ಬೀದರ್: ಮಕ್ಕಳು ಹಾಗೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ಕುರಿತು ಜಿಲ್ಲಾ ಅಭಿವೃದ್ಧಿ ವೇದಿಕೆ ನೇತೃತ್ವದಲ್ಲಿ ನಗರದ ಕರ್ನಾಟಕ ಕಾಲೇಜಿನಲ್ಲಿ ಮಂಗಳವಾರ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳ ಸಭೆ ನಡೆಯಿತು. ಇತ್ತೀಚಿನ ದಿನಗಳಲ್ಲಿ ದೇಶದ ಎಲ್ಲೆಡೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಕುರಿತು ಸಭೆಯಲ್ಲಿ ತೀವ್ರ ಕಳವಳ ವ್ಯಕ್ತವಾಯಿತು. ಮಕ್ಕಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಸಾಮೂಹಿಕ ಪ್ರಯತ್ನ ಅಗತ್ಯವಾಗಿದೆ ಎಂಬ ಅಭಿಪ್ರಾಯ ಕೇಳಿ ಬಂತು.
ಸಮಾಜದ ಪಾತ್ರವೂ ಮುಖ್ಯ: ದೌರ್ಜನ್ಯ ಪ್ರಕರಣಗಳಿಗೆ ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆ, ವೇಷಭೂಷಣಗಳೂ ಕಾರಣವಾಗುತ್ತಿವೆ ಎಂಬ ಚರ್ಚೆಯೂ ನಡೆಯಿತು. ಇಂಟರ್ನೆಟ್ ಹಾಗೂ ಮಾಧ್ಯಮಗಳಲ್ಲಿ ಅಶ್ಲೀಲ ಚಿತ್ರಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ಮನೆ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾತ್ರವಲ್ಲದೆ ಪಾಲಕರು, ಶಿಕ್ಷಣ ಸಂಸ್ಥೆಗಳು ಹಾಗೂ ಸಮಾಜದ ಪಾತ್ರವೂ ಮುಖ್ಯವಾಗಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು. ಶಿಕ್ಷಣ ಸಂಸ್ಥೆಗಳಲ್ಲಿ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ, ಮಹಿಳೆಯರಿಗೆ ಗೌರವ ನೀಡುವ ಕುರಿತು ಜಾಗೃತಿ ಮೂಡಿಸುವ ಮತ್ತಿತರ ಸಲಹೆಗಳು ವ್ಯಕ್ತವಾದವು. ಜಿಲ್ಲೆಯಲ್ಲಿ ಇಂಥ ಪ್ರಕರಣಗಳನ್ನು ತಡೆಯುವ ಮಾರ್ಗೋಪಾಯಗಳ ಕುರಿತೂ ಚರ್ಚೆ ನಡೆಯಿತು. ಜಿಲ್ಲಾಧಿಕಾರಿ ಡಾ. ಪಿ.ಸಿ. ಜಾಫರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪನ್ವಾರ್, ಜಿಲ್ಲಾ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಚೆನ್ನಬಸಪ್ಪ ಹಾಲಹಳ್ಳಿ, ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಅಷ್ಟೂರ, ಶಾಹೀನ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಅಬ್ದುಲ್ ಖದೀರ್, ರಾಮ ಮತ್ತು ರಾಜ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮಾಣಿಕಪ್ಪ ಗಾದಾ, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಪ್ರೊ. ಪೂರ್ಣಿಮಾ ಜಿ., ಮಹಮ್ಮದ್ ಆಸಿಫೊದ್ದೀನ್, ಡಾ. ಜಗನ್ನಾಥ ಹೆಬ್ಬಾಳೆ ಮತ್ತಿತರರು ಪಾಲ್ಗೊಂಡಿದ್ದರು.
Advertisement