ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
ಕನ್ನಡಪ್ರಭ ವಾರ್ತೆ, ಕೊಪ್ಪಳ, ಮಾ. 7
16ನೇ ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಕೊಪ್ಪಳ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಕೈಗೊಂಡಿದ್ದು, ಎಲ್ಲ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ರಾಜಕೀಯ ಮುಖಂಡರು, ಅಧಿಕಾರಿಗಳು ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಪಿ. ಮೋಹನ್ರಾಜ್ ಸೂಚನೆ ನೀಡಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ. ಮಾ. 19ರಂದು ಚುನಾವಣಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಮಾ. 26 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಮರುದಿನ ಅವುಗಳ ಪರಿಶೀಲನೆ. ಮಾ. 29ರ ತನಕ ಉಮೇದುವಾರಿಕೆ ಹಿಂಪಡೆಯಲು ಅವಕಾಶವಿದೆ. ಏ. 17ರಂದು ಮತದಾನ, ಮೇ 16ರಂದು ಮತ ಎಣಿಕೆ. ಮೇ 28ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ವಾಹನ ಜಿಲ್ಲಾಡಳಿತ ಸುಪರ್ದಿಗೆ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಪಂ, ವಿವಿಧ ಸ್ಥಳೀಯ ಸಂಸ್ಥೆ, ಎಪಿಎಂಸಿ, ನಿಗಮ, ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ವಾಹನಗಳನ್ನು ಜಿಲ್ಲಾಡಳಿತದ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗಿದೆ. ಲೋಕಸಭೆ ಸದಸ್ಯರು, ಕಾಡಾ, ತಾಪಂ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಐಬಿ, ಸರ್ಕ್ಯೂಟ್ ಹೌಸ್ ವಶಕ್ಕೆ: ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಸರ್ಕಾರಿ ಬಂಗಲೆ, ಐಬಿ, ಸರ್ಕ್ಯೂಟ್ ಹೌಸ್ನಲ್ಲಿ ರಾಜಕೀಯ ಚಟುವಟಿಕೆ ನಡೆಸಲುಅವಕಾಶವಿಲ್ಲ. ಈ ನಿಟ್ಟಿನಲ್ಲಿ ಎಲ್ಲ ಸರ್ಕಾರಿ ಬಂಗಲೆಗಳನ್ನು ಆಯಾ ತಾಲೂಕಿನ ತಹಸೀಲ್ದಾರರು ತಮ್ಮ ಸುಪರ್ದಿಗೆ ಪಡೆಯಲು ಸೂಚನೆ ನೀಡಲಾಗಿದೆ.
ಬ್ಯಾನರ್, ಫಲಕಗಳ ತೆರವು: ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ನಗರ, ಪಟ್ಟಣ, ಗ್ರಾಮೀಣ ಪ್ರದೇಶದಲ್ಲಿ ರಾಜಕೀಯ ವ್ಯಕ್ತಿಗಳ ಭಾವಚಿತ್ರದ ಬಂಟಿಂಗ್ಸ್, ಹೋರ್ಡಿಂಗ್ಸ್, ಬ್ಯಾನರ್ಗಳು, ಇತರೆ ಪ್ರಚಾರ ಸಾಮಗ್ರಿಗಳನ್ನು ತಕ್ಷಣದಿಂದ ತೆರವುಗೊಳಿಸಲು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ಮುಖ್ಯಾಧಿಕಾರಿಗಳು ಹಾಗೂ ತಾಪಂ ಇಒಗೆ ಸೂಚಿಸಲಾಗಿದೆ.
ಧಾರ್ಮಿಕ ಸ್ಥಳಗಳ ಬಳಕೆ ನಿಷೇಧ: ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಪರೋಕ್ಷ ಅಥವಾ ಅಪರೋಕ್ಷವಾಗಿ ಚುನಾವಣಾ ಪ್ರಚಾರ ಕೈಗೊಳ್ಳುವಂತಿಲ್ಲ. ಯಾವುದೇ ಸಭೆ, ಸಮಾರಂಭ ಅಥವಾ ಇತರೆ ಕಾರ್ಯಕ್ರಮ, ಚಟುವಟಿಕೆ ನಡೆಸುವುದನ್ನು ನಿಷೇಧಿಸಲಾಗಿದೆ. ಈ ನಿಷೇಧಾಜ್ಞೆ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೇ 28ರ ವರೆಗೂ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆ ವ್ಯಾಪ್ತಿಯ ಎಲ್ಲ ಶಸ್ತ್ರಗಳನ್ನು ಪೊಲೀಸ್ ಇಲಾಖೆಯಲ್ಲಿ ಠೇವಣಿ ಮಾಡಿಕೊಳ್ಳುವಂತೆ ಎಸ್ಪಿಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಈ ಆದೇಶ ರಾಷ್ಟ್ರೀಕೃತ ಬ್ಯಾಂಕ್, ಆರ್ಬಿಐನಿಂದ ಮಾನ್ಯತೆ ಪಡೆದಿರುವ ಬ್ಯಾಂಕ್ಗಳಿಗೆ ಅನ್ವಯಿಸುವುದಿಲ್ಲ.
1836 ಮತಗಟ್ಟೆ: ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ 8 ವಿಧಾನಸಭೆ ಕ್ಷೇತ್ರಗಳು ಒಳಪಟ್ಟಿದ್ದು, ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರಗಳು; ರಾಯಚೂರು ಜಿಲ್ಲೆಯ ಸಿಂಧನೂರು ಮತ್ತು ಮಸ್ಕಿ ಹಾಗೂ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ವಿಧಾನಸಭಾ ಕ್ಷೇತ್ರಗಳು ಸೇರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

