ಹೈ-ಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಸೆ.17
ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ, ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ರಾಜ್ಯ ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ತಿಳಿಸಿದರು.
ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸರ್ದಾರ್ ವಲ್ಲಭಭಾಯಿ ಪಟೇಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
371(ಜೆ) ಶೀಘ್ರವೇ ಅನುಷ್ಠಾನಕ್ಕೆ: ಕೇಂದ್ರದ ಕಾಂಗ್ರೆಸ್ ಸರ್ಕಾರವು ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 371(ಜೆ) ವಿಧಿಗೆ ತಿದ್ದುಪಡಿ ತಂದು, ಸಂಸತ್ತಿನ ಉಭಯ ಸದನಗಳಲ್ಲಿಯೂ ಅನುಮೋದನೆ ಪಡೆದಿದೆ. ಅಂತೆಯೇ ರಾಜ್ಯ ಸರ್ಕಾರವು 371(ಜೆ) ತಿದ್ದುಪಡಿಯ ಕರಡು ನಿಯಮಾವಳಿಗಳನ್ನು ಸಿದ್ಧಪಡಿಸಿ ಸರ್ಕಾರದಿಂದ ಅನುಮೋದನೆ ಪಡೆದು, ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಲಾಗಿದೆ. ಶೀಘ್ರವೇ ಅನುಷ್ಠಾನಕ್ಕೆ ಬರಲಿದೆ ಎಂದು ತಿಳಿಸಿದರು.
ಅಕ್ರಮ ಚಟುವಟಿಕೆಗೆ ಕಡಿವಾಣ: ಹೈದರಾಬಾದ್ ಕರ್ನಾಟಕ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ನಾವೆಲ್ಲರೂ ಒಗ್ಗೂಡಿ, ಒಟ್ಟಾಗಿ ಶ್ರಮಿಸೋಣ, ದುಡಿಯೋಣ ಎಂದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕನ್ನಡ ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿಗಳ ರಕ್ಷಣೆಗೆ ಬದ್ಧವಾಗಿದೆ. ಅತ್ಯಮೂಲ್ಯ ನೈಸರ್ಗಿಕ ಸಂಪತ್ತಿನ ರಕ್ಷಣೆಗೆ ಕಟಿಬದ್ಧವಾಗಿದ್ದು, ಯಾವುದೇ ರೀತಿಯ ಅಕ್ರಮ ಚಟುವಟಿಕೆಯನ್ನು ಪ್ರೋತ್ಸಾಹಿಸದೇ, ಸಂಪೂರ್ಣವಾಗಿ ಮಟ್ಟ ಹಾಕಲಿದೆ ಎಂದರು. ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿಧಾನ ಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ಸಿಂಗ್ ರಾಥೋರ್, ಜಿಪಂ ಸಿಇಒ ಮಂಜುನಾಥ ನಾಯಕ್, ಸಹಾಯಕ ಆಯುಕ್ತ ಅನಿರುದ್ಧ ಶ್ರವಣ್, ಜಿಪಂ ಸದಸ್ಯರಾದ ವಂಸತ್, ಶಶಿಧರ, ನಳಿನ ವೀರಭದ್ರಪ್ಪ, ಮತ್ತಿತರರು ಇದ್ದರು. ಅಪರ ಜಿಲ್ಲಾಧಿಕಾರಿ ವೆಂಕಟೇಶ್ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

