ಬಳ್ಳಾರಿ

ರಾಜಕೀಯ ದಾಹಕ್ಕೆ ಕಾರ್ಮಿಕರು ಬಲಿ

Published On :

ಬಳ್ಳಾರಿ: ಕೇಂದ್ರದಲ್ಲಿ ಅಧಿಕಾರ ದಕ್ಕಿಸಿಕೊಳ್ಳಲು ಹರಸಾಹಸಪಡುತ್ತಿರುವ ರಾಷ್ಟ್ರೀಯ ಪಕ್ಷಗಳಿಗೆ, ಚುನಾಯಿತ ಮಂದಿಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಕಾರ್ಮಿಕರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಪ್ರಸನ್ನ ಕುಮಾರ್ ಆರೋಪಿಸಿದರು.
ಅವರು ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಸಿಐಟಿಯು ಸಮಿತಿಯ ಸಭೆಯಲ್ಲಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ದೇಶದ ಸಂಪತ್ತನ್ನು ಲೂಟಿ ಮಾಡಿ, ಕಾರ್ಮಿಕರ ಶೋಷಣೆ ಮಾಡಲು ಮುಂದಾಗುತ್ತಿವೆ. ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಮಾತನಾಡದ ರಾಷ್ಟ್ರೀಯ ಪಕ್ಷಗಳ ಪ್ರಧಾನಿ ಅಭ್ಯರ್ಥಿಗಳು ಕೇವಲ ಕಾರ್ಪೊರೇಟ್ ಕಂಪನಿಗಳ ಪರ ತಮ್ಮ ನಿಲುವು ವ್ಯಕ್ತಪಡಿಸುತ್ತಿದ್ದಾರೆ ಎಂದು ದೂರಿದರು.
ದೇಶದಲ್ಲಿ 45 ಕೋಟಿ ಅಸಂಘಟಿತ ಕಾರ್ಮಿಕರಿದ್ದಾರೆ. ನಿವೃತ್ತಿ ಹೊಂದಿದ ಪ್ರತಿಯೊಬ್ಬ ಕಾರ್ಮಿಕರಿಗೂ ರು. 3500 ಪಿಂಚಣಿ ನೀಡಬೇಕೆಂದು ಸಿಐಟಿಯು ಹೋರಾಡುತ್ತಿದೆ. ಕಾರ್ಮಿಕರ ಹಕ್ಕುಗಳಿಗಾಗಿ ಐಕ್ಯ ಹೋರಾಟ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸಿಐಟಿಯು ಅಖಿಲ ಭಾರತ ಜನರಲ್ ಕೌನ್ಸಿಲ್ ಸಭೆಯನ್ನು ಬಳ್ಳಾರಿಯಲ್ಲಿ ಜುಲೈ 11ರಿಂದ 14ರ ವರೆಗೆ ನಡೆಸಲಾಗುತ್ತಿದೆ ಎಂದರು.
ಸಭೆಯಲ್ಲಿ ವಕೀಲ ಕೆ. ಕೋಟೇಶ್ವರರಾವ್, ವಿಮಾ ನೌಕರ ಮುಖಂಡ ಟಿ.ಜಿ. ವಿಠ್ಠಲ್, ಅಂಗನವಾಡಿ ನೌಕರ ಸಂಘದ ರಾಜ್ಯ ಉಪಾಧ್ಯಕ್ಷೆ ಕೆ. ನಾಗರತ್ನಮ್ಮ, ಹಮಾಲಿ ಕಾರ್ಮಿಕ ಸಂಘದ ರಾಜ್ಯ ಮುಖಂಡ ಎಚ್. ತಿಪ್ಪಯ್ಯ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು. ಬಸವರಾಜ್, ಅಖಿಲ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗಣಪತಿ ಹೆಗಡೆ ಮಾತನಾಡಿದರು. ಸಿಐಟಿಯು ಜಿಲ್ಲಾಧ್ಯಕ್ಷ ಆರ್.ಎಸ್. ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಜೆ. ಸತ್ಯಬಾಬು ಸೇರಿದಂತೆ ಜಿಲ್ಲೆಯ ವಿವಿಧ ಕಾರ್ಮಿಕ ಸಂಘಟನೆಗಳ ಹಾಗೂ ಸಾಮೂಹಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲೆಯ ಜನಪರ ಚಳವಳಿ ನೇತಾರರು, ರೈತ, ಕಾರ್ಮಿಕ, ಮಹಿಳಾ, ವಿದ್ಯಾರ್ಥಿ ಯುವಜನ ಮುಖಂಡರನ್ನೊಳಗೊಂಡ ಸ್ವಾಗತ ಸಮಿತಿ ರಚಿಸಲಾಯಿತು.
ಗೌರವಾಧ್ಯಕ್ಷರಾಗಿ ಹೈ.ಕ ಹೋರಾಟ ಸಮಿತಿ ಸಂಚಾಲಕ ಪನ್ನರಾಜ್, ಅಧ್ಯಕ್ಷರಾಗಿ ಅಖಿಲ ಭಾರತ ವಕೀಲರ ಸಂಘದ ರಾಜ್ಯ ಮುಖಂಡ ಕೆ. ಕೋಟೇಶ್ವರ ರಾವ್, ಕಾರ್ಯಾಧ್ಯಕ್ಷರಾಗಿ ಟಿ.ಜಿ. ವಿಠ್ಠಲ್, ವಿಚಾರ ಸಂಕಿರಣ ಸಮಿತಿ ಸಂಚಾಲಕರಾಗಿ ಡಾ. ಅರವಿಂದ ಪಟೇಲ್, ಪ್ರಧಾನ ಕಾರ್ಯದರ್ಶಿಯಾಗಿ ಜೆ. ಸತ್ಯಬಾಬು, ಖಜಾಂಚಿಯಾಗಿ ಆರ್.ಎಸ್. ಬಸವರಾಜ್ ಅವರನ್ನು ಆಯ್ಕೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.