ಸೌಜನ್ಯಾ ಪ್ರಕರಣ ಸಿಬಿಐಗೆ ವಹಿಸಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 23
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಹಾಗೂ ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಬುಧವಾರ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಜೆಎಂಎಸ್ ಕಾರ್ಯದರ್ಶಿ ಜೆ.ಚಂದ್ರಕುಮಾರಿ ಮಾತನಾಡಿ, ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ವಿದ್ಯಾರ್ಥಿನಿ ಸೌಜನ್ಯಾ ಮೇಲೆ ಕೆಲ ದುಷ್ಕರ್ಮಿಗಳು ಅಮಾನುಷವಾಗಿ ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆಗೈದಿದ್ದಾರೆ. ಇದು ಸಮಾಜವೇ ತಲೆತಗ್ಗಿಸುವಂತಹ ಹೇಯ ಕೃತ್ಯವಾಗಿದೆ. ಈ ದುಷ್ಕೃತ್ಯ ನಡೆದು ಒಂದು ವರ್ಷ ಕಳೆದರೂ ಪ್ರಕರಣದ ನಿಜವಾದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
ಘಟನೆಗೆ ಸಂಬಂಧವೇ ಇರದ, ಮತಿ ಸರಿಯಿಲ್ಲದ ಓರ್ವ ಯುವಕನನ್ನು ಬಂಧಿಸುವ ಮೂಲಕ ಪೊಲೀಸ್ ಅಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಿದ್ದಾರೆ. ವಿದ್ಯಾರ್ಥಿನಿಯ ರೇಪ್ ಅಂಡ್ ಮರ್ಡರ್ಗೆ ಕಾರಣರಾದ ನಿಜವಾದ ಆರೋಪಿಗಳನ್ನು ಇಲ್ಲಿಯವರೆಗೂ ಬಂಧಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಭಾವಿಗಳ ಬೆಂಗಾವಲು: ಆರೋಪಿಗಳಿಗೆ ಪ್ರಭಾವಿ ವ್ಯಕ್ತಿಗಳು, ಪಟ್ಟಭದ್ರ ಹಿತಾಸಕ್ತಿಗಳು ಬೆಂಗಾವಲಾಗಿ ನಿಂತಿದ್ದರಿಂದಾಗಿಯೇ ನಿಜವಾದ ಆರೋಪಿಗಳನ್ನು ಬಂಧಿಸಲಾಗಿಲ್ಲ. ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳ ಜನತೆ, ವಿದ್ಯಾರ್ಥಿಗಳು, ಪ್ರಜ್ಞಾವಂತ ನಾಗರಿಕರು ನಡೆಸಿದ ನಿರಂತರ ಹೋರಾಟದಿಂದಾಗಿ ಸಿಐಡಿ ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ. ಆದರೂ, ಇಲ್ಲಿಯೂ ಪಟ್ಟಭದ್ರ ಹಿತಾಸಕ್ತಿಗಳ ಕೈ ಮೇಲಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಹಿಂದೆ ಹಲವು ಘಟನೆಗಳು ಈ ರೀತಿಯ ಪ್ರಭಾವಕ್ಕೆ ಒಳಗಾಗಿರುವ ಉದಾಹರಣೆಗಳು ಇವೆ ಎಂದರು.
ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಲು ಸಿಬಿಐಗೆ ಒಪ್ಪಿಸಬೇಕು. ಸಿಬಿಐನಿಂದ ಮಾತ್ರ ಸತ್ಯಾಂಶ ಹೊರಬರಲಿದ್ದು, ನಿಜವಾದ ಆರೋಪಿಗಳು ಬಂಧನಕ್ಕೊಳಗಾಗುತ್ತಾರೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಂತರ ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್.ಎಸ್. ಬಸವರಾಜ್, ಮುಖಂಡರಾದ ಬಿ. ಮಾಳಮ್ಮ, ಎ. ಅಡಿವೆಪ್ಪ, ಗಾಳಿ ಬಸವರಾಜ, ವಿಶ್ವನಾಥಸ್ವಾಮಿ, ರಂಗಪ್ಪ ದಾಸರ್, ಶಿವಶಂಕರ್, ಕೊಟಿಗೆ ಮಲ್ಲಿಕಾರ್ಜುನ, ಮಂಜುಳಾ, ಗುರುಸ್ವಾಮಿ, ಓಬಳೇಶಪ್ಪ, ಸಿಕಿಂದರ್, ಸೋಮಪ್ಪ, ತಿಂದಪ್ಪ, ಗಾದಿಲಿಂಗಪ್ಪ, ಭಾಸ್ಕರ್ ರೆಡ್ಡಿ ಮುಂತಾದವರು ಪಾಲ್ಗೊಂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

