ತಂಬಾಕು ಅಂಗಡಿ ತೆರವಿಗೆ ಸೂಚನೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 27
ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿರುವ ಹೊಸ ಶಾಲಾ ಕಟ್ಟಡಗಳಿದ್ದಲ್ಲಿ ಹಳೆ ಕಟ್ಟಡದಲ್ಲಿರುವ ಶಾಲೆಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು. ಅಲ್ಲದೆ, ಶಾಲೆಗಳ ಬಳಿ ಇರುವ ತಂಬಾಕು ಅಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಪಂಚಾಯತಿ ಅಧ್ಯಕ್ಷ ವಿ. ಗಾದಿಲಿಂಗಪ್ಪ ಪಿಡಿಒಗಳಿಗೆ ಸೂಚಿಸಿದ್ದಾರೆ.
ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಜರುಗಿದ 14ನೇ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಿಡಿಒಗಳೇ ಪೂರ್ಣಗೊಳಿಸಿ: ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಇದರಿಂದ ಅರ್ಹ ಫಲಾನುಭವಿಗಳು ಪ್ರಯೋಜನ ಪಡೆಯಬಹುದು. ಸಣ್ಣ-ಪುಟ್ಟ ಕಾಮಗಾರಿಗಳಿದ್ದಲ್ಲಿ ಸಾಮಾನ್ಯ ಸಭೆ ವರೆಗೂ ಕಾಯದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೇ ಅದನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ವಿದ್ಯುತ್ ಕಂಬಗಳನ್ನು ಕೂಡಲೇ ಬದಲಾಯಿಸಬೇಕೆಂದು ಜೆಸ್ಕಾಂ ಎಂಜಿನಿಯರ್ಗೆ ತಿಳಿಸಿದರು.
ಲೋಪ ಕಂಡರೆ ಶಿಸ್ತುಕ್ರಮ: ಕಾರ್ಯನಿರ್ವಾಹಕ ಅಧಿಕಾರಿ ಖೇಣಿ ಬಸಪ್ಪ ಮಾತನಾಡಿ, ವಸತಿ ಯೋಜನೆಯಡಿ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಶಿಡಿಗಿನಮೊಳ ಗ್ರಾಮದ ವೈದ್ಯಾಧಿಕಾರಿ ಬಗ್ಗೆ ದೂರುಗಳು ಬಂದಿದ್ದು, ಇನ್ಮುಂದೆ ಅವರ ಸೇವೆಯಲ್ಲಿ ಲೋಪ ಕಂಡುಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಟಾಸ್ಕ್ಫೋರ್ಸ್ ಸಮಿತಿಗೆ ಮನವಿ ಸಲ್ಲಿಸಿದಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸ್ಮಶಾನ ಭೂಮಿಯಲ್ಲಿ ಸ್ಥಳದ ಕೊರತೆ ಇದ್ದರೆ ಪ್ರಸ್ತಾವನೆ ಸಲ್ಲಿಸಿ, ಆ ಗ್ರಾಮಗಳಲ್ಲಿ ಸರ್ಕಾರಿ ಜಮೀನು ಲಭ್ಯವಿದ್ದಲ್ಲಿ ಸ್ಮಶಾನ ಭೂಮಿಯನ್ನು ಮಂಜೂರು ಮಾಡಲಾಗುವುದು. ಸಾರ್ವಜನಿಕರಿಂದ ದೂರು ಬಂದಾಗ ಅಧಿಕಾರಿಗಳು ತಾಲೂಕು ಪಂಚಾಯತಿ ಸದಸ್ಯರಿಗೆ ಮಾಹಿತಿ ನೀಡಿ ಸಂಬಂಧಿಸಿದ ಗ್ರಾಮಗಳಿಗೆ ಭೇಟಿ ನೀಡಬೇಕು ಎಂದು ತಾಪಂ ಅಧ್ಯಕ್ಷ ಗಾದಿಲಿಂಗಪ್ಪ ಹೇಳಿದರು.
ಬೇಸಿಗೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳಿರುವ ಗ್ರಾಮಗಳನ್ನು ಗುರುತಿಸಿ ಕಾಮಗಾರಿ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ಪಡೆದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಮರೆಮ್ಮ, ತಹಸೀಲ್ದಾರ್ ಶರಣಪ್ಪ, ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

