ಪಠ್ಯಪುಸ್ತಕ ಒದಗಿಸಲು ಶಿಕ್ಷಕರ ಆಗ್ರಹ
ಬಳ್ಳಾರಿ: ಗಡಿಭಾಗದ ಡಿ. ಹಿರೇಹಾಳ ಮಂಡಲದಲ್ಲಿನ ಕನ್ನಡ ಶಾಲೆಗಳಿಗೆ ಉಚಿತವಾಗಿ ಕನ್ನಡ ಪಠ್ಯಪುಸ್ತಕ ಪೂರೈಕೆ ಮಾಡಬೇಕು ಹಾಗೂ ಸಾರಿಗೆ ಸಂಪರ್ಕ ಕಲ್ಪಿಸಬೇಕು ಎಂದು ಆಗ್ರಹಿಸಿ ಅನಂತಪುರ ಜಿಲ್ಲಾ ಕನ್ನಡ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಡಳಿತಕ್ಕೆ ಹಾಗೂ ಸಾರಿಗೆ ಸಂಸ್ಥೆಯ ಬಳ್ಳಾರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.
ಅನಂತಪುರ ಜಿಲ್ಲಾ ಕನ್ನಡ ಶಿಕ್ಷಕರ ಸಂಘದ ಅಧ್ಯಕ್ಷ ಎಂ. ಗಿರಿಜಾಪತಿ ನೇತೃತ್ವದಲ್ಲಿ ತೆರಳಿದ ಶಿಕ್ಷಕರು, ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕಿನ ಡಿ. ಹಿರೇಹಾಳ್ ಮಂಡಲದಲ್ಲಿ 9 ಪ್ರಾಥಮಿಕ, 2 ಹಿರಿಯ ಪ್ರಾಥಮಿಕ, 2 ಪ್ರೌಢಶಾಲೆಗಳು ಕನ್ನಡ ಮಾಧ್ಯಮದಲ್ಲೇ ನಡೆಯುತ್ತಿದ್ದು, ಒಂದರಿಂದ 10ನೇ ತರಗತಿವರೆಗೆ ರಾಜ್ಯದಲ್ಲಿನ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕವೇ ಅನ್ವಯಿಸುತ್ತದೆ. ಆದರೆ ಕರ್ನಾಟಕ ರಾಜ್ಯ ಸರ್ಕಾರದಿಂದ ಸಮರ್ಪಕವಾಗಿ ಪೂರೈಕೆಯಾಗದೆ ಪ್ರತಿ ವರ್ಷ ಪುಸ್ತಕಗಳಿಗಾಗಿ ಪರದಾಡುವಂತಾಗಿದೆ. ಇದರಿಂದಾಗಿ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಮನವಿಪತ್ರದಲ್ಲಿ ತಿಳಿಸಿದ್ದಾರೆ.
ಡಿಡಿಪಿಐಗೆ ಮನವಿ ಸಲ್ಲಿಸಿದಾಗ ಮಾತ್ರ ಅಲ್ಪ ಪ್ರಮಾಣದಲ್ಲಿ ಪುಸ್ತಕಗಳು ದೊರೆಯುತ್ತಿವೆ. ಹೀಗಾಗಿ ಈ ಎಲ್ಲ ಸಮಸ್ಯೆಗಳಿಗೆ ತೆರೆ ಎಳೆದು ಪ್ರತಿವರ್ಷ ನಮಗೆ ಕನ್ನಡ ಪಠ್ಯ ಪುಸ್ತಕಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಈ ಭಾಗದಲ್ಲಿ ಕನ್ನಡದಲ್ಲಿ ವ್ಯಾಸಂಗ ಮಾಡುತ್ತಿರುವ ಸಾಕಷ್ಟು ವಿದ್ಯಾರ್ಥಿಗಳು ಮುಂದಿನ ವ್ಯಾಸಂಗಕ್ಕೆಂದು ನೆರೆಯ ಬಳ್ಳಾರಿ, ಚಿತ್ರದುರ್ಗಗಳಿಗೆ ಪ್ರತಿನಿತ್ಯ ಹೋಗುವುದರಿಂದ, ಇವರಿಗೆ ಅಗತ್ಯ ಬಸ್ಸಿನ ಸೌಲಭ್ಯ ಕಲ್ಪಿಸಿಕೊಡಬೇಕು, ಬಸ್ಗಳ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ತೊಂದರೆ ಎದುರಿಸುವಂತಾಗಿದೆ. ಸೂಕ್ತ ಬಸ್ಸಿನ ಸೌಲಭ್ಯ ಕಲ್ಪಿಸಿಕೊಡಬೇಕು, ಸ್ಥಳೀಯ ಭುವನ ವಿಜಯ ನಗರ ಸಾರಿಗೆ ಬಸ್ಗಳನ್ನು ಡಿ. ಹಿರೇಹಾಳ್ವರೆಗೆ ಓಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಗಡಿಭಾಗದ ಕನ್ನಡ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

