ಬಳ್ಳಾರಿ

ಸಂಹಿತೆಗೂ ಮುನ್ನ ಕ್ರಿಯಾಯೋಜನೆ ರೂಪಿಸಿ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಫೆ. 19
ಲೋಕಸಭೆ ಚುನಾವಣೆ ಘೋಷಣೆಯಾಗುವ ಸಂಭವವಿದ್ದು, ನೀತಿ ಸಂಹಿತೆ ಜಾರಿಯಾಗುತ್ತದೆ. ಹೀಗಾಗಿ ಯೋಜನೆಗಳ ಕ್ರಿಯಾಯೋಜನೆ ತಯಾರಿಸಿ ಅನುಮೋದನೆ ಪಡೆದು, ಫಲಾನುಭವಿಗಳ ಆಯ್ಕೆ ಮಾಡಬೇಕು. ಏನಾದರೂ ವ್ಯತ್ಯಾಸವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಜಿಪಂ ಸಿಇಒ ಮಂಜುನಾಥ್ ನಾಯಕ್ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಿಇಒ ಮಂಜುನಾಥ್ ನಾಯಕ್ ಮಾತನಾಡಿ, 2014-15ನೇ ಸಾಲಿನ ಕ್ರಿಯಾಯೋಜನೆಯನ್ನು ಫೆ. 20ರೊಳಗೆ ಜಿಪಂಗೆ ಸಲ್ಲಿಸಿ ಅನುಮೋದನೆ ಪಡೆಯಬೇಕು. 2008-09ರಿಂದ 2011-12ರೊಳಗಿನ ಬಾಕಿಯಿರುವ ಕಾಮಗಾರಿಗಳನ್ನು ಈ ತಿಂಗಳ 25ರೊಳಗಾಗಿ ಪೂರ್ಣಗೊಳಿಸಬೇಕು. ಜಿಪಂ ಪ್ರತಿನಿಧಿಗಳು ಕೇಳಿದ ಮಾಹಿತಿಯನ್ನು ಸಂಬಂಧಿಸಿದ ಅಧಿಕಾರಿಗಳು ಮರುದಿನವೆ ಒದಗಿಸಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಹಾಯವಾಣಿ ಕೇಂದ್ರ 24 ಗಂಟೆ ಕೆಲಸ ನಡೆಸಬೇಕು. ವಿವರಗಳನ್ನು ಪ್ರತಿದಿನ ಅಧಿಕಾರಿಗಳು ಪಡೆದು ಮಾಹಿತಿಯನ್ನು ಜಿಪಂಗೆ ನೀಡಬೇಕು. ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕು. ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಜಿಪಿಎಸ್‌ಗೆ ಅಳವಡಿಸಬೇಕು. ಖರ್ಚು, ವೆಚ್ಚದ ವಿವರವನ್ನು ಎಂಐಎಸ್‌ಗೆ ಅಪ್‌ಡೇಟ್ ಮಾಡಬೇಕು. ನಿರ್ಮಲ ಭಾರತ ಯೋಜನೆ, ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಯನ್ನು ವ್ಯವಸ್ಥಿತ ಕೈಗೊಳ್ಳಬೇಕು.
ಖಾತ್ರಿ ಯೋಜನೆಯಡಿ ಸಿಎಂ ಘೋಷಿಸಿದ ನೂತನ 5 ಯೋಜನೆಗಳ ಕ್ರಿಯಾಯೋಜನೆಗೆ ಅನುಮೋದನೆ ಪಡೆದು ಕಾಮಗಾರಿಯನ್ನು ಪ್ರಾರಂಭಿಸಬೇಕು. ಖಾತ್ರಿ ಯೋಜನೆಯಡಿ ಅರಣ್ಯೀಕರಣ, ಜಲಾನಯನ ಕಾಮಗಾರಿ, ಪಶುಸಂಗೋಪನಾ ಇಲಾಖೆ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಬೇಕು. ಶೌಚಾಲಯ ನಿರ್ಮಾಣ ಯೋಜನೆಯಡಿ ತ್ವರಿತ ಪ್ರಗತಿ ಯೋಜನೆಗೊಳಪಡಿಸಿರುವ ಬಳ್ಳಾರಿ ತಾಲೂಕಿನಲ್ಲಿ ಶೌಚಾಲಯ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ತ್ವರಿತ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಹಗರಿಬೊಮ್ಮನಹಳ್ಳಿ, ಹಡಗಲಿ ಮತ್ತು ಕೂಡ್ಲಿಗಿ ತಾಲೂಕಿನಲ್ಲಿ ಡಿಫ್ಲೋರೈಡ್ ಘಟಕಗಳ ನಿರ್ಮಾಣ  ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗಳಿಸಿ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಬೇಕು.
ಕಾಮಗಾರಿ ನಿರ್ವಹಿಸಿ: ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ ಮಾತನಾಡಿ, ಬೇಸಿಗೆ ಕಾಲ ಸಮೀಪಿಸುತ್ತಿರುವುದರಿಂದ ಕುಡಿಯುವ ನೀರು ಹಾಗೂ ಜಾನುವಾರಗಳಿಗೆ ಮೇವು ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಬರ ಇರುವ ಕಡೆ ಜಾನುವಾರುಗಳಿಗೆ ಮೇವು ಸಂಗ್ರಹಿಸಿಡಬೇಕು. ಗೋಶಾಲೆಗಳನ್ನು ಅಗತ್ಯವಿರುವೆಡೆ ತೆರೆಯಬೇಕು. ಜಾನುವಾರುಗಳು ಯಾವುದೆ ರೋಗಕ್ಕೆ ಒಳಗಾಗಬಾರದು. ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮಸ್ಯೆ ಇರುವೆಡೆ ಬೋರ್‌ವೆಲ್ ಹಾಗೂ ಪೈಪ್‌ಲೈನ್ ದುರಸ್ತಿ ಕಾಮಗಾರಿ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸಬೇಕು. ವೈದ್ಯಾಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು. ವೈದ್ಯರ ಕೊರತೆ ನೀಗಿಸಬೇಕು ಎಂದು ಉಪಾಧ್ಯಕ್ಷೆ ಮಮತಾ ಸುರೇಶ್ ತಿಳಿಸಿದರು.
ಸಭೆಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಜಿಪಂ ಉಪಕಾರ್ಯದರ್ಶಿ ನಂದೀಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.