ಕಲ್ಲು ಗಣಿಗಾರಿಕೆ ವರದಿ ನೀಡಲು ಸೂಚನೆ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ನ. 25
ತಾಲೂಕಿನ ಮರಿಯಮ್ಮನಹಳ್ಳಿಯ ಹೋಬಳಿ ಡಣಾಪುರ ಗ್ರಾಮದ ಸಮೀಪದಲ್ಲಿರುವ ಬಿಎಂಎಂ ಇಸ್ಪಾತ್ ಕಾರ್ಖಾನೆಯ ಭೂ ಸ್ವಾಧೀನ ಪ್ರಕ್ರಿಯೆ ಸೇರಿದಂತೆ ಹಳ್ಳ ಒತ್ತುವರಿ ಹಾಗೂ ಕಾರ್ಖಾನೆ ಸಮೀಪದಲ್ಲಿ ಕಲ್ಲು ಗಣಿಗಾರಿಕೆ ನಡೆಸಿದ್ದಾರೆ ಎನ್ನುವ ದೂರಿನನ್ವಯ ಸ್ಥಳ ಪರಿಶೀಲನೆ ನಡೆಸಿ ದಾಖಲಾತಿ ಪರಿಶೀಲನೆ ನಡೆಸಲಾಗಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಬಿ. ಆದಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿ, ಸಾರ್ವಜನಿಕ ಅಹವಾಲು ಸ್ವೀಕರಿಸಿದ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಎಂಎಂ ಇಸ್ಪಾತ್ ಕಾರ್ಖಾನೆ 24 ಎಕರೆ ಪ್ರದೇಶದಲ್ಲಿ ಕಲ್ಲು ಬಂಡೆಗಳಲ್ಲಿ ಕಲ್ಲು ಗಣಿಗಾರಿಕೆ ನಡೆಸಿರುವ ಕುರಿತು ಪರಿಶೀಲನೆ ನಡೆಸಲಾಗಿದೆ. ಅಲ್ಲದೆ ಸ್ಥಳೀಯ ಪರಿಸರ ಇಲಾಖೆ ಅಧಿಕಾರಿಗಳಿಗೆ ಈ ಪ್ರದೇಶದಲ್ಲಿನ ಕಲ್ಲು ಬಂಡೆಗಳು, ಅವುಗಳನ್ನು ತೆಗೆಯುವಾಗ ಪ್ರಕೃತಿಗೆ ಧಕ್ಕೆಯಾಗಿದೆಯೇ ಎನ್ನುವ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಬಿಎಂಎಂ ಇಸ್ಪಾತ್ ಕಾರ್ಖಾನೆಗೆ ಕೆಐಎಡಿಬಿಯಿಂದ 884 ಎಕರೆ ಮುಂಜೂರಾಗಿದ್ದು, ಇದರಲ್ಲಿ 584 ಎಕರೆ ಕಾರ್ಖಾನೆಗೆ ಸ್ವಾಧೀನ ಮಾಡಲಾಗಿದೆ. ಉಳಿದ 320 ಎಕರೆಯಲ್ಲಿ ಕೆಲವು ರೈತರು ಸಾಗುವಳಿ ಮಾಡುತ್ತಿದ್ದಾರೆ. ಕೆಲ ಪ್ರದೇಶಗಳಲ್ಲಿ ಕಲ್ಲು ಬಂಡೆಗಳಿವೆ. ಸಾಗುವಳಿ ಮಾಡುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕಾಗಿದೆ. ಈ ದೆಸೆಯಲ್ಲಿ ಸ್ಥಳೀಯ ರೈತರು ಹಾಗೂ ಕಾರ್ಖಾನೆಯವರು ಮುಖಾಮುಖಿಯಾಗಿ ಚರ್ಚಿಸಿ ರೈತರಿಗೆ ಸೂಕ್ತ ಪರಿಹಾರ ನೀಡಲು ಮುಂದಾಗಬೇಕು ಎಂದು ಸೂಚಿಸಲಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ-13 ರಸ್ತೆಯಿಂದ ಢಣಾಪುರದ ಸಮೀಪದಿಂದ ಗುಂಡಾ ಗ್ರಾಮಕ್ಕೆ ತೆರಳುವ ರಸ್ತೆಯನ್ನು ಬಿಎಂಎಂ ಇಸ್ಪಾತ್ ಕಾರ್ಖಾನೆಯುವರು ಸಂಚಾರಕ್ಕೆ ಮುಕ್ತಗೊಳಿಸಬೇಕು. ರಸ್ತೆ ಬದಲಾವಣೆಗೆ ಸ್ಥಳೀಯರು ಒಪ್ಪಿಗೆ ಪಡೆದು, ಜಿಲ್ಲಾಧಿಕಾರಿ ಗಮನಕ್ಕೆ ತಂದು ಅವರು ಒಪ್ಪಿದರೆ ಮಾತ್ರ ಬೇರೆ ರಸ್ತೆ ನಿರ್ಮಿಸಬೇಕು ಎಂದು ಕಾರ್ಖಾನೆಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಕಾರ್ಖಾನೆಯವರು ಒಪ್ಪಿರುವುದಾಗಿ ತಿಳಿಸಿದರು. ಈ ಕಾರ್ಖಾನೆಗೆ ಸಂಬಂಧಿಸಿದಂತೆ ಉಳಿದ ಸಮಸ್ಯೆಗಳ ಬಗ್ಗೆ ಹಾಗೂ ದೂರುಗಳ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಡಿ. 17ರಂದು ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಹಲವರು ಅಹವಾಲು ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ವೆಂಕಟೇಶ್, ಸಹಾಯಕ ಆಯುಕ್ತ ಪಿ. ಸುನೀಲ್ ಕುಮಾರ್, ತಹಸೀಲ್ದಾರ್ ರಮೇಶ್ ಕೋನರೆಡ್ಡಿ, ಲೋಕಾಯುಕ್ತ ಎಸ್ಪಿ ಸಿದ್ದಲಿಂಗಣ್ಣನವರ್, ಲೋಕಾಯುಕ್ತ ಡಿವೈಎಸ್ಪಿ ಎನ್.ಆರ್. ಮಹಾಂತ ರೆಡ್ಡಿ, ಧಾರವಾಡದ ವಿಶೇಷ ಭೂಸ್ವಾಧೀನ ಅಧಿಕಾರಿ ಶಿವಾನಂದ ಭಜಂತ್ರಿ, ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಪ್ರಕ್ರಿಯೆ ಅಧಿಕಾರಿ ಬಸವರಾಜ ಸೋಮಣ್ಣನವರ್, ಅರಣ್ಯಾಧಿಕಾರಿ ಶ್ರೀಧರ್, ಲೋಕೋಪಯೋಗಿ ಇಲಾಖೆ ಅಧಿಕಾರಿ ಮಂಜುನಾಥ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ತಳವಾರ್, ಡಿವೈಎಸ್ಪಿ ಡಿ.ಡಿ. ಮಾಳಿಗಿ ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

