ವಿದ್ಯಾರ್ಥಿ ನಿಗೂಢ ಸಾವು: ಧರಣಿ
ಬಳ್ಳಾರಿ: ದಲಿತ ವಿದ್ಯಾರ್ಥಿ ಎಸ್. ಪಾಲ್ಕುಮಾರ್ ನಿಗೂಢ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಗರದ ಡಿಸಿ ಕಚೇರಿ ಮುಂಭಾಗ ಸೋಮವಾರ ಧರಣಿ ನಡೆಸಿದರು.
ವಿದ್ಯಾರ್ಥಿಯ ನಿಗೂಢ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ, ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಬಂಧಿಸಿ, ಉಗ್ರ ಶಿಕ್ಷೆಗೊಳಪಡಿಸಬೇಕು ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.
ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ದುರುಗಪ್ಪ ತಳವಾರ್ ಧರಣಿಯ ನೇತೃತ್ವ ವಹಿಸಿ ಮಾತನಾಡಿ, ಆಗಸ್ಟ್ 18ರಂದು ನಗರದ ಹೊರವಲಯದ ಅಲ್ಲೀಪುರ ಸಮೀಪದ ವಿನಾಯಕ ನಗರದ ರೇಲ್ವೆ ಹಳಿಯ ಮೇಲೆ ಎಸ್. ಪಾಲ್ಕುಮಾರ್ (14) ವಿದ್ಯಾರ್ಥಿಯ ರುಂಡ ಮತ್ತು ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿಯ ಶವ ಪರೀಕ್ಷೆ ನಡೆಸಲಾಗಿದೆ. ಆದರೆ, ಇದುವರೆಗೂ ಸತ್ಯಾಸತ್ಯತೆ ತಿಳಿದು ಬಂದಿಲ್ಲ. ಕೂಡಲೇ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ವಿದ್ಯಾರ್ಥಿಯ ಶವ ದೊರೆತ ಸ್ಥಳದಲ್ಲಿ ಶವದ ಸ್ಥಿತಿ ನೋಡಿದರೆ ಇದು ಹತ್ಯೆ ಎಂಬ ಶಂಕೆ ಮೂಡುತ್ತಿದ್ದು, ಸಾವಿನ ಹಿಂದೆ ಇರಬಹುದಾದ ದುಷ್ಕರ್ಮಿಗಳನ್ನು ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಂತರ ಈ ಕುರಿತು ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಧರಣಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರಾದ ಪಿ.ತಾಯಪ್ಪ, ಚಿಕ್ಕಗಾದಿಲಿಂಗಪ್ಪ, ಎಚ್. ಕುಮಾರಸ್ವಾಮಿ, ಡಿ. ವೀರೇಶ್, ಈ. ಪರಶುರಾಮ, ಖಜಾಂಚಿ ಎಚ್. ದುರುಗಣ್ಣ ಪಾಲ್ಗೊಂಡಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

