ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಯೋಜನೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 25
ರಾಜ್ಯದಲ್ಲಿ ಪ್ರಸ್ತುತ ಮಲಹೊರುವ ಪದ್ಧತಿ ಪ್ರಕರಣಗಳು ವರದಿಯಾಗಿಲ್ಲ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಎನ್. ಶ್ರೀರಾಮುಲು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅಧಿಕಾರಿಗಳು ಹಾಗೂ ಸಫಾಯಿ ಕರ್ಮಚಾರಿಗಳ ಪದಾಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಯಿಂದ ಮಲ, ಮೂತ್ರಗಳನ್ನು ಎತ್ತುವುದನ್ನು ನಿಷೇಧಿಸಲಾಗಿದೆ. ಸಫಾಯಿ ಕರ್ಮಚಾರಿಗಳು ಹಾಗೂ ಅವರ ಬೆಂಬಲಿಗರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಅಭಿವೃದ್ಧಿ ಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನೇಕ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಈ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ, ಸಮರ್ಪಕವಾಗಿ ಜಾರಿಗೊಳಿಸಬೇಕು. ಇವರನ್ನು ಬೇರೆ ಉದ್ಯಮಗಳಲ್ಲಿ ತೊಡಗುವಂತೆ ಕ್ರಮಕೈಗೊಳ್ಳಬೇಕು. ಅನುದಾನಕ್ಕೆ ಯಾವುದೇ ಕೊರತೆ ಇಲ್ಲ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 5223 ಸಫಾಯಿ ಕರ್ಮಚಾರಿಗಳು ಹಾಗೂ ಅವರ ಅವಲಂಬಿತರಿದ್ದಾರೆ. ನಿಗಮ ಇಲ್ಲಿ ವರೆಗೆ 1504 ಮಂದಿಗೆ ಸಾಲ ಸೌಲಭ್ಯ ನೀಡಿದೆ. ಸಾಲ ಸೌಲಭ್ಯ ಕೋರುವ ಎಲ್ಲ ಫಲಾನುಭವಿಗಳಿಗೂ ನಿರಂತರವಾಗಿ ನೀಡಿ, ಅಭಿವೃದ್ಧಿಯಾಗಲು ಶ್ರಮಿಸಬೇಕು. ಇವರನ್ನು ಮಲ ಹೊರುವ ಪದ್ಧತಿಯಿಂದ ಮುಕ್ತಗೊಳಿಸಬೇಕು ಎಂದು ಹೇಳಿದರು.
ಸ್ಥಳೀಯ ಪೌರ ಸಂಸ್ಥೆಗಳು ಆಧುನಿಕ ಜೆಟ್ಟಿಂಗ್ ಮತ್ತು ಸಕ್ಕಿಂಗ್ ಯಂತ್ರಗಳನ್ನು ಖರೀದಿಸಿ ಉಪಯೋಗಿಸಬೇಕು. ಸ್ವಚ್ಛತಾ ಕಾರ್ಯಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಗುತ್ತಿಗೆ ಆಧಾರದಡಿ ಕೆಲಸ ಮಾಡುವ ಸಫಾಯಿ ಕರ್ಮಚಾರಿಗಳಿಗೆ ವೇತನವನ್ನು ಚೆಕ್ ಮೂಲಕ ನೀಡಿ, ಇಎಸ್ಐ, ಪಿಎಫ್ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕು. ಆರೋಗ್ಯ ತಪಾಸಣಾ ಶಿಬಿರಗಳನ್ನು ಆಗಾಗ್ಗೆ ಏರ್ಪಡಿಸಬೇಕು. ಪತ್ಯೇಕ ಆರೋಗ್ಯ ಕೇಂದ್ರವನ್ನು ತೆರೆಯಬೇಕು ಎಂದು ಶ್ರೀರಾಮುಲು ತಿಳಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ನಾಯಕ್, ಅಪರ ಜಿಲ್ಲಾಧಿಕಾರಿ ವೆಂಕಟೇಶ್, ಸಹಾಯಕ ಆಯುಕ್ತ ಶ್ರವಣ್ ಅನುರುದ್ಧ, ಪಾಲಿಕೆ ಆಯುಕ್ತ ಚಿಕ್ಕಣ್ಣ, ಆಯೋಗದ ಕಾರ್ಯದರ್ಶಿ ಮೋಹನ್, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಕರಗಯ್ಯ, ಸಫಾಯಿ ಕರ್ಮಚಾರಿಗಳ ಪದಾಧಿಕಾರಿಗಳು ಹಾಜರಿದ್ದು, ಸಲಹೆಗಳನ್ನು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

