ಬಳ್ಳಾರಿ

ವಿದ್ಯಾರ್ಥಿಗಳ ಸಾವು: ಕರವೇ ರಸ್ತೆ ತಡೆ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಸೆ. 2
ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡ ಬಣ) ವತಿಯಿಂದ ತಾಲೂಕಿನ ಕುಡಿತಿನಿ ಗ್ರಾಮದಲ್ಲಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ದಾರುಣ ಸಾವು ಕಂಡ ವಿದ್ಯಾರ್ಥಿಗಳ ಪೋಷಕರಿಗೆ ಪರಿಹಾರ ಘೋಷಣೆ, ವರ್ತುಲ ರಸ್ತೆ ನಿರ್ಮಾಣ, ಅಂಬುಲೆನ್ಸ್ ವ್ಯವಸ್ಥೆ, 50 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆ ಚಳವಳಿ ಹಮ್ಮಿಕೊಳ್ಳಲಾಯಿತು.
ಕರವೇ ಜಿಲ್ಲಾಧ್ಯಕ್ಷ ಸುರೇಶ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬರುವ ಪ್ರಮುಖ ಗ್ರಾಮವಾದ ಕುಡಿತಿನಿ ಗ್ರಾಮದ ಸುತ್ತಮುತ್ತ ಹಲವು ಕಾರ್ಖಾನೆಗಳು, ಉದ್ಯಮಗಳಿದ್ದು, ದಿನ ನಿತ್ಯವೂ ಸಾವಿರಾರು ಬೃಹತ್ ಮತ್ತು ಸಾರ್ವಜನಿಕ ಸಾಗಾಣಿಕಾ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಆದರೆ ಈ ರಸ್ತೆಯು ಅಪಘಾತಗಳಿಗೆ ಅಹ್ವಾನದಂತಿದ್ದು, ಅಪಘಾತಗಳು ಸಾಮಾನ್ಯ ಎನ್ನಿಸುವಷ್ಟು ಸಂಭವಿಸುತ್ತಿವೆ. ನೂರಾರು ಜೀವಗಳು ಪ್ರಾಣ ಕಳೆದುಕೊಂಡಿವೆ. ಈ ಕುರಿತು ಸರ್ಕಾರಕ್ಕೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಅವರ ಸಾವಿಗೆ ಸ್ಥಳೀಯ ಶಾಸಕ, ಸರ್ಕಾರದ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಸಾಂತ್ವನದ ಮಾತುಗಳೂ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೇಗ ನಿಯಂತ್ರಕ ಅಳವಡಿಸಿ: ಶೀಘ್ರ ಸರ್ಕಾರ ಈ ಅಪಘಾತದಲ್ಲಿ ಮರಣ ಹೊಂದಿದ ವಿದ್ಯಾರ್ಥಿಗಳ ಪೋಷಕರಿಗೆ ಪರಿಹಾರ ಘೋಷಿಸಬೇಕು. ಈ ಗ್ರಾಮದ ಮೂಲಕ ಹಾದು ಹೋಗುವ ಬೃಹತ್ ಸಾಗಾಣಿಕಾ ವಾಹನಗಳಿಗೆ ಪರ್ಯಾಯವಾಗಿ ವರ್ತುಲ ರಸ್ತೆ ನಿರ್ಮಿಸಬೇಕು. ಕುಡಿತಿನಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗುವಂತೆ 50 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು. ಗ್ರಾಮದ ಜನರ ತುರ್ತು ವೈದ್ಯಕೀಯ ಸೇವೆಗಳ ಸೌಲಭ್ಯಕ್ಕಾಗಿ 108 ಅಂಬುಲೆನ್ಸ್ ವಾಹನದ ವ್ಯವಸ್ಥೆ ಮಾಡಬೇಕು. ವೇಗವಾಗಿ ಚಲಿಸುವ ವಾಹನಗಳಿಗೆ ವೇಗ ನಿಯಂತ್ರಕಗಳನ್ನು ಅಳವಡಿಸಬೇಕು ಎಂದು ಅವರು ಆಗ್ರಹಿಸಿದರು.
ಬೆಳಗ್ಗೆ 9 ಗಂಟೆಗೆ ಆರಂಭವಾದ ಕುಡಿತಿನಿ ಗ್ರಾಮ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆಯಿತು. ಕರವೇ ಕಾರ್ಯಕರ್ತರು, ಕುಡಿತಿನಿ, ಸುಲ್ತಾನಪುರ, ತಿಮ್ಮಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ನೂರಾರು ನಾಗರಿಕರು, ಗ್ರಾಮದ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ರಸ್ತೆ ತಡೆ ಚಳವಳಿಯಲ್ಲಿ ಭಾಗವಹಿಸಿದ್ದರು.
ಬಂದ್ ಹಿನ್ನೆಲೆಯಲ್ಲಿ ಗ್ರಾಮದ ಎಲ್ಲಾ ಅಂಗಡಿ, ಮುಂಗಟ್ಟುಗಳ ಮಾಲೀಕರು ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಬೆಂಬಲ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.