ಸಂಸ್ಕೃತಿ, ನಮ್ಮತನ ಕಾಪಾಡಲು ನಾಡಹಬ್ಬ ಸಹಕಾರಿ: ಚಂಪಾ
ಬಳ್ಳಾರಿ: ಜಾಗತೀಕರಣದಲ್ಲಿ ಕನ್ನಡ ಸಂಸ್ಕೃತಿ, ನಮ್ಮತನ ಕಾಪಾಡಿಕೊಂಡು ಹೋಗಲು ನಾಡಹಬ್ಬ ಸಹಕಾರಿ. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಾಡು, ನುಡಿ ಚಿಂತನೆ ಅಗತ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ, ಸಾಹಿತಿ ಪ್ರೊ. ಚಂದ್ರಶೇಖರ್ ಪಾಟೀಲ್ ತಿಳಿಸಿದ್ದಾರೆ.
ನಾಡಹಬ್ಬ ಆಚರಣಾ ಸಮಿತಿ ಶನಿವಾರ ನಗರದ ರಾಘವಾ ಕಲಾ ಮಂದಿರದಲ್ಲಿ ಏರ್ಪಡಿಸಿದ್ದ ನಾಡಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾಗತೀಕರಣದ ಸಂದರ್ಭದಲ್ಲಿ ನಾಡಿನ ಸಾರ್ವಭೌಮತೆ ಮತ್ತು ಅಖಂಡತೆ ಕಾಯ್ದುಕೊಂಡು ಹೋಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಚಿಂತನೆ ಮಾಡಬೇಕಾಗಿದೆ ಎಂದರು.
ಅಕ್ರಮ ಗಣಿಗಾರಿಕೆ ಮತ್ತು ಭ್ರಷ್ಟಾಚಾರದಿಂದ ನಮ್ಮ ರಾಜ್ಯ ಹೆಸರುವಾಸಿಯಾಗುತ್ತಿದೆ. ಇಂತಹ ಸ್ಥಿತಿಗತಿ ಒದಗಿರುವ ಕನ್ನಡ ನಾಡಿನ ಬಗ್ಗೆ ಎಲ್ಲರೂ ಚಿಂತನೆ ಮಾಡಬೇಕಾದ ಅಗತ್ಯವಿದೆ. ಭ್ರಷ್ಟಾಚಾರ ಹಾಗೂ ಅನಾಚಾರದಲ್ಲಿ ಕರ್ನಾಟಕದ ಹೆಸರು ಎಲ್ಲೆಡೆ ಕೇಳಿಬರುತ್ತಿದೆ. ರಾಜ್ಯ ಹಾಗೂ ದೇಶದಲ್ಲಿರುವ ಧಾರ್ಮಿಕ ಸಂಸ್ಥೆಗಳೂ ವಿದೇಶದ ಬ್ಯಾಂಕ್‌ಗಳಲ್ಲಿ ಕಪ್ಪುಹಣ ಇರಿಸುವುದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.
ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರಾದ ಡಾ. ರಂಗರಾಜ ವನದುರ್ಗ ಮಾತನಾಡಿ, ನಮ್ಮ ನಾಡಿನ ಜನರ ಆಶೋತ್ತರಗಳಿಗೆ ತಕ್ಕಂತೆ, ನಾಡಿನ ಪರಂಪರೆ ಇತಿಹಾಸ ಮೆಲಕು ಹಾಕುವುದರ ಜತೆಗೆ ಇಂದಿನ ಅವಶ್ಯಕತೆಗಳಿಗೆ ತಕ್ಕಂತೆ ಕನ್ನಡ ಸಾಹಿತ್ಯ ಸಂಸ್ಕೃತಿ ಕಾಯ್ದುಕೊಂಡು ಹೋಗಬೇಕಾಗಿದೆ ಎಂದರು.
ನಾಡಹಬ್ಬ ಆಚರಣಾ ಸಮಿತಿ ಅಧ್ಯಕ್ಷ ವೈ. ಬಸವರಾಜಪ್ಪನವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹರಿಹರ-ರಾಘವಾಂಕ ಕನ್ನಡ ಸಂಘದ ಅಧ್ಯಕ್ಷೆ ಎ.ಎಂ. ಜಯಶ್ರೀ, ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ, ನಾಡಿನ ಖ್ಯಾತ ಗಾಯಕರಾದ ಶಿವಮೊಗ್ಗ ಸುಬ್ಬಣ್ಣ ಉಪಸ್ಥಿತರಿದ್ದರು. ಶಿವಮೊಗ್ಗ ಸುಬ್ಬಣ್ಣ ಅವರು ಕನ್ನಡ ಕವಿಗಳ ಗೀತಗಾಯನ - ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಆರ್. ಸಹನಾ ಮತ್ತು ಸಹನಾ ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಎ.ಎನ್. ಸಿದ್ದೇಶ್ವರಿ ಸ್ವಾಗತಿಸಿದರು. ಕೆ.ವಿ. ನಾಗರೆಡ್ಡಿ ಕಾರ್ಯಕ್ರಮ ನಿರೂಪಿಸಿದರು. ಈರಮ್ಮ ವಂದಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

