ಬಳ್ಳಾರಿ

ರೈತ ಸಂಘದಿಂದ 21ರಂದು ಹೆದ್ದಾರಿ ತಡೆ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜೂ. 18
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಜೂ. 21ರಂದು ಕೊಪ್ಪಳ ಜಿಲ್ಲೆಯ ಹಿಟ್ನಾಳ್ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಬೃಹತ್ ಹೆದ್ದಾರಿ ತಡೆ ಹಮ್ಮಿಕೊಳ್ಳಲಾಗಿದ ಎಂದು ಸಂಘದ ಅಧ್ಯಕ್ಷ ಚಾಮರಸ ಮಾಲಿಪಾಟೀಲ್ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ಶೇ. 33ರಷ್ಟು ಹೂಳು ತುಂಬಿದ್ದು, ನೀರು ಶೇಖರಣೆಯ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. ಆದರೆ ರಾಜಕೀಯ ಪಕ್ಷಗಳು ತಮ್ಮ ಅಧಿಕಾರಾವಧಿಯಲ್ಲಿ ಬರೀ ಚರ್ಚೆಗಳಿಗಷ್ಟೇ ಸೀಮಿತವಾಗಿವೆಯೇ ವಿನಃ ಅಗತ್ಯ ಪರಿಹಾರ ಕ್ರಮ ಕೈಗೊಂಡಿಲ್ಲ. ಈ ಹಿಂದಿನ ಬಿಜೆಪಿ ಸರ್ಕಾರವು ತನ್ನ ಆಡಳಿತಾವಧಿಯಲ್ಲಿ ಹೂಳಿನ ಬಗ್ಗೆ ಚಿಂತನೆಗಷ್ಟೆ ಪ್ರಾಮುಖ್ಯತೆ ನೀಡಿತ್ತು. ಹಾಗೆ ಈಗಿನ ಕಾಂಗ್ರೆಸ್ ಸರ್ಕಾರವು ಕ್ರಮಕೈಗೊಳ್ಳುತ್ತಿಲ್ಲ ಎಂದರು. ರಾಜ್ಯ ಸರ್ಕಾರದ ನಿರಂತರ ಜ್ಯೋತಿ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ಅಪಾರ ಹಣ ವ್ಯಯವಾಗಲಿದೆಯೇ ವಿನಃ ರೈತರಿಗೆ ಎಳ್ಳಷ್ಟೂ ಉಪಯೋಗವಿಲ್ಲ. ಈ ಯೋಜನೆಯಡಿ ಮನೆಗಳಿಗೆ ಮಾತ್ರ 24 ಗಂಟೆ ವಿದ್ಯುತ್ ಪೂರೈಕೆಯಾಗುತ್ತದೆ. ಆದರೆ ಪಂಪ್‌ಸೆಟ್‌ಗಳಿಗೆ ಕೇವಲ 6 ತಾಸು ನೀಡುವುದರಿಂದ ಹೇಗೆ ನೀರಾವರಿ ಮಾಡಲು ಸಾಧ್ಯ. ಆದ್ದರಿಂದ ಪಂಪ್‌ಸೆಟ್‌ಗಳಿಗೂ ನಿರಂತರ ಜ್ಯೋತಿ ಅನ್ವಯವಾಗಬೇಕು ಎಂದರು.
ಸಾಗುವಳಿ ಪತ್ರ ಕೊಡಿ: ಭೂಹೀನ ರೈತರು ಕಳೆದ ಅನೇಕ ವರ್ಷಗಳಿಂದ ಅರಣ್ಯಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಆದರೆ ಸರ್ಕಾರ ರೈತರನ್ನು ಹೊರದಬ್ಬಿ ಒಕ್ಕಲೆಬ್ಬಿಸಲಾಗುತ್ತಿದೆ ಇದನ್ನು ಕೂಡಲೇ ನಿಲ್ಲಿಸಬೇಕು. ರೈತರಿಗೆ ಸಾಗುವಳಿ ಪತ್ರ ನೀಡಬೇಕು ಎಂದು ಆಗ್ರಹಿಸಿದರು. ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಸರ್ಕಾರ ನಿಗದಿಪಡಿಸಿದ ಹಣವನ್ನು ನೀಡಲು ಸರ್ಕಾರ ಕೂಡಲೇ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ತುಂಗಭದ್ರಾ ಜಲಾಶಯದಿಂದ ಬೃಹತ್ ಕಾರ್ಖಾನೆಗಳಿಗೆ ನೀರು ಪೂರೈಕೆಯಾಗುವುದನ್ನು ನಿಲ್ಲಿಸಿ, ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಕಾರ್ಖಾನೆಗಳಿಗೆ ಸರ್ಕಾರ ಆದೇಶಿಸಬೇಕು ಎಂದರು.
ರೈತ ಸಂಘ ಪುನಶ್ಚೇತನ: ರೈತ ಸಂಘ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದ್ದು, ವಿಭಾಗೀಯವಾರು ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗುವುದು. ಜೂ. 21ರಂದು ನಡೆಯುವ ರಸ್ತೆ ತಡೆಯಲ್ಲಿ 10ರಿಂದ 12 ಜಿಲ್ಲೆಗಳ ರೈತರು ಪಾಲ್ಗೊಳ್ಳಲಿದ್ದು, ರೈತರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ದರೂರು ಪುರುಷೋತ್ತಮಗೌಡ, ರೈತ ಮುಖಂಡರಾದ ಸಂತೋಷ ಕುಮಾರ್, ಮಲ್ಲಾರೆಡ್ಡಿ, ಸಾಗರ್‌ಗೌಡ, ಪಂಪಾಪತಿ, ಉಮೇಶ್ ಗೌಡ ಸೇರಿದಂತೆ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.