ಶುಲ್ಕ ಹೆಚ್ಚಳ ಅವೈಜ್ಞಾನಿಕ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಏ. 23
ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕ್ರಮವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹಾಂತೇಶ ನಾಯ್ಕ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಅತ್ಯಂತ ಹಿಂದುಳಿದ ಹೈದರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಅಸ್ತಿತ್ವಕ್ಕೆ ಬಂದಿರುವ ಸ್ಥಳೀಯ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯು ಪರೀಕ್ಷಾ ಶುಲ್ಕ ಹೆಚ್ಚಳದ ಮೂಲಕ ಈ ಭಾಗದ ಬಡ-ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಗ್ಗಂಟಾಗಿ ಪರಿಣಮಿಸಿದೆ. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳೇ ಅಧಿಕ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿವಿಯಲ್ಲಿ ಈ ರೀತಿ ರಾಜ್ಯ ಸರ್ಕಾರ ಆದೇಶದ ನೆಪದಲ್ಲಿ ಪರೀಕ್ಷಾ ಶುಲ್ಕ ಹೆಚ್ಚಳ ಮಾಡುವುದು ಅವೈಜ್ಞಾನಿಕ ಕ್ರಮವಾಗಿದೆ. ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳು ಪೂರ್ಣ ಪರೀಕ್ಷಾ ಶುಲ್ಕ ಕಟ್ಟಲು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ಈ ಅವೈಜ್ಞಾನಿಕ ಕ್ರಮವನ್ನು ಹಿಂತೆಗೆದುಕೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿದರು.
ಪರೀಕ್ಷಾ ಶುಲ್ಕವನ್ನು ಕೂಡಲೇ ಕಡಿತಗೊಳಿಸಬೇಕು. ಶಿಕ್ಷಕರ ಕೊರತೆ ನೀಗಿಸಬೇಕು. ವಿದ್ಯಾಸಿರಿ ಯೋಜನೆಯಿಂದಾಗಿ ವಿದ್ಯಾರ್ಥಿಗಳಿಗೆ ಸರಿಯಾದ ಸ್ಕಾಲರ್ಶಿಪ್ ದೊರಕದೆ ಇರುವುದನ್ನು ಕೂಡಲೇ ನಿವಾರಿಸಬೇಕು. ಕಾಲೇಜುಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್ ಸೌಲಭ್ಯ ಕಲ್ಪಿಸಬೇಕು ಎಂದರು.
ನಂತರ ಎಬಿವಿಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿಯ ಮುಖಂಡರಾದ ಕೆ.ಎಸ್. ರವಿಗೌಡ, ಸಿ.ಕೆ. ರಾಮಾಂಜಿನಿ, ರಾಘವೇಂದ್ರ, ವಿನೋದ್ ಕುಮಾರ್, ಸೌಮ್ಯ, ರೇಖಾ, ಓಂಪ್ರಕಾಶ್, ಮಹಿಪಾಲ್ ರೆಡ್ಡಿ, ಕೊಂಚಿಗೇರಪ್ಪ, ಸ್ಥಳೀಯ ಸರಳಾದೇವಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

