ಡಿ. 5ರಿಂದ ಅಹೋರಾತ್ರಿ ಧರಣಿ
ಬಳ್ಳಾರಿ: ಬೆಳಗಾವಿಯಲ್ಲಿ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲೇ ನ್ಯಾ.ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿಯನ್ನು ಯಥಾವತ್ತಾಗಿ ಅಂಗೀಕರಿಸಬೇಕು ಎಂದು ಆಗ್ರಹಿಸಿ ಡಿ. 3ರಿಂದ 5ರ ವರೆಗೆ ಅಹೋರಾತ್ರಿ ಧರಣಿ ಹಾಗೂ ಡಿ. 5ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಎಚ್. ಹನುಮಂತಪ್ಪ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಬಿಜೆಪಿ ಸರ್ಕಾರ ಸದಾಶಿವ ಆಯೋಗ ಸಲ್ಲಿಸಿದ್ದ ವರದಿಯನ್ನು ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ಅನುಸರಿಸಿತ್ತು. ಇದರಿಂದಾಗಿ ಕಳೆದ ವರ್ಷ ಡಿ. 11ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿತ್ತು. ಆ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದರಿಂದ ಬಿಜೆಪಿಯ ಮಾದಿಗ ಸಮಾಜ ವಿರೋಧ ನೀತಿಯನ್ನು ಮನಗಂಡು ಆ ಪಕ್ಷವನ್ನು ಚುನಾವಣೆಯಲ್ಲಿ ಹಿಮ್ಮೆಟ್ಟಿಸಲಾಯಿತು. ಅಂದು ಹೋರಾಟಕ್ಕೆ ಬೆಂಬಲ ನೀಡಿದ್ದ ಸಿದ್ದರಾಮಯ್ಯ ಅವರೆ ಇದೀಗ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಸದಾಶಿವ ಆಯೋಗದ ವರದಿ ಜಾರಿಗೆ ತರದೆ ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ದೂರಿದರು.
ಬೆಳಗಾವಿ ಅಧಿವೇಶನದಲ್ಲಿ ವರದಿಯನ್ನು ಮಂಡಿಸಿ, ನಿರ್ಣಯ ಕೈಗೊಳ್ಳಬೇಕು. ಆ ಮೂಲಕ ಮೀಸಲಾತಿ ವರ್ಗೀಕರಣ ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮಾದಿಗ ಸಮಾಜ ಮತ ಚಲಾಯಿಸುವ ಮೂಲಕ ತಕ್ಕಪಾಠ ಕಲಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸಿದ್ದು ಕೋಮುವಾದಿ: ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳುವ ಸಿದ್ದರಾಮಯ್ಯ ಇದೀಗ ಶಾದಿ ಭಾಗ್ಯ, ಅಹಿಂದ ವಿದ್ಯಾರ್ಥಿಗಳಿಗೆ ಪ್ರವಾಸ ಕಾರ್ಯಕ್ರಮದಂತಹ ಯೋಜನೆಗಳಿಂದ ಕೋಮುವಾದಿ ನೀತಿ ಅನುಸರಿಸುತ್ತಿದೆ ಎಂದು ದೂರಿದ ಅವರು, ಶೋಷಿತರ ಬಗ್ಗೆ ನಿಜವಾದ ಕಳಕಳಿ, ಕಾಳಜಿ ಅವರಿಗೆ ಖಂಡಿತಾ ಇಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೇವಲ ಅಭಿವೃದ್ಧಿ ಎಂಬ ಮುಖವಾಡ ಧರಿಸಿದೆ ಎಂದು ಆರೋಪಿಸಿದರು.
ಡಿ. 3ರಿಂದ 5ರ ವರೆಗೆ ಅಹೋರಾತ್ರಿ ಧರಣಿ ಹಾಗೂ ಡಿ. 5ರಂದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಿಂದ 50 ಸಾವಿರಕ್ಕೂ ಹೆಚ್ಚು ಮಾದಿಗ ಸಮಾಜದವರು ಪಾಲ್ಗೊಳ್ಳಲಿದ್ದಾರೆ. ಒಂದು ವೇಳೆ ಹಮ್ಮಿಕೊಂಡಿರುವ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡಿದ್ದೇ ಆದಲ್ಲಿ ಗಂಭೀರ ಪರಿಣಾಮವನ್ನು ಸರ್ಕಾರ ಎದುರಿಸಬೇಕಾಗುತ್ತದೆ. ರಾಜ್ಯದ ಮಾದಿಗರ ನೋವು ಕಾಂಗ್ರೆಸ್ ಪಕ್ಷದ ಸಾವು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಎ. ಈಶ್ವರಪ್ಪ, ಸೋಮಶೇಖರ, ಗುರುಸಿದ್ದಪ್ಪ, ರಾಮಣ್ಣ, ಶಿವಕುಮಾರ, ರಾಜ್ಕುಮಾರ್, ರಾಮಣ್ಣ ತೊಂಡಲಂ ಸೇರಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

