ಬಳ್ಳಾರಿ

ನದಿಯಿಂದ ಬನ್ನಿಕಲ್ಲು ಕೆರೆಗೆ ಶಾಶ್ವತ ನೀರು

Published On :

ಹಗರಿಬೊಮ್ಮನಹಳ್ಳಿ: ತುಂಗಭದ್ರಾ ನದಿಯಿಂದ ಹೂವಿನಹಡಗಲಿ ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನ 11 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ರಾಜ್ಯ ಸರ್ಕಾರ ಅನುಮೊದನೆ ನೀಡಿದ್ದು, ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ ತಿಳಿಸಿದ್ದಾರೆ.
ಗುರುವಾರ ಸಂಜೆ ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ ಕೆರೆ ವೀಕ್ಷಣೆ ಆನಂತರ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ಹೂವಿನಹಡಗಲಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ತಾಲೂಕಿನ ಬನ್ನಿಕಲ್ಲು ಕೆರೆ ಈ ಯೋಜನೆಯಲ್ಲಿ ಸೇರ್ಪಡೆಗೊಂಡಿದೆ. ಈ ಕೆರೆಗೆ ಶಾಶ್ವತ ನೀರು ತುಂಬಿಸುವುದರಿಂದ ಅಂರ್ತಜಲ ವೃದ್ಧಿಯಾಗಿ ಕುಡಿವ ನೀರು ಮತ್ತು ಈ ಭಾಗದ ಕೃಷಿಗೆ ಶಾಶ್ವತ ನೀರಾವರಿ ಸೌಲಭ್ಯ ಸಿಗಲಿದೆ ಎಂದರು.
ಮಳೆಯಾಶ್ರಿತ ಬನ್ನಿಕಲ್ಲು ಕೆರೆಗೆ ಶಾಶ್ವತ ನೀರು ತುಂಬಿಸುವ ಬೇಡಿಕೆ ಈ ಭಾಗದಲ್ಲಿ ಬಹುದಶಕಗಳಿಂದಲೂ ಇತ್ತು. ನಾನು ಇಲ್ಲಿಂದ ಆಯ್ಕೆಯಾದ ತಕ್ಷಣವೇ ಈ ಕೆರೆಗೆ ನೀರು ತುಂಬಿಸುವ ಯೋಜನೆ ಜಾರಿಗೆ ಸಾಕಷ್ಟು ಪ್ರಯತ್ನಿಸಿದ ಫಲವಾಗಿ ಇಂದು ಈ ಕೆರೆ ಶಾಶ್ವತ ನೀರು ಪಡೆಯಲಿದೆ ಎಂದರು.
ತಾಲೂಕಿನ ಮಾಲ್ವಿ ಡ್ಯಾಂಗೆ ತುಂಗಭದ್ರಾ ನದಿಯಿಂದ ಶಾಶ್ವತ ನೀರೊದಗಿಸುವ ಯೋಜನೆ ಸಂಬಂಧಿಸಿದಂತೆ ಈಗಾಗಲೇ ಡಿಪಿಆರ್ ಸರ್ವೆಕಾರ್ಯ ಮಾಡಿಸಲಾಗಿದೆ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ, ಅಲ್ಲಿಂದ ತಾಂತ್ರಿಕ, ಹಣಕಾಸು ಇಲಾಖೆ ಅನುಮೊದನೆ ಪಡೆದುಕೊಳ್ಳಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಮುಖ್ಯವಾಗಿ ಬಳ್ಳಾರಿ ಸೇರಿದಂತೆ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಜಾರಿಗೆ ಬಜೆಟ್‌ನಲ್ಲಿ ಪ್ರತಿವರ್ಷ ರು. 10 ಸಾವಿರ ಕೋಟಿ ಒದಗಿಸಲಾಗುತ್ತಿದೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಎಂದರು.  
ಇಟಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಗೋಳ ಚಿದಾನಂದ, ಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಪರಮೇಶ್ವರಪ್ಪ, ಎಪಿಎಂಸಿ ಅಧ್ಯಕ್ಷ ವಾರದಗೌಸ್ ಮೊಯಿದ್ದಿನ್, ಮುಖಂಡರಾದ ಅರವಳ್ಳಿ ವೀರಣ್ಣ, ಅಟವಾಳಿಗಿ ಕೊಟ್ರೇಶ್, ಕಾಗಿ ಅಂಬಣ್ಣ, ಅರುಣುಕುಮಾರ್, ಉಮೇಶ, ತಾಪಂ ಇಒ ಬಿಎಂಎಸ್ ವೀರಯ್ಯ, ಪಂರಾಇ ಜೆಇ ಅಂಜನೇಯಶೆಟ್ಟಿ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.