ಮಾಡಿಲ್ಲ: ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಆಗಮಿಸಿದವರು ಮಾತನಾಡಿ, ಉಪವಾಸದಲ್ಲೇ ಒಂದು ದಿನ ಕಳೆಯಲಾಗಿದೆ, ವಿವಿಧ ಸಮಸ್ಯೆಗಳ ಮಧ್ಯೆ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಕಷ್ಟವಾಗುತ್ತದೆ. ಶನಿವಾರ ಅನಿವಾರ್ಯವಾಗಿ ಹೊಟೇಲ್ ಮೊರೆ ಹೋಗಬೇಕಾಯಿತು. ಭಾನುವಾರ ಊಟ ಮಾಡಿಲ್ಲ, ಇದೀಗ ವಸತಿ ವ್ಯವಸ್ಥೆ ಕಲ್ಪಿಸಿರುವ ಶಾಲೆಗಳಲ್ಲಿ ಯಾವುದೇ ಸೌಲಭ್ಯಗಳಿಲ್ಲ, ಸರಿಯಾದ ಶೌಚಾಲಯಗಳಿಲ್ಲ, ಊಟವಿಲ್ಲ, ಊಟದಲ್ಲಿ ಶುಚಿತ್ವ ಮರೀಚಿಕೆ ಎನ್ನುವಂತಾಗಿದೆ. ಇನ್ನು ಮಲಗಲು ಕೂಡ ಸರಿಯಾದ ವ್ಯವಸ್ಥೆ ಇಲ್ಲ. ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರೆ ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ ಎಂದು ದೂರಿದರು.
ಅವ್ಯವಸ್ಥೆ ಮನೆ ಮಾಡಿದೆ: ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸಿರುವ ವಿದ್ಯಾರ್ಥಿಗಳಿಗೆ ಮೂರು ಕಡೆ, ವಿದ್ಯಾರ್ಥಿನಿಯರಿಗೆ ಒಂದು ಕಡೆ ವಸತಿ ವ್ಯವಸ್ಥೆ ಮಾಡಿದ್ದು, ಎಲ್ಲಾ ಕಡೆಗಳಲ್ಲಿ ಇದೇ ರೀತಿಯ ವ್ಯವಸ್ಥೆ ಇದೆ. ಕ್ರೀಡಕೂಟ ತಡವಾಗಿ ಆರಂಭವಾಗಿದೆ, ಇಂತಹ ಅವ್ಯವಸ್ಥೆ ಇದ್ದರೆ, ಯಾಕಾಗಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ದೂರದ ಊರುಗಳಿಂದ ಬರಬೇಕಾಗಿತ್ತು? ಇನ್ನು ಕ್ರೀಡಾ ಮೇಲ್ವಿಚಾರಕರಿಗೆ ಸಮಸ್ಯೆಗಳ ಕುರಿತು ತಿಳಿಸಿದರೆ, ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅವ್ಯವಸ್ಥೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ ಆಗಮಿಸಿದಾಗ ಪ್ರತಿಭಟನಾಕಾರರು ಮುತ್ತಿಗೆ ಹಾಕಿದರು. ಈ ಸಂದರ್ಭದಲ್ಲಿ ಶಿಕ್ಷಕರು, ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ರಾಜು ಬಾವಿಹಳ್ಳಿ ಮನವಿ ಮಾಡಿದರೂ, ಪ್ರತಿಭಟನೆ ಮುಂದುವರಿಸಿದರು. ಜಿಲ್ಲಾಧಿಕಾರಿಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟುಹಿಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

