ಎಲ್ಲ ಸಚಿವರ ಮನೆ ಮುಂದೆ ಧರಣಿ ನಾಳೆ
ಬಳ್ಳಾರಿ: ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರಲು ಆಗ್ರಹಿಸಿ ಜು. 19ರಂದು ರಾಜ್ಯ ಸರ್ಕಾರದ ಎಲ್ಲ ಸಚಿವರ ಮನೆ ಮುಂದೆ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎಚ್. ಹನುಮಂತಪ್ಪ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿಯೇ ಮಾದಿಗರು ಬಹುಸಂಖ್ಯೆಯಲ್ಲಿದ್ದಾರೆ ಎಂದು ಹಾವನೂರ ವರದಿ, ಎ.ಜೆ. ಸದಾಶಿವ ಆಯೋಗದ ವರದಿಗಳು ಸಾರಿ ಹೇಳುತ್ತಿವೆ. ಆದರೆ ಪರಿಶಿಷ್ಟ ಜಾತಿ ಮೀಸಲಾತಿ ಸೌಲಭ್ಯದಲ್ಲಿ ಮಾದಿಗರು ಪಡೆಯುತ್ತಿರುವ ಪಾಲು ತೀರಾ ಕಡಿಮೆಯಾಗಿದೆ. ಇದನ್ನು ಮನಗಂಡಿರುವ ಮಾದಿಗ ಮೀಸಲಾತಿ ಹೊರಾಟ ಸಮಿತಿ ಮತ್ತು ಇತರೆ ದಲಿತ ಪರ ಸಂಘಟನೆಗಳು ಹಲವಾರು ವರ್ಷಗಳಿಂದ ನಡೆಸಿದ ಹೋರಾಟದ ಫಲವಾಗಿ ನ್ಯಾ.ಎ.ಜೆ. ಸದಾಶಿವ ಆಯೋಗ ರಚಿಸಲ್ಪಟ್ಟು, ಆಯೋಗವು ತನ್ನ ವರದಿಯನ್ನು ನೀಡಿದೆ ಎಂದರು.
ನ್ಯಾ. ಸದಾಶಿವ ಆಯೋಗದ ವರದಿ ಅನುಸಾರ ಮಾದಿಗ ಜನಾಂಗಕ್ಕೆ ಶೇ. 6 ಹಾಗೂ ಹೊಲೆಯರಿಗೆ ಶೇ. 5ರಷ್ಟು ಒಳ ಮೀಸಲಾತಿ ದೊರೆಯಬೇಕಿದೆ. ಅಲ್ಲದೇ, ರಾಜಕೀಯ ಪ್ರಾತಿನಿಧ್ಯ ಸರ್ಕಾರದ ಸವಲತ್ತುಗಳಿಂದ ವಂಚಿತರಾಗಿರುವ ಮಾದಿಗ, ಚಲವಾದಿ, ಸಮಗಾರ, ಡೋಹರ, ಮೋಚಿ, ಮೆಹತಾರ, ಹರಳಯ್ಯ, ಮಾದಿಗದಾಸ, ಹೊಲೆಯದಾಸ, ಚೆನ್ನದಾಸ, ಸುಡುಗಾಡುಸಿದ್ಧ, ಶಿಳ್ಳೆಕ್ಯಾತ, ಡಕ್ಕಲಿಗ, ಇತ್ಯಾದಿ ನೂರಾರು ಉಪಜಾತಿಗಳಿಗೆ ಶಾಸನ ಬದ್ಧವಾಗಿ ನೀಡಿದ ಮೀಸಲಾತಿಯನ್ನು ಜನಸಂಖ್ಯೆ ಆಧಾರಿತ ಮೀಸಲಾತಿಯನ್ನು ವರ್ಗೀಕರಿಸಿ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಬೇಕು ಎಂದು ಅವರು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸದಿದ್ದರೆ ಪ್ರತಿಭಟನೆಯ ತೀವ್ರತೆಯನ್ನು ಹೆಚ್ಚಿಸಲಾಗುವುದು. ಮಾದಿಗ ಸಮುದಾಯದ ಜನ ಬೀದಿಗಿಳಿದು ಉಗ್ರ ಹೋರಾಟ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.
ಸಚಿವ ಆಂಜನೇಯ ರಾಜಿನಾಮೆ ನೀಡಲಿ:
ಮಾದಿಗ ಜನಾಂಗಕ್ಕೆ ಒಳ ಮೀಸಲಾತಿ ನೀಡಬೇಕು ಎನ್ನುವ ವಾಸ್ತವಾಂಶದ ವರದಿ ಸಲ್ಲಿಸಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಕಾರ್ಯದರ್ಶಿ ಎ. ಈಶ್ವರಪ್ಪ, ಜಿಲ್ಲಾಧ್ಯಕ್ಷ ಸಿ. ಸೋಮಶೇಖರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಗುರುಸಿದ್ದಪ್ಪ, ಜಿಲ್ಲಾ ಉಪಾಧ್ಯಕ್ಷ ರಾಮಣ್ಣ ತೊಂಡಲಂ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

