ಬಳ್ಳಾರಿ

ಕಳಂಕಿತರನ್ನು ಕೈ ಬಿಡಲು ಆಗ್ರಹ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜ. 6
ಅನೇಕ ಆರೋಪಗಳನ್ನು ಹೊಂದಿ ಕಳಂಕಿತರಾದ ಸಚಿವ ಡಿ.ಕೆ. ಶಿವಕುಮಾರ್ ಮತ್ತು ರೋಷನ್ ಬೇಗ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಸೋಮವಾರ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಅಂಡರ್‌ಬ್ರಿಡ್ಜ್, ಗಡಿಗಿ ಚನ್ನಪ್ಪ ವೃತ್ತದ ಮೂಲಕ ಡಿಸಿ ಕಚೇರಿ ತಲುಪಿತು.
ಸರ್ಕಾರದಿಂದ ವಂಚನೆ: ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ತಾನೇ ತೆಗೆದುಕೊಂಡ ನಿರ್ಧಾರಗಳನ್ನು ಬದಲಿಸಿ ಮತ್ತೊಂದು ನಿರ್ಧಾರವನ್ನು ಕೈಗೊಳ್ಳುವ ಮೂಲಕ ರಾಜ್ಯದ ಜನರನ್ನು ನಿರಂತರ ವಂಚಿಸುತ್ತಿದೆ. ತನ್ನದು ಪರಿಶುದ್ಧ, ಪ್ರಾಮಾಣಿಕ ಮಂತ್ರಿಮಂಡಲ, ಕಳಂಕಿತ ಸಚಿವರಿಗೆ ಸ್ಥಾನವಿಲ್ಲ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿಗಳು ಡಿ.ಕೆ. ಶಿವಕುಮಾರ್, ರೋಷನ್ ಬೇಗ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡು ತಾವು ನಡೆಯುತ್ತಿರುವ ದಾರಿಯನ್ನು ಸ್ಪಷ್ಟವಾಗಿ ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಬಣ್ಣ ಬಯಲು: ಅಕ್ರಮ ಗಣಿಗಾರಿಕೆ ವಿರುದ್ಧ ಬೆಂಗಳೂರಿನಿಂದ ಬಳ್ಳಾರಿ ವರೆಗೆ ಪಾದಯಾತ್ರೆ ನಡೆಸಿದ್ದ ಅಂದಿನ ವಿರೋಧ ಪಕ್ಷದ ನಾಯಕರೂ ಆಗಿರುವ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಣಿ ಅಕ್ರಮ ಸೇರಿದಂತೆ ಇನ್ನಿತರೆ ಅಕ್ರಮ, ಭ್ರಷ್ಟಾಚಾರಗಳ ಆರೋಪ ಹೊತ್ತ ಡಿ.ಕೆ. ಶಿವಕುಮಾರ್, ರೋಷನ್ ಬೇಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರದ ನಿಜ ಬಣ್ಣ ಬಯಲಾಗಿದೆ ಎಂದು ಹೇಳಿದರು.
ಕಾಂಗ್ರೆಸ್‌ಗೆ ತಕ್ಕಪಾಠ: ಈ ಸಚಿವರು ಕಳಂಕಿತರಲ್ಲ, ತಾವು ಸ್ವಚ್ಛ, ಕಳಂಕ ರಹಿತ ಎಂದು ಹೇಳುತ್ತಿರುವ ಸಿಎಂ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಕಳಂಕಿತ ಸಚಿವರನ್ನು ಸಂಪುಟದಿಂದ ಕೈಬಿಡುವ ತನಕ ಬಿಜೆಪಿ ನಿರಂತರ ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದರು.
ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಕೆ.ಎ. ರಾಮಲಿಂಗಪ್ಪ, ಎ.ಎಂ. ಸಂಜಯ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಾರಿಗೌಡ, ಶಿವಕುಮಾರ್, ಹನುಮಂತಪ್ಪ, ಕೆ.ಎ. ವೇಮಣ್ಣ, ಪಂತರ್ ಜಯಂತ್, ಕೆ.ಆರ್. ಮಲ್ಲೇಶ್‌ಕುಮಾರ್, ಸುಮಾರೆಡ್ಡಿ, ಶಿವಕೃಷ್ಣ, ವಿಜಯಕುಮಾರ್, ಎಂ. ಗೋವಿಂದಪ್ಪ, ಎಂ. ಮಲ್ಲಯ್ಯ, ಬಿ. ಪರಂಧಾಮ, ಕೆ. ಶಂಕರರೆಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.