ಬಳ್ಳಾರಿ

ಕೂಡ್ಲಿಗಿ: ಬಿಸಿಯೂಟ ಕಾರ್ಯಕರ್ತರ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಕೂಡ್ಲಿಗಿ, ಅ. 30
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತರು ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಿಪಿಐ ತಾಲೂಕು ಕಾರ್ಯದರ್ಶಿ ಎಚ್. ವೀರಣ್ಣ ಮಾತನಾಡಿ, ಪ್ರತಿವರ್ಷ ಬಿಸಿಯೂಟ ತಯಾರಕರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವ ಪ್ರಕ್ರಿಯೆಯನ್ನು ನಿಲ್ಲಿಸಿ ಅವರನ್ನು ಕಾಯಂಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಅಸಂಘಟಿತ ವಲಯದ ಕಾರ್ಮಿಕರ ಬೇಡಿಕೆಯಂತೆ ಈಗಿನ ಬೆಲೆ ಏರಿಕೆಗೆ ಅನುಗುಣವಾಗಿ ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ ರು. 10 ಸಾವಿರ ಸಂಬಳ ನಿಗದಿಗೊಳಿಸಬೇಕು ಎಂದು ಒತ್ತಾಯಿಸಿದರು.
ಬಿಸಿಯೂಟ ತಯಾರಕರಿಗೆ ಪ್ರತಿ ತಿಂಗಳ ಐದರಂದು ಸಂಬಳ ನೀಡಬೇಕು. ಕಾರ್ಯಕರ್ತರ ಚಿಕಿತ್ಸೆ ವೆಚ್ಚಕ್ಕೆ ವಾರ್ಷಿಕ ರು. 50 ಸಾವಿರ ನೀಡಬೇಕು. ಭವಿಷ್ಯನಿಧಿ ಅನ್ವಯವಾಗುವಂತೆ ಜಾರಿಗೊಳಿಸಬೇಕು. ಸಮವಸ್ತ್ರ ವಿತರಣೆ,  ಶಾಲೆಯ ದಸರಾ ಮತ್ತು ಬೇಸಿಗೆ ರಜೆಯಲ್ಲಿ ಸಹ ಸಂಬಳ ನೀಡಬೇಕೆಂದು  ಸರ್ಕಾರವನ್ನು ಒತ್ತಾಯಿಸಿದರು.
ಕಮ್ಯುನಿಸ್ಟ್ ಪಕ್ಷದ ಮುಖಂಡ ಬಿ. ಸಿದ್ಧಲಿಂಗಪ್ಪ ಮಾತನಾಡಿ, ಶಾಲಾ ಮಕ್ಕಳಿಗೆ ಮಧ್ಯಾಹ್ನ ನೀಡುವ ಬಿಸಿಯೂಟ ಯೋಜನೆಯ ಅಡುಗೆ ತಯಾರಕರನ್ನು ಸರ್ಕಾರ ಖಾಸಗೀಕರಣ ನೆಪದಲ್ಲಿ ಬೀದಿಗೆ ತಳ್ಳುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಹಿಳೆಯರು ಈ ಯೋಜನೆ ವ್ಯಾಪ್ತಿಯಲ್ಲಿ ಕಡಿಮೆ ಸಂಬಳಕ್ಕೆ ಅಡುಗೆ ತಯಾರಿಸುತ್ತಿದ್ದಾರೆ. ಅಂತಹ ಮಹಿಳೆಯರ ಭದ್ರತೆಗೆ ಹೆಚ್ಚಿನ ಅನುಕೂಲ ಕಲ್ಪಿಸದೇ, ಖಾಸಗಿಯವರಿಗೆ ವಹಿಸುತ್ತಿರುವುದು ಖಂಡನೀಯ ಎಂದರು. ಇದೇ ಸಂದರ್ಭದಲ್ಲಿ ಎಐಟಿಯುಸಿ ನೇತೃತ್ವದಲ್ಲಿ ತಾಲೂಕಿನ ಅಕ್ಷರ ದಾಸೋಹ ಯೋಜನೆಯ ಬಿಸಿಯೂಟ ತಯಾರಕರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು
ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ದುರುಗಪ್ಪ, ತಾಲೂಕು ಅಂಗನವಾಡಿ ಸಂಘದ ಅಧ್ಯಕ್ಷೆ ರತ್ನಮ್ಮ, ಎಐವೈಎಫ್ ಅಧ್ಯಕ್ಷ ಎಂ. ಮಂಜುನಾಥ ಸೇರಿದಂತೆ ನೂರಾರು ಬಿಸಿಯೂಟ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಗಾಂಧೀಜಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ಬಿಸಿಯೂಟ ಕಾರ್ಯಕರ್ತೆಯರು ಘೋಷಣೆ ಕೂಗುತ್ತ ತಹಸೀಲ್ದಾರ್ಕ್‌ಚೇರಿಗೆ ಆಗಮಿಸಿ ಅಧಿಕಾರಿ ವಾಸಪ್ಪ ಅವರಿಗೆ ಮನವಿ ಸಲ್ಲಿಸಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಚ್. ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.