ಕುಡಿವ ನೀರು ಸಮಸ್ಯೆ: ಪಂಚಾಯ್ತಿಗೆ ಬೀಗ
ಹೂವಿನಹಡಗಲಿ: ತಾಲೂಕಿನ ಬಾನ್ಯೇನ್ ತಾಂಡಾಕ್ಕೆ ಅಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಕಾಲ್ವಿ ಪಂಚಾಯಿತಿ ಕಚೇರಿಗೆ ತಾಂಡಾದ ಜನತೆ ಬೀಗ ಹಾಕಿ ಪ್ರತಿಭಟಿಸಿರುವ ಘಟನೆ ಶುಕ್ರವಾರ ನಡೆದಿದೆ.
ರೆಡ್ಡಿನಾಯ್ಕ, ತಾವರೆನಾಯ್ಕ, ರವಿ ಮತ್ತು ಇತರ 50ಕ್ಕೂ ಹೆಚ್ಚು ಗ್ರಾಮಸ್ಥರು ಶುಕ್ರವಾರ ಬೆಳಗ್ಗೆ ಪಂಚಾಯಿತಿ ಕಚೇರಿಗೆ ತೆರಳಿ ಗ್ರಾಪಂ ಪಿಡಿಒ ವಿರುದ್ಧ ಧಿಕ್ಕಾರ ಕೂಗುತ್ತಾ, ಪಂಚಾಯಿತಿ ಆಡಳಿತ ವ್ಯವಸ್ಥೆ ಮತ್ತು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ತಾಂಡಾಕ್ಕೆ ಕೊಳವೆಬಾವಿ ಕೊರೆಸಿ ನೀರೆತ್ತುವ ಮೋಟರ್ ಅಳವಡಿಕೆಯಾಗಿದ್ದರೂ ಈವರೆಗೂ ಹನಿ ನೀರು ಬಂದಿಲ್ಲ. ಕಳೆದೊಂದು ವರ್ಷದಿಂದ ಇದೇ ನೀರಿನ ಸಮಸ್ಯೆಯಿಂದಲೇ ಬಳಲುತ್ತಿದ್ದೇವೆ. ತಾಂಡಾ ನದಿ ದಂಡೆಯಲ್ಲಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ನೀರಿನ ಸಮಸ್ಯೆ ಎದುರಾಗಿದೆ. ಅತ್ತ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರ ಕುಡಿವ ನೀರು ಪೂರೈಕೆಗೆ ಹಣದ ಕೊರತೆಯಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ.
ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ತಾಂಡಾಕ್ಕೆ ಕನಿಷ್ಠ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಮೂಲೆಕಟ್ಟಿನ ತಾಂತಾ ಹಾಗೂ ಬುಡಕಟ್ಟು ಜನಾಂಗ ವಾಸಿಸುವ ಲಂಬಾಣಿ ತಾಂಡಾಗಳ ಸಮಗ್ರ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿ, ಈ ಬಗ್ಗೆ ಸಾಕಷ್ಟು ಬಾರಿ ಪಂಚಾಯಿತಿ ಕಾರ್ಯದರ್ಶಿ ಗಮನ ಸೆಳೆದಿದ್ದರೂ ಪ್ರಯೋಜನವಾಗಿಲ್ಲ. ಅಲ್ಲದೆ ಪಂಚಾಯಿತಿಗೆ ಮುಳ್ಳು ಜಡಿಯುವುದಾಗಿ ಎಚ್ಚರಿಕೆ ನೀಡಿದರೂ ಯಾವ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಆದ್ದರಿಂದ ಪಂಚಾಯಿತಿ ಕಚೇರಿಗೆ ಬೀಗ ಜಡಿದೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಇದೆವೇಳೆ 3-4 ದಿನಗಳೊಳಗೆ ನೀರು ಪೂರೈಕೆಯಾಗದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು. ನಂತರ ಸ್ಥಳಕ್ಕೆ ಆಗಮಿಸಿದ ಪಂಚಾಯಿತಿ ಕಾರ್ಯದರ್ಶಿ 3-4 ದಿನಗಳಲ್ಲಿ ಎಲ್ಲ ತಾಂತ್ರಿಕ ದೋಷಗಳನ್ನು ಸರಿಪಡಿಸಿ ನೀರು ಸರಬರಾಜು ಮಾಡುವ ಭರವಸೆ ನೀಡಿದಾಗ ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

