ಶೀಘ್ರದಲ್ಲೇ ಬಿಎಸ್ವೈ ಬಿಜೆಪಿಗೆ: ಈಶ್ವರಪ್ಪ
ಬಳ್ಳಾರಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಜೆಪಿಗೆ ಬರಬೇಕೆಂಬುದು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಲಾಷೆಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಹೇಳಿದರು.
ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ನ್ಯಾಯಾಲಯಕ್ಕೆ ಆಗಮಿಸಿದ್ದ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನಗಳು ನಡೆಯುತ್ತಿದ್ದು, ಅವರು ಶೀಘ್ರದಲ್ಲಿಯೇ ಬಿಜೆಪಿಗೆ ಮರಳುತ್ತಾರೆ. ಯಡಿಯೂರಪ್ಪ ಬರುವುದರಿಂದ ಬಿಜೆಪಿ ಮತ್ತಷ್ಟು ಬಲಗೊಳ್ಳಲಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಿಸಲು ಬಿಎಸ್ವೈ ಶಕ್ತಿ ಬೇಕಾಗುತ್ತದೆ. ಯಡಿಯೂರಪ್ಪ ಕೂಡ ಪಕ್ಷಕ್ಕೆ ಮರಳುವ ಸೂಚನೆ ನೀಡಿದ್ದಾರೆ ಎಂದರು. ಶ್ರೀರಾಮುಲು ಅವರನ್ನು ಸಹ ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಸಹ ರಾಷ್ಟ್ರೀಯ ನಾಯಕರ ಗಮನಕ್ಕೆ ತಂದಿದ್ದೇವೆ. ಆದರೆ, ಇದು ಕೇಂದ್ರದ ನಾಯಕರಿಗೆ ಬಿಟ್ಟ ವಿಷಯ ಎಂದು ಹೇಳಿದರು.
ಶ್ರೀರಾಮುಲು ಈಶ್ವರಪ್ಪ ಭೇಟಿ: ಬಳ್ಳಾರಿಗೆ ಆಗಮಿಸಿದ್ದ ಮಾಜಿ ಡಿಸಿಎಂ ಈಶ್ವರಪ್ಪ ಅವರನ್ನು ಬಿಎಸ್ಆರ್ ಮುಖಂಡ ಗುರುಲಿಂಗನಗೌಡ ಅವರ ನಿವಾಸದಲ್ಲಿ ಬಿಎಸ್ಆರ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಬಿ. ಶ್ರೀರಾಮುಲು ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಶ್ರೀರಾಮುಲು ಬಿಜೆಪಿಗೆ ಮರಳಲಿದ್ದಾರೆ ಎಂಬ ಮಾತುಗಳ ನಡುವೆ ಈಶ್ವರಪ್ಪ-ಶ್ರೀರಾಮುಲು ಭೇಟಿ ಕುತೂಹಲ ಕೆರಳಿಸಿದೆ. ಆದರೆ ಭೇಟಿಯಾದ ಸಂದರ್ಭದಲ್ಲಿ ಪಕ್ಷ ಸೇರ್ಪಡೆ ವಿಷಯ ಚರ್ಚೆಯಾಗಿಲ್ಲ, ಸಹಜ ಭೇಟಿಯಾಗಿತ್ತು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಾಜಿ ಡಿಸಿಎಂಗೆ ಜಾಮೀನು: 2011ರಲ್ಲಿ ನಡೆದ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಸಂಗನಕಲ್ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಪರ ಮತಪ್ರಚಾರ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದಾರೆ.
ಅಂದು ಕೆ.ಎಸ್. ಈಶ್ವರಪ್ಪ ಸೇರಿದಂತೆ 8 ಜನರ ಮೇಲೆ ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಆರೋಪ ಕುರಿತಾಗಿ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಮುಖಂಡರಾದ ಶಶಿಲ್ ನಮೋಶಿ, ಇಂದುಶೇಖರ್, ಬಿಜೆಪಿ ಅಭ್ಯರ್ಥಿಯಾಗಿದ್ದ ಗಾದಿಲಿಂಗಪ್ಪ ನ್ಯಾಯಾಲಯಕ್ಕೆ ಶನಿವಾರ ಹಾಜರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

